ಸಾರಾಂಶ
ಜೆಜೆಎಂ ಸಂಬಂಧಿಸಿದಂತೆ ಮುಕ್ತಾಯ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಕ್ರಮ ವಹಿಸಬೇಕು
ಕೊಪ್ಪಳ: ತಾಲೂಕಿನಾದ್ಯಂತ ನಡೆಯುತ್ತಿರುವ ಕಾಮಗಾರಿಗಳ ಮೇಲೆ ನಿಗಾ ಇಡುವ ಜತೆಗೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದಂತೆ ಕೊಪ್ಪಳ ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ತಾಕೀತು ಮಾಡಿದರು.
ಕೊಪ್ಪಳ ತಾಪಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆ ಜಾರಿಯ ಹಂತದಲ್ಲಿ ಅಧಿಕಾರಿಗಳು ಮೇಲುಸ್ತುವಾರಿ ಮಾಡಬೇಕು. ಅವುಗಳ ಗುಣಮಟ್ಟದಲ್ಲಿ ಆಗುವಂತೆ ಮಾಡುವ ಜವಾಬ್ದಾರಿ ನಿಮ್ಮ ಮೇಲೆ ಇರುತ್ತದೆ. ಅದರಲ್ಲೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಾಲೂಕಿನಾದ್ಯಂತ ಸಾಕಷ್ಟು ಕಾಮಗಾರಿಗಳು ನಡೆಯುತ್ತಿದ್ದು, ಅವುಗಳನ್ನು ಸಹ ನಿಗಾ ವಹಿಸಬೇಕು ಎಂದರು.ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸಲು ವಿವಿಧ ವಿಷಯ ಪರಿಣತರಿಂದ ವಿಶೇಷ ತರಗತಿ ಜರುಗಿಸಲು ಪ್ರತಿ ಶಿಕ್ಷಕರಿಗೆ ಇಬ್ಬರು ವಿದ್ಯಾರ್ಥಿಗಳ ಜವಾಬ್ದಾರಿ ವಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಯ್ಯ ಮಾಹಿತಿ ನೀಡಿದರು.
ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಹನಿ ನೀರಾವರಿ ಸೌಲಭ್ಯ ಇಲಾಖೆಯಿಂದ ಒದಗಿಸತಕ್ಕದ್ದು. ಅಂಗನವಾಡಿ ಕೇಂದ್ರಗಳಿಗೆ ಈಗಾಗಲೇ ಮೊಟ್ಟೆ ವಿತರಣೆಗೆ ಟೆಂಡರ್ ಆಗಿದೆ. 8 ಕೇಂದ್ರಗಳಿಗೆ ಅಂಗನವಾಡಿ ಕಟ್ಟಡ ಸಮಸ್ಯೆ ಇದ್ದು, ಕಾಮಗಾರಿ ಪ್ರಾರಂಭಿಸಿಲ್ಲ ಎಂಬ ಮಾಹಿತಿ ಸಿಡಿಪಿಒ ಜಯಶ್ರೀ ಆರ್ ನೀಡಿದರು.ಗ್ರಾಮದಲ್ಲಿ ಎಸ್‌ಸಿ, ಎಸ್‌ಟಿ ಕಾಲನಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಇಲಾಖೆಯಿಂದ ಅನುದಾನ ಒದಗಿಸಿದಲ್ಲಿ ಸಂಪರ್ಕ ಕಲ್ಪಿಸಲಾಗುವುದು ಎಂದರು.
ಎಸ್‌ಸಿಪಿ-ಟಿಎಸ್ಪಿ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅವಕಾಶ ಇರುವ ಬಗ್ಗೆ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.ಜೆಜೆಎಂ ಸಂಬಂಧಿಸಿದಂತೆ ಮುಕ್ತಾಯ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡುವಂತಿಲ್ಲ ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ತಾಪಂ ಇಒ ಅಧಿಕಾರಿ ದುಂಡಪ್ಪ ತುರಾದಿ, ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ತಾಲೂಕು ಯೋಜನಾಧಿಕಾರಿ ರಾಜೇಸಾಬ್ ನದಾಫ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನಮಂತಪ್ಪ ಇದ್ದರು.