ಮಾನಸಿಕ ಆರೋಗ್ಯ ಸೇವೆ ಪಡೆಯಲು ಹಿಂದೇಟು ಹಾಕಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಂದಿತಾ ಎಮ್.ಎನ್. ಹೇಳಿದರು.
ಕನ್ನಡಪ್ರಭ ವಾರ್ತೆ ರಾಯಚೂರು
ಮಾನಸಿಕ ಆರೋಗ್ಯ ಸೇವೆ ಪಡೆಯಲು ಹಿಂದೇಟು ಹಾಕಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಂದಿತಾ ಎಮ್.ಎನ್. ಹೇಳಿದರು.ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2026ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವ್ಯಕ್ತಿಯಲ್ಲಿ ಪದೇ ಪದೇ ಎದುರಾಗುವ ತೀವ್ರ ಸಂಕಷ್ಟಗಳು, ಅತಿಯಾದ ಮಾನಸಿಕ ಒತ್ತಡ ಹಾಗೂ ಮಿತಿಮೀರಿದ ಆಲೋಚನೆಗಳಿಂದ ಮಾನಸಿಕ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಆರಂಭಿಕ ಹಂತದಲ್ಲಿಯೇ ರೋಗಿಯ ಮನಃಸ್ಥಿತಿಯನ್ನು ಅರ್ಥೈಸಿಕೊಂಡು, ಕುಟುಂಬದ ಸದಸ್ಯರ ಸಹಕಾರ ಮತ್ತು ಪ್ರೀತಿಯೊಂದಿಗೆ ಸೂಕ್ತ ಚಿಕಿತ್ಸೆ ಕೊಡಿಸಿದರೆ ಕಾಯಿಲೆಯನ್ನು ಬೇಗನೆ ಗುಣಪಡಿಸಬಹುದು ಎಂದರು.ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ.ಶಿವಕುಮಾರ ನಾರಾ, ಮನೋರೋಗ ತಜ್ಞ ಡಾ ಮನೋಹರ ಪತ್ತಾರ ಮಾತನಾಡಿದರು. ಇದೇ ವೇಳೆ ಮಾನಸಿಕ ಆರೋಗ್ಯ ರಕ್ಷಣೆಯ ಕುರಿತು ಪ್ರತಿಜ್ಞಾವಿಧಿ ಬೋಧಿಸಿ ಬಿತ್ತಿ ಪತ್ರ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನೀಲ್ ಎಚ್, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಸೈಕಾಲಜಿಸ್ಟ್ ಅರುಣ್ ಕುಮಾರ್, ಪಿಎಸ್ಡಬ್ಲ್ಯೂ ದೀಪಾ ಎಸ್ ಎಲ್, ಪಿಎಸ್ಎನ್ ಗಂಗಮ್ಮ, ಪಿಎಸ್ಡಬ್ಲ್ಯೂ ಮಂಜುಳಾ ಸೇರಿದಂತೆ ಪೋಲಿಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.