ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು‘ರಾಮನಗರ ಜಿಲ್ಲೆ’ಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ಯನ್ನಾಗಿ ಮರುನಾಮಕರಣ ಮಾಡಿ ಘೋಷಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.
ರಾಮನಗರ ಜಿಲ್ಲೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು, ವಿಧಾನಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಮನಗರ ಜಿಲ್ಲೆಯ ಅಭಿವೃದ್ಧಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತು ಸಿಗುವಂತೆ ಮಾಡಲು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಬೇಕು ಎಂದು ಕೋರಿತು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ‘ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಸಿಎಂಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಆ ಮೂಲಕ ರಾಮನಗರಕ್ಕೂ ಜಾಗತಿಕ ಮನ್ನಣೆ ಸಿಗುವಂತೆ ಮಾಡುವುದು ನಮ್ಮ ಉದ್ದೇಶ’ ಎಂದರು.ರಾಮನಗರ ಜಿಲ್ಲೆಯ ಎಲ್ಲ ತಾಲೂಕುಗಳೂ ಹಿಂದೆ ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಜಿಲ್ಲೆಯನ್ನು ವಿಂಗಡಿಸಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಮಾಡಲಾಯಿತು. ಇದೀಗ ರಾಮನಗರವನ್ನು ಆಡಳಿತ ಕೇಂದ್ರವಾಗಿಸಿಕೊಂಡು ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಗತ್ಯವಿದೆ. ಆ ಮೂಲಕ ಬೆಂಗಳೂರಿಗೆ ಸಿಗುತ್ತಿರುವ ಮನ್ನಣೆಯು ರಾಮನಗರ ಹಾಗೂ ಜಿಲ್ಲೆಯ ತಾಲೂಕುಗಳಿಗೂ ದೊರೆಯುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡುವುದರಿಂದ ಭವಿಷ್ಯದಲ್ಲಿ ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ಮೈಸೂರಿನವರೆಗೆ ಅಭಿವೃದ್ಧಿ ಸಾಧಿಸಲು, ಕೈಗಾರಿಕೆಗಳ ಸ್ಥಾಪನೆಗೆ ಆಹ್ವಾನಿಸಲು, ಆಸ್ತಿ ಮೌಲ್ಯ ಹೆಚ್ಚಳಕ್ಕೆ ಅನುಕೂಲವಾಗಲಿದೆ. ಬೆಂಗಳೂರಿನ ಒಂದು ದಿಕ್ಕಿನಲ್ಲಿ ಆಂಧ್ರಪ್ರದೇಶ, ಮತ್ತೊಂದು ದಿಕ್ಕಿನಲ್ಲಿ ತಮಿಳುನಾಡು ರಾಜ್ಯಗಳ ಗಡಿ ಹೊಂದಿವೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿಯನ್ನು ತುಮಕೂರು ಹಾಗೂ ರಾಮನಗರ ಜಿಲ್ಲೆ ಕಡೆಗೆ ವಿಸ್ತರಿಸಬೇಕಿದೆ. ಹೀಗಾಗಿ ರಾಮನಗರದ ಹೆಸರನ್ನು ಬದಲಿಸಿ ಆ ಭಾಗದ ಕಡೆಗೆ ಅಭಿವೃದ್ಧಿ ವಿಸ್ತರಿಸಲಾಗುವುದು ಎಂದು ಹೇಳಿದರು.-----14 ಮಂದಿಯಿಂದ ಸಹಿಸಿಎಂಗೆ ಸಲ್ಲಿಸಲಾಗಿರುವ ಮನವಿ ಪತ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ 14 ಮಂದಿ ಸಹಿ ಹಾಕಿದ್ದು, ಅದರಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರೂ ಸೇರಿದ್ದಾರೆ. ಉಳಿದಂತೆ ಶಾಸಕರಾದ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ. ಸುರೇಶ್, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್.ರವಿ, ಸುಧಾಮ್‌ದಾಸ್ ಸೇರಿದಂತೆ ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು ಸಹಿ ಹಾಕಿ ರಾಮನಗರ ಜಿಲ್ಲೆಯ ಹೆಸರು ಬದಲಿಸುವಂತೆ ಮನವಿ ಮಾಡಿದ್ದಾರೆ.----ಮರುನಾಮಕರಣದಲ್ಲಿ ರಾಜಕೀಯವಿಲ್ಲರಾಮನಗರ ಜಿಲ್ಲೆ ಹೆಸರು ಬದಲಾವಣೆ ಮನವಿ ಕುರಿತಂತೆ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ‘ರಾಮನಗರ ಹಿಂದೆ ಬೆಂಗಳೂರು ಜಿಲ್ಲೆ ವ್ಯಾಪ್ತಿಯಲ್ಲೇ ಇತ್ತು. ಹೀಗಾಗಿ ಆ ಬಗ್ಗೆ ಭಾವನಾತ್ಮಕ ಸಂಬಂಧ ಇರುವ ಕಾರಣ ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಿಸುವಂತೆ ಕೋರಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಸಾರ್ವಜನಿಕರು ಸೇರಿದಂತೆ ಎಲ್ಲರ ಅಭಿಪ್ರಾಯ ಪಡೆದು, ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ’ ಎಂದರು.