ರಾಜ್ಯದ ಹೊಸ ಸರ್ಕಾರ ರಚನೆ ಕುರಿತು ಚರ್ಚಿಸಲು ಸಂಭಾವ್ಯ ಉತ್ತರಾಧಿಕಾರಿ ಎಂದೇ ಪರಿಗಣಿಸಲ್ಪಟ್ಟ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ಶುಕ್ರವಾರ ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

ಕನ್ನಡಪ್ರಭ ವಾರ್ತೆ ನವದೆಹಲಿ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ರಾಜ್ಯದ ಹೊಸ ಸರ್ಕಾರ ರಚನೆ ಕುರಿತು ಚರ್ಚಿಸಲು ಸಂಭಾವ್ಯ ಉತ್ತರಾಧಿಕಾರಿ ಎಂದೇ ಪರಿಗಣಿಸಲ್ಪಟ್ಟ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ಶುಕ್ರವಾರ ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

ದೆಹಲಿಗೆ ತೆರಳುತ್ತಿದ್ದಂತೆ ಸಿದ್ದರಾಮಯ್ಯ ಉಳಿದುಕೊಂಡಿದ್ದ ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್, ಹೊಸ ಸರ್ಕಾರ ರಚನೆ ಸಂಬಂಧ ಚರ್ಚೆ ನಡೆಸಿದರು.

ನಂತರ, ರಾಜಾಜಿಮಾರ್ಗ್‌ ನಿವಾಸಕ್ಕೆ ತೆರಳಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಈ ವೇಳೆ, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಕುರಿತಾಗಿ ಸುದೀರ್ಘ ಮಾತುಕತೆ ನಡೆಸಲಾಯಿತು.

ನಂತರ, ಲೋದಿ ಎಸ್ಟೇಟ್‌ ನಲ್ಲಿರುವ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ನಿವಾಸಕ್ಕೆ ಭೇಟಿ ನೀಡಿ, ಅವರ ಜೊತೆ ಮಾತುಕತೆ ನಡೆಸಿದರು. ವೇಣುಗೋಪಾಲ್‌ ಭೇಟಿ ಬಳಿಕ ಮಾತನಾಡಿದ ಡಿಕೆಶಿ, ಶನಿವಾರ ಸಿಎಲ್ ಪಿ ಸಭೆ ಕರೆದಿದ್ದೇವೆ. ಹೀಗಾಗಿ, ಶಾಸಕರಿಗೆ ಯಾರೂ ದೆಹಲಿಗೆ ಬರಬೇಡಿ ಎಂದು ಸೂಚಿಸಿದ್ದೇವೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಸಿಎಲ್‌ಪಿ ಸಭೆಗೆ ವೀಕ್ಷಕರಾಗಿ ಬರಲಿದ್ದಾರೆ. ಸಿಎಲ್ ಪಿ ಸಭೆ ಬಳಿಕ ಪ್ರಮಾಣವಚನಕ್ಕೆ ದಿನ ನಿಗದಿಯಾಗಲಿದೆ ಎಂದು ತಿಳಿಸಿದರು.

ತಾವು ಸಿಎಂ ಆಗ್ತಾ ಇದ್ದೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಈ ಬಗ್ಗೆ ಈಗ ನಾನು ಯಾವುದೇ ಮಾತು ಆಡಲ್ಲ ಎಂದರು. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಕುರಿತು ಪ್ರತಿಕ್ರಿಯಿಸಿ, ‘ನನಗೆ ಬಂದಿರುವ ಮಾಹಿತಿ ಪ್ರಕಾರ ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಒಟ್ಟಿಗೆ ಬಿಡುಗಡೆ ಮಾಡಲಾಗುವುದು’ ಎಂದು ತಿಳಿಸಿದರು.

ವೇಣುಗೋಪಾಲ್ ಅವರು ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ. ನಮ್ಮ ನಾಯಕರು ನಮ್ಮ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಎಲ್ಲಾ ತೀರ್ಮಾನ ಆದ ಬಳಿಕ ನಮ್ಮ ನಾಯಕರು ಮಾಹಿತಿ ನೀಡುತ್ತಾರೆ. ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದರು.

ನಂತರ ಮತ್ತೊಮ್ಮೆ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅವರ ಜೊತೆ ಮಾತುಕತೆ ನಡೆಸಿದರು. ನಂತರ, ಖರ್ಗೆ ನಿವಾಸದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದರು. ತಮಗೆ ಅವಕಾಶ ಕಲ್ಪಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ ಡಿಕೆಶಿ, ಹೊಸ ಸರ್ಕಾರ ರಚನೆ ಸಂಬಂಧ ಮಾತುಕತೆ ನಡೆಸಿದರು. ಇದೇ ವೇಳೆ, ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಸಂಬಂಧ ಪಕ್ಷದ ಅಭ್ಯರ್ಥಿಗಳ ಕುರಿತಾಗಿಯೂ ಉಭಯ ನಾಯಕರು ಚರ್ಚೆ ನಡೆಸಿದರು.

ವಿಧಾನಸೌಧದ ಭವ್ಯ ಮೆಟ್ಟಿಲು ಮೇಲೆ ಹೊಸ ಸಿಎಂ ಪದಗ್ರಹಣ ಸಮಾರಂಭ:

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಸರ್ಕಾರದ ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕೆ ವಿಧಾನಸೌಧದ ಆವರಣದಲ್ಲಿ ಭರದ ಸಿದ್ಧತೆಗಳು ಆರಂಭಗೊಂಡಿವೆ.ನೂತನ ಮುಖ್ಯಮಂತ್ರಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಈ ಭವ್ಯ ಮೆಟ್ಟಿಲುಗಳ ಮೇಲೆ ವೇದಿಕೆ ನಿರ್ಮಾಣದ ಕೆಲಸ ಭರದಿಂದ ಸಾಗಿದೆ. ವೇದಿಕೆ ನಿರ್ಮಾಣಕ್ಕೆ ಬೇಕಿರುವ ವಸ್ತುಗಳನ್ನು ಲಾರಿಗಳಲ್ಲಿ ತಂದು ರಾಶಿ ಹಾಕಲಾಗಿದೆ. ಮತ್ತೊಂದು ಕಡೆ ಕಾರ್ಮಿಕರು ವೇದಿಕೆ ಸಜ್ಜುಗೊಳಿಸುವಲ್ಲಿ ನಿರತರಾಗಿದ್ದರು.ಶನಿವಾರ ಸಂಜೆ ನಡೆಯುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ತಮ್ಮ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ನಾಯಕನಾಗಿ ಆಯ್ಕೆಗೊಂಡವರು ಈ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.