ದಾಬಸ್‍ಪೇಟೆ: ರಾಜ್ಯದ 29ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮವನ್ನು ಸರಳವಾಗಿ ನಡೆಸಲು ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆ ವೀಕ್ಷಿಸಲು ತಾಲೂಕಿನ ಐದು ಕಡೆ ಬೃಹತ್ ಪ್ರೊಜೆಕ್ಟರ್‌ಗಳನ್ನು ಅಳವಡಿಸಿ ಕಾರ್ಯಕ್ರಮವನ್ನು ಕಣ್ತುಂಬಿಗೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಡಿ.ಕೆ.ಶಿವಕುಮಾರ್ ಅವರು 3 ವರ್ಷ ಉಪಮುಖ್ಯಮಂತ್ರಿಯಾಗಿ ರಾಜ್ಯದ ಜನತೆಗೆ ತನ್ನದೇ ಆದ ಕೊಡುಗೆ ನೀಡಿ ಇದೀಗ ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸಲಿದ್ದು, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಎಲ್ಲ ಜಾತಿ, ಧರ್ಮಗಳಿಗೆ ಸಮಾನ ನ್ಯಾಯ ಒದಗಿಸಿ ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ನೆಲಮಂಗಲ ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸುಮಾರು 25 ಸಾವಿರದಿಂದ 30 ಸಾವಿರ ಜನರನ್ನು ಕರೆದುಕೊಂಡು ಹೋಗಲು 350 ಬಸ್ಸುಗಳನ್ನು ಬುಕ್ ಮಾಡಿ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಕ್ಷೇತ್ರದಿಂದ ಸುಮಾರು 2500ಕ್ಕೂ ಹೆಚ್ಚು ಮುಖಂಡರು ಭಾಗವಹಿಸಲಿದ್ದೇವೆ ಎಂದರು.
5 ಕಡೆ ಬೃಹತ್ ಪ್ರೊಜೆಕ್ಟರ್ ಅಳವಡಿಕೆ:ಪ್ರಮಾಣ ವಚನ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ನೆಲಮಂಗಲ ಪಟ್ಟಣ ಸೇರಿ ಸೋಂಪುರ (ದಾಬಸ್‍ಪೇಟೆ), ತ್ಯಾಮಗೊಂಡ್ಲು, ಕಸಬಾ, ಸೋಲೂರು ಹೋಬಳಿಗಳ ಕೇಂದ್ರ ಸ್ಥಾನಗಳಲ್ಲಿ ಬೃಹತ್ ಸ್ಕ್ರೀನ್ ಅಳವಡಿಸಿ ಕ್ಷೇತ್ರದ ಜನ ಲೈವ್ ಮುಖಾಂತರ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವುದನ್ನು ವೀಕ್ಷಿಸಲು ಅಗತ್ಯ ಕ್ರಮವಹಿಸುವಂತೆ ನಮ್ಮ ಪಕ್ಷದ ಮುಖಂಡರುಗಳಿಗೆ, ಕಾರ್ಯಕರ್ತರಿಗೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಪ್ರತಿಮನೆಗೂ ಸಿಹಿ ವಿತರಣೆ:
ನನ್ನ ರಾಜಕೀಯ ಗುರುಗಳಾಗಿರುವ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ದಿನ ಐತಿಹಾಸಿಕವಾಗಿದ್ದು, ಇಡೀ ಕ್ಷೇತ್ರದಾದ್ಯಂತ ಕಾರ್ಯಕರ್ತರು ಹಬ್ಬದಂತೆ ಸಂಭ್ರಮಾಚರಣೆ ಮಾಡಲಿದ್ದಾರೆ. ಅಂದು ಕ್ಷೇತ್ರದ ಪ್ರತಿ ಮನೆಗೂ ಸಿಹಿ ಹಂಚಲು ತಯಾರಿ ನಡೆಸಿದ್ದೇನೆ ಎಂದರು.
ಬಾಕ್ಸ್..............ಸಚಿವ ಸ್ಥಾನಕ್ಕಿಂತ ಕ್ಷೇತ್ರದ ಅಭಿವೃದ್ಧಿ ಮುಖ್ಯ:
ನಾನು ಸಚಿವ ಹಾಗೂ ಯಾವುದೇ ನಿಗಮ- ಮಂಡಳಿಗಳ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ನನಗೆ ನನ್ನ ಕ್ಷೇತ್ರದ ಅಭಿವೃದ್ಧಿ ಮುಖ್ಯ, ನನಗೆ ಯಾವ ಸಚಿವ ಸ್ಥಾನವೂ ಬೇಕಾಗಿಲ್ಲ, ನೂತನ ಮುಖ್ಯಮಂತ್ರಿಗಳು ನನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಬೇಕು. ಈ ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಹ ಅನುದಾನ ನೀಡಿದ್ದರು. ಡಿ.ಕೆ.ಶಿವಕುಮಾರ್ ಅವರು ಇನ್ನೂ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ನೂತನ ಮುಖ್ಯಮಂತ್ರಿಗಳನ್ನು ಮುಂದಿನ ದಿನಗಳಲ್ಲಿ ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ಶಾಸಕ ಶ್ರೀನಿವಾಸ್ ಹೇಳಿದರು.ಪೋಟೋ 6 : ಶಾಸಕ ಎನ್.ಶ್ರೀನಿವಾಸ್.