ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಎಲ್ಲಾ ಸಚಿವರು, ಶಾಸಕರು ಹಾಗೂ ಪ್ರಮುಖ ನಾಯಕರು ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಎಲ್ಲಾ ಸಚಿವರು, ಶಾಸಕರು ಹಾಗೂ ಪ್ರಮುಖ ನಾಯಕರು ಭಾಗವಹಿಸಿದ್ದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಔತಣಕೂಟದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೂಗುಚ್ಛ ನೀಡಿ ಡಿ.ಕೆ. ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಿದರು.

ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ್‌, ಎಸ್‌.ಎಸ್‌. ಮಲ್ಲಿಕಾರ್ಜುನ್‌, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಜಮೀರ್‌ ಅಹಮದ್‌ ಖಾನ್‌, ಬೈರತಿ ಸುರೇಶ್, ಎಚ್.ಕೆ. ಪಾಟೀಲ್, ಬೋಸುರಾಜು ಸೇರಿ ಎಲ್ಲಾ ಸಚಿವರು ಸಹ ಭಾಗವಹಿಸಿದ್ದರು. ಮಾಜಿ ಸಚಿವರು ಹಾಗೂ ಶಾಸಕರಾದ ಶಿವರಾಂ ಹೆಬ್ಬಾರ್, ಕೆ.ಎನ್‌. ರಾಜಣ್ಣ, ಎಂ.ಕೃಷ್ಣಪ್ಪ, ಬಿ. ನಾಗೇಂದ್ರ ಸೇರಿ ಬಹುತೇಕ ಎಲ್ಲಾ ನಾಯಕರೂ ಇದ್ದರು.

ಔತಣಕೂಟಕ್ಕೆ ಶಾಸಕ ಎಸ್‌.ಟಿ. ಸೋಮಶೇಖರ್ ಅವರು ಡಿ.ಕೆ. ಶಿವಕುಮಾರ್‌ ಕಾರಿನಲ್ಲೇ ಆಗಮಿಸಿದರು. ಉಳಿದಂತೆ ವಿಧಾನಪರಿಷತ್‌ ಮುಖ್ಯಸಚೇತಕ ಸಲೀಂ ಅಹಮದ್‌, ವಿಧಾನಪರಿಷತ್‌ ಸದಸ್ಯರು, ಪ್ರಮುಖ ನಾಯಕರು ಸಹ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ಕೆಲ ಶಾಸಕರು ಔತಣಕೂಟಕ್ಕೆ ತೆರಳಿ ಡಿ.ಕೆ.ಶಿವಕುಮಾರ್‌ ಅವರಿಗೆ ಶುಭಾಷಯ ತಿಳಿಸಿ ವಾಪಸಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಗಂಟೆಗೂ ಹೆಚ್ಚು ಕಾಲ ಔತಣಕೂಟದಲ್ಲೇ ಇದ್ದರು ಎಂದು ತಿಳಿದುಬಂದಿದೆ.