ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರ್.ಶಿವಣ್ಣ ಸೂಚನೆ ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಗೃಹಲಕ್ಷ್ಮೀ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಹೆಸರಿನಲ್ಲಿ ಹಣ ಪಾವತಿಯಾಗುತ್ತಿರುವುದನ್ನು ತಡೆಗಟ್ಟಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಮರಣ ಹೊಂದಿದ ಫಲಾನುಭವಿಗಳ ವಿವರಗಳನ್ನು ಪತ್ತೆಹಚ್ಚಲು ಅಂಗನವಾಡಿ ಕಾರ್ಯಕರ್ತೆಯರ ನೆರವು ಪಡೆಯಬೇಕು. ಮೃತಪಟ್ಟವರ ಪ್ರಮಾಣ ಪತ್ರಗಳನ್ನು ಸಂಗ್ರಹಿಸಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೂಲಕ ರಾಜ್ಯ ಮಟ್ಟಕ್ಕೆ ವರದಿ ಸಲ್ಲಿಸಿ, ಅಂತಹ ಖಾತೆಗಳಿಗೆ ಹಣ ಪಾವತಿಯಾಗುವುದನ್ನು ತಕ್ಷಣ ತಡೆಹಿಡಿಯಬೇಕು ಎಂದು ನಿರ್ದೇಶನ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 3,98,667 ಮಹಿಳೆಯರು ನೋಂದಾಯಿಸಿಕೊಂಡಿದ್ದು, ಈ ಪೈಕಿ 3,86,770 ಮಂದಿಗೆ ಈಗಾಗಲೇ ಹಣ ತಲುಪಿದೆ. ಜಿಲ್ಲೆಯು ಈ ಯೋಜನೆಯ ಅನುಷ್ಠಾನದಲ್ಲಿ ಶೇ.97 ರಷ್ಟು ಪ್ರಗತಿ ಸಾಧಿಸಿದೆ ಎಂದು ಸಭೆಗೆ ಮಾಹಿತಿ ನೀಡಿದರು.ಮೃತಪಟ್ಟವರ ಹೆಸರಿನಲ್ಲಿ ಹಣ ವರ್ಗಾವಣೆಯಾಗುವುದನ್ನು ತಡೆಯಲು ಇ-ಗವರ್ನೆನ್ಸ್ ಅಂಕಿ-ಅಂಶಗಳ ಆಧಾರದ ಮೇಲೆ ಕ್ರಮವಹಿಸಲಾಗಿದ್ದು, ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೂ ಮೃತಪಟ್ಟ 8,843 ಮಹಿಳೆಯರ ಹೆಸರನ್ನು ಪಟ್ಟಿಯಿಂದ ಕೈಬಿಡಲು ಪ್ರಕ್ರಿಯೆ ಆರಂಭವಾಗಿದೆ. ಮೃತ ಫಲಾನುಭವಿಗಳ ಖಚಿತ ಮಾಹಿತಿ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಲೆಕ್ಕಿಗರು ಮನೆ ಮನೆಗೆ ತೆರಳಿ ಮರಣ ಪ್ರಮಾಣಪತ್ರಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಪರಿಶೀಲನೆಯು ಮುಂದಿನ 15 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಜಿಲ್ಲೆಯ ಹಳ್ಳಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ, ಅದನ್ನು ಮರಳಿ ಮಾರಾಟ ಮಾಡುವ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ದಂಧೆಕೋರರು ಆಟೋಗಳಲ್ಲಿ ಮೈಕ್ ಸೆಟ್ ಹಾಕಿಕೊಂಡು, ಕೆಜಿ. ಅಕ್ಕಿಗೆ 10 ರುಪಾಯಿಯಂತೆ ಬಹಿರಂಗವಾಗಿ ವ್ಯಾಪಾರ ಮಾಡುತ್ತಿದ್ದಾರೆ. ಈ ಬಗ್ಗೆ ಆಹಾರ ಇಲಾಖೆಗೆ ಮಾಹಿತಿ ಇದ್ದರೂ, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಧಾನ ವ್ಯಕ್ತಪಡಿಸಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರನ್ನು ಒಗ್ಗೂಡಿಸಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್. ಶಿವಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ಯಾರಂಟಿ ಯೋಜನೆಗಳಲ್ಲಿ, ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಆಹ್ವಾನಿಸಿ ಮಹಿಳಾ ದಿನಾಚರಣೆ ಆಚರಿಸಬೇಕು ಎಂದರು.ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಿ.ಎನ್.ಮೈಲಾರಪ್ಪ, ಖಾದಿ ರಮೇಶ್, ನಿರಂಜನ್, ಸದಸ್ಯರಾದ ಹೆಚ್.ಟಿ. ಹನುಮಂತಪ್ಪ, ಅಬ್ದುಲ್ ಶಾ ವಲಿ, ಪ್ರಕಾಶ್, ಮಧುಪಾಲೇಗೌಡ, ಕೃಷ್ಣಮೂರ್ತಿ, ಇಂದಿರಾ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಯೋಜನಾ ನಿರ್ದೇಶಕಿ ಜಯಲಕ್ಷ್ಮೀ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.