ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡದಿರಿ

| Published : Jun 01 2024, 12:45 AM IST

ಸಾರಾಂಶ

ವಿಶ್ವ ತಂಬಾಕು ದಿನವನ್ನು ಬಹಳ ವರ್ಷಗಳಿಂದ ಆಚರಿಸುತ್ತಾ ಬಂದಿದ್ದೇವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್‌ನಂತಹ ಮಾರಕ ರೋಗಕ್ಕೆ ತುತ್ತಾಗಿ ಜೀವನವನ್ನೆ ಹಾಳು ಮಾಡಿಕೊಂಡಿದ್ದಾರೆ ಎಂದು ನ್ಯಾಯಾಧೀಶ ನೂರುನ್ನೀಸ ಹೇಳಿದರು.

ಕನ್ನಡಪ್ರಭ ವಾರ್ತೆ ತುಮಕೂರುವಿಶ್ವ ತಂಬಾಕು ದಿನವನ್ನು ಬಹಳ ವರ್ಷಗಳಿಂದ ಆಚರಿಸುತ್ತಾ ಬಂದಿದ್ದೇವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್‌ನಂತಹ ಮಾರಕ ರೋಗಕ್ಕೆ ತುತ್ತಾಗಿ ಜೀವನವನ್ನೆ ಹಾಳು ಮಾಡಿಕೊಂಡಿದ್ದಾರೆ ಎಂದು ನ್ಯಾಯಾಧೀಶ ನೂರುನ್ನೀಸ ಹೇಳಿದರು.

ನಗರದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್, ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣೆ ಉದ್ದೇಶದಿಂದ ನಗರದ ಟೌನ್‌ಹಾಲ್ ವೃತ್ತದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಮಹಿಳೆಯರು ಸಹ ತಂಬಾಕಿನಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದರು.

ತಂಬಾಕು ಉತ್ಪನ್ನಗಳನ್ನು ಯಾವುದೇ ಅಂಗಡಿಗಳಲ್ಲಿ ಮಾರಾಟ ಮಾಡಬಾರದು ಎಂಬ ಆದೇಶ ಇದ್ದರೂ ಇದು ಇನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ. ಅಮೇರಿಕಾದಂತಹ ಮುಂದುವರೆದ ದೇಶಗಳಲ್ಲಿ ಎಲ್ಲ ಅಂಗಡಿಗಳಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದಿಲ್ಲ ಎಂಬ ನಾಮಫಲಕಗಳನ್ನು ಹಾಕಲಾಗಿದೆ. ಆದರೆ ನಮ್ಮ ದೇಶದಲ್ಲಿ ಈ ರೀತಿಯ ಬೋರ್ಡ್‌ಗಳು ಹಾಕಿರುವುದು ಕಂಡು ಬರುತ್ತಿಲ್ಲ ಎಂದು ಹೇಳಿದರು.

ಶಾಲಾ-ಕಾಲೇಜು, ವಿಶ್ವವಿದ್ಯಾನಿಲಯಗಳು, ದೇವಾಲಯಗಳು, ಆಶ್ರಮದ ಅಕ್ಕಪಕ್ಕ ತಂಬಾಕು ಉತ್ಪನ್ನ ಮಾಡಬಾರದು. ಸಿಗರೇಟ್ ಪ್ಯಾಕ್ ನೋಡಿದರೆ ನಮಗೆ ಭಯಗೊಳಿಸುವಂತಹ ಚಿತ್ರಗಳು ಇರುತ್ತದೆ. ಆದರೂ ಅದನ್ನು ಬಳಸುತ್ತಿರುವುದು ವಿಷಾದಕರ ಸಂಗತಿ ಎಂದರು.ಈ ಕಾರ್ಯಕ್ರಮ ಒಂದು ದಿನಕ್ಕೆ ಸೀಮಿತವಾಗಿರದೇ ಅಕ್ಕಪಕ್ಕ ಮನೆಯವರಿಗೆ ಗುಟ್ಕಾ, ಪಾನ್‌ ಪರಾಗ್, ಬೀಡಿ, ಸಿಗರೇಟು ಸೇವಿಸುತ್ತಿದ್ದರೆ ಅಂತಹವರಿಗೆ ಇದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವ ಕೆಲಸವನ್ನು ಯುವಜನರು, ವಿದ್ಯಾರ್ಥಿಗಳು ಮಾಡಬೇಕು ಎಂದು ಸಲಹೆ ನೀಡಿದರು. ಯಾವುದೇ ಕಾನೂನು ಕಾಯ್ದೆ ಪುಸ್ತಕಕ್ಕೆ ಸೀಮಿತವಾಗಬಾರದು. ಈ ಕಾನೂನು ಕಾಯ್ದೆ ಅನುಷ್ಠಾನಕ್ಕೆ ತರುವ ಹೊಣೆ ಯುವಜನತೆ ಮೇಲಿದೆ. ಕಾನೂನು ಕಾಯ್ದೆಯ ಪ್ರತಿಯೊಂದು ವಾಕ್ಯವನ್ನು ಅರ್ಥಪೂರ್ಣಗೊಳಿಸಲು ಯುವಜನತೆ ಮುಂದಾಗಬೇಕು. ಈ ಮೂಲಕ ತಂಬಾಕು ಉತ್ಪನ್ನಗಳಿಗೆ ಪ್ರತಿಯೊಬ್ಬರೂ ದೂರ ಇರಬೇಕು ಎಂದು ಕರೆ ನೀಡಿದರು.ಲಕ್ಷಾಂತರ ಮಂದಿ ತಂಬಾಕು ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶಗಳ ಸಮಸ್ಯೆಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಪ್ರತಿಯೊಬ್ಬರೂ ತಂಬಾಕು ಸೇವಿಸುವುದನ್ನು ನಿಲ್ಲಿಸಬೇಕು. ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಸರ್ವಲೆನ್ಸ್ ಮತ್ತು ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ರಾಮೇಗೌಡ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಮೇ ೩೧ಕ್ಕೆ ಒಂದೊಂದು ಘೋಷವಾಕ್ಯದೊಂದಿಗೆ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದೆ. ಸಾರ್ವಜನಿಕರಲ್ಲಿ ತಂಬಾಕು ಸೇವನೆಯಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಜಾಥಾದ ಮುಖ್ಯ ಉದ್ದೇಶವಾಗಿದೆ ಎಂದರು.ಈ ವರ್ಷದ ಧ್ಯೇಯ ವಾಕ್ಯ ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು ಆಗಿದ್ದು, ತಂಬಾಕು ಉದ್ಯಮದವರಿಂದ ಮಕ್ಕಳನ್ನು ರಕ್ಷಿಸಲು ಎಲ್ಲರೂ ಪಣ ತೊಡಬೇಕು ಎಂದರು. ತಂಬಾಕು ಸೇವನೆಯಿಂದ ದೇಹದ ಮೇಲೆ ಯಾವ ರೀತಿ ದುಷ್ಪರಿಣಾಮ ಆಗುತ್ತದೆ. ಯಾವ ರೀತಿಯ ಮಾರಕ ರೋಗಗಳಿಗೆ ತುತ್ತಾಗುತ್ತೇವೆ ಎಂಬುದನ್ನು ಈ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ತಂಬಾಕು ಬೆಳೆಯುವುದರಿಂದ ನೆಲ ಜಲ, ನೀರು ಗಾಳಿ, ಪರಿಸರಕ್ಕೆ ಹಾನಿಯಾಗುತ್ತಿದೆ. ತಂಬಾಕು ಬೆಳೆದ ನಂತರ ಅದರ ಎಲೆಗಳನ್ನು ಕಾರ್ಖಾನೆಗಳಿಗೆ ಸಾಗಿಸುವುದರಿಂದ ಹಿಡಿದು ಕಾರ್ಖಾನೆಯಲ್ಲಿ ತಯಾರಾಗುವ ತಂಬಾಕು ಉತ್ಪನ್ನದಿಂದಾಗಿ ಜಲ, ವಾಯು ಮಾಲಿನ್ಯ ಉಂಟಾಗುತ್ತದೆ. ಹೀಗಾಗಿ ಇದರಿಂದ ಸಂಪೂರ್ಣ ಪರಿಸರ ಮಾಲಿನ್ಯವಾಗುತ್ತಿದೆ ಎಂದರು. ತಂಬಾಕು ಸೇವನೆ ಮಾಡಿದ ಸಂದರ್ಭದಲ್ಲಿ ವಾಯು ಮಾಲಿನ್ಯ, ಪರಿಸರಕ್ಕೆ ಹಾನಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಂಬಾಕು ತ್ಯಜಿಸುವಂತಹ ಕಾರ್ಯ ಮಾಡಬೇಕು. ಈ ಮೂಲಕ ಪರಿಸರ ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಕ್ಯಾನ್ಸರ್, ಕೂದಲು ಉದುರುವಿಕೆ, ದೃಷ್ಟಿದೋಷ, ಶ್ವಾಸಕೋಶದ ಕ್ಯಾನ್ಸರ್, ಗರ್ಭಾಶಯದ ಕ್ಯಾನ್ಸರ್, ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಪ್ರಸವ ಪೂರ್ವ ಹೆರಿಗೆಯಾಗುವುದು, ಹೃದಯ ಸಂಬಂಧಿ ರೋಗ, ಅನ್ನನಾಳ ಕ್ಯಾನ್ಸರ್, ಜಠರ ಕ್ಯಾನ್ಸರ್ ಸೇರಿದಂತೆ ಅನೇಕ ದುಷ್ಪರಿಣಾಮ ಉಂಟಾಗುತ್ತದೆ. ಈ ದುಷ್ಪರಿಣಾಮಗಳ ಬಗ್ಗೆ ನಾವೆಲ್ಲರೂ ಅರಿವು ತಿಳಿದುಕೊಂಡು ತಂಬಾಕು ಉತ್ಪನ್ನ ಸೇವನೆ ತ್ಯಜಿಸಲು ಎಲ್ಲರೂ ಪಣ ತೊಡೋಣ ಎಂದರು.ಜಿಲ್ಲಾಸ್ಪತ್ರೆ ಆವರಣದಿಂದ ಹೊರಟ ಜಾಥಾವು ಟೌನ್‌ಹಾಲ್ ಮೂಲಕ ಅಶೋಕ ರಸ್ತೆಯಲ್ಲಿ ಸಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ತಲುಪಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಜ್ಗರ್ ಬೇಗ್, ಡಾ. ರಾಮೇಗೌಡ, ಡಾ. ಗುಪ್ತ, ಡಾ. ಹರೀಶ್, ಡಾ. ಅನಿತಾಸ ಜಿಲ್ಲಾ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಚಂದನ, ಪ್ರಕಾಶ್, ಜಯಣ್ಣ, ರವಿಪ್ರಕಾಶ್, ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.