ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆಯಲ್ಲಿ ನಿರ್ಲಕ್ಷ್ಯ ಬೇಡ: ಎಚ್.ಕೆ. ಪಾಟೀಲ್‌

| Published : May 21 2024, 12:31 AM IST

ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆಯಲ್ಲಿ ನಿರ್ಲಕ್ಷ್ಯ ಬೇಡ: ಎಚ್.ಕೆ. ಪಾಟೀಲ್‌
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್‌ ಅವರು ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬರ ನಿರ್ವಹಣೆ ಕುರಿತು ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

ಗದಗ: ಜಿಲ್ಲೆಯಲ್ಲಿ ಬರ ನಿರ್ವಹಣೆ ಸಮರ್ಪಕವಾಗಿ ನಿಭಾಯಿಸಬೇಕು. ಈ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ತೋರದೇ ಖುದ್ದಾಗಿ ನೀರಿನ ಸಮಸ್ಯೆ ಇರುವ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬರ ನಿರ್ವಹಣೆ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಯಿರುವ ಸ್ಥಳಗಳಿಗೆ ಖಾಸಗಿ ಬೋರ್‌ವೆಲ್‌ ಮುಖಾಂತರವಾಗಲಿ ಅಥವಾ ಟ್ಯಾಂಕರ್‌ಗಳ ಮುಖಾಂತರವಾಗಲಿ ನೀರು ಪೂರೈಕೆಗೆ ಕ್ರಮ ವಹಿಸಬೇಕು. ನಗರ ಪ್ರದೇಶಗಳಲ್ಲಿ ಹೆಚ್ಚಿನ ಜನಸಂದಣಿಯಿರುವ ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಗೆ ಸೂಚಿಸಿದರು.

ರೈತರಿಗೆ ಬೆಳೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗಬಾರದು. ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಈಗಾಗಲೇ ಸಹಾಯವಾಣಿ (ಹೆಲ್ಪ್‌ಲೈನ್) ಸ್ಥಾಪಿಸಲಾಗಿದ್ದು, ಈ ಸಂಬಂಧ ಸಾರ್ವಜನಿಕರಿಂದ ಕರೆಗಳು ಬಂದಲ್ಲಿ ಅವುಗಳಿಗೆ ತಕ್ಷಣವೇ ಸ್ಪಂದಿಸುವ ಕಾರ್ಯವಾಗಬೇಕು ಎಂದರು.

ಅತಿವೃಷ್ಟಿ: ಹವಾಮಾನ ವರದಿಯ ಪ್ರಕಾರ ಮುಂಬರುವ ದಿನಗಳಲ್ಲಿ ಅತಿವೃಷ್ಟಿಯಾಗುವ ಸಂಭವವಿದೆ ಎಂದು ಅಂದಾಜಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಅತಿವೃಷ್ಟಿ ಸಮರ್ಪಕ ನಿರ್ವಹಣೆಗೆ ಸರಿಯಾಗಿ ಕ್ರಿಯಾಯೋಜನೆ ಸಿದ್ಧಪಡಿಸಿಕೊಂಡು ಅತಿವೃಷ್ಟಿ ಆವರಿಸಿದಲ್ಲಿ ತಕ್ಷಣವೇ ಸ್ಪಂದಿಸುವ ಕಾರ್ಯಕೈಗೊಳ್ಳಬೇಕು. ಜೀವ ಹಾನಿ ತಡೆಗೆ ಮುಂಜಾಗ್ರತೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆಯೂ ಸಹ ಸೂಚಿಸಲಾಯಿತು.

ಚರಂಡಿಗಳ ಸ್ವಚ್ಛತೆಗೆ ಸೂಚನೆ: ಗ್ರಾಮೀಣ ಪ್ರದೇಶ ಸೇರಿದಂತೆ ನಗರ ಪ್ರದೇಶಗಳಲ್ಲಿ ಗಟಾರುಗಳಲ್ಲಿ ನೀರು ಸರಾಗವಾಗಿ ಹರಿದುಹೋಗುವಂತೆ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ನೀರು ಸರಾಗವಾಗಿ ಹರಿದು ಹೋಗದೇ ರಸ್ತೆ ಮೇಲೆ ಕೊಳಚೆ ನೀರು ಹರಿಯುವ ಸಾಧ್ಯತೆಯಿದೆ. ಇದರಿಂದ ಸಾರ್ವಜನಿಕರಿಗೆ ಓಡಾಡಲು ಸಮಸ್ಯೆ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಗಟಾರುಗಳ ಸ್ವಚ್ಛತೆಗೆ ಕ್ರಮ ವಹಿಸಬೇಕು ಎಂದು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.

ಅನುದಾನದ ಕೊರತೆಯಿಲ್ಲ: ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಹಾಗೂ ಸಮರ್ಪಕ ಕುಡಿಯುವ ನೀರು ಪೂರೈಸಲು ಅನುದಾನದ ಕೊರತೆಯಿಲ್ಲ. ಅಧಿಕಾರಿಗಳು ಅಗತ್ಯವಿದ್ದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಗೆ ಖಾಸಗಿ ಬೋರ್‌ವೆಲ್, ಟ್ಯಾಂಕರ್ ಬಳಸಿಕೊಳ್ಳಲು ತಿಳಿಸಲಾಗಿದೆ. ಬರ ನಿರ್ವಹಣೆಗೆ ಅನುದಾನ ಕೊರತೆಯಿಲ್ಲ. ಅಧಿಕಾರಿಗಳು ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಬೇಜವಾಬ್ದಾರಿ ಹಾಗೂ ನಿಧಾನಗತಿ ಸಹಿಸಲಾಗದು ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿ, ನೀರಿನ ಸಮಸ್ಯೆಯಿರುವ ಜಿಲ್ಲೆಯ 14 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಗದಗ-ಬೆಟಗೇರಿ ನಗರಸಭೆಯ 35 ವಾರ್ಡುಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಗದಗ ತಾಲೂಕಿನಲ್ಲಿ 13, ಮುಂಡರಗಿ ತಾಲೂಕಿನಲ್ಲಿ 8, ನರಗುಂದ ತಾಲೂಕಿನಲ್ಲಿ 2, ಶಿರಹಟ್ಟಿ ತಾಲೂಕಿನಲ್ಲಿ 4 ಖಾಸಗಿ ಬೋರ್‌ವೆಲ್‌ಗಳ ಮುಖಾಂತರ ನೀರಿನ ಸಮಸ್ಯೆಯಿರುವ ಪ್ರದೇಶಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ಸಭೆಗೆ ವಿವರಿಸಿದರು.

ಗುಡುಗು, ಸಿಡಿಲು, ಮಳೆ ಮುಂಜಾಗ್ರತೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಾಟ್ಸ್‌ಆ್ಯಪ್‌ ಗ್ರೂಪ್‍ಗಳಿಗೆ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ. ಜಿಲ್ಲೆಯ 7 ಕಡೆಗಳಲ್ಲಿ ಮೇವು ಬ್ಯಾಂಕ್‍ಗಳನ್ನು ತೆರೆಯಲಾಗಿದ್ದು ಜಾನುವಾರುಗಳಿಗೆ 2,10,512 ಟನ್‍ನಷ್ಟು ಮೇವು ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಮಾತನಾಡಿ, ಬರ ಪರಿಹಾರ ವಿತರಣೆ ಮಾಡುವಾಗ ಪ್ರತಿಯೊಬ್ಬ ರೈತರ ಹೊಲದಲ್ಲಿಯೂ ಕ್ರಾಪ್ ಸರ್ವೇ (ಬೆಳೆ ಸಮೀಕ್ಷೆ) ಲಿಂಕ್ ಮಾಡಲಾಗಿದೆ. 5,591 ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆ, ಫ್ರೂಟ್ಸ್ ಐಡಿಗಳಲ್ಲಿ ಹೆಸರಿನ ವ್ಯತ್ಯಾಸ ಮತ್ತು ಇತರ ಕಾರಣದಿಂದಾಗಿ ಪರಿಹಾರ ಜಮೆ ಆಗದೇ ಇದ್ದು ಅವುಗಳನ್ನು ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. 2023ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಗೆ ಒಟ್ಟಾರೆ 1,13,778 ಫಲಾನುಭವಿಗಳಿಗೆ 1ರಿಂದ 9 ಹಂತದ ವರೆಗೆ ₹22 ಕೋಟಿ ಬೆಳೆ ಹಾನಿ ಪರಿಹಾರ ಧನ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರ ವಿತರಣೆ ಕಾರ್ಯ ಇನ್ನೂ ಪ್ರಗತಿಯಲ್ಲಿದೆ ಎಂದು ವಿವರಿಸಿದರು.

ಜಿಪಂ ಸಿಇಒ ಭರತ್ ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಕದ, ಅಪರ ಜಿಲ್ಲಾಧಿಕಾರಿ ಸುರೇಖಾ, ಉಪವಿಭಾಗಾಧಿಕಾರಿ ವೆಂಕಟೇಶ ನಾಯಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ನಗರಸಭೆ ಪೌರಾಯುಕ್ತ ಪ್ರಶಾಂತ ವರಗಪ್ಪನವರ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಎಸ್.ಆರ್. ಗೌಡರ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಹುಚ್ಚೇಶ್ವರ ಬಂಡಿವಡ್ಡರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.