ಕನ್ನಡಪ್ರಭ ವಾರ್ತೆ ಬೆಂಗಳೂರು
ದೇಶದ ಆರೋಗ್ಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಟೆಲಿಮೆಡಿಸಿನ್ ಮತ್ತು ಸಂಶೋಧನೆಯ ಮೂಲಕ ಮಹತ್ವದ ಬದಲಾವಣೆಗಳು ನಡೆಯುತ್ತಿವೆ. ಯುವ ವೈದ್ಯರು ನಿರಂತರ ಕಲಿಕೆಗೆ ಒತ್ತು ನೀಡಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಸಲಹೆ ನೀಡಿದರು.ಮಂಗಳವಾರ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಹಮ್ಮಿಕೊಂಡಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ 28ನೇ ಘಟಿಕೋತ್ಸವದಲ್ಲಿ ಆರೋಗ್ಯ ಕ್ಷೇತ್ರದ ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ‘ಆರೋಗ್ಯಕರ ಭಾರತ’ ಮತ್ತು ‘ವಿಕಸಿತ ಭಾರತ-2047’ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ವೈದ್ಯಕೀಯ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಗ್ರಾಮೀಣ ಆರೋಗ್ಯ ಸೇವೆ, ತಾಯಿ ಮತ್ತು ಶಿಶು ಆರೋಗ್ಯ, ತಡೆಗಟ್ಟುವ ಆರೋಗ್ಯ ಸೇವೆ ಹಾಗೂ ಸಾರ್ವಜನಿಕ ಜಾಗೃತಿ ಕ್ಷೇತ್ರಗಳಲ್ಲಿ ಯುವ ವೈದ್ಯರ ಕೊಡುಗೆ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖವಾಗಲಿದೆ ಎಂದು ಹೇಳಿದರು.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಅತಿ ಹೆಚ್ಚು ಆರೋಗ್ಯ ವಿಜ್ಞಾನ ಕಾಲೇಜುಗಳಿವೆ. ಪ್ರತಿ ವರ್ಷ 72 ಸಾವಿರ ಆರೋಗ್ಯ ವಿಜ್ಞಾನ ಪದವೀಧರರನ್ನು ನೀಡುತ್ತಿದೆ. ವರ್ಷಕ್ಕೆ 13,940 ವೈದ್ಯರು ಪದವಿ ಪೂರೈಸುತ್ತಾರೆ. ವೈದ್ಯ ಪದವಿ ಪಡೆದು ಹೊರ ಬಂದವರು ಕೇವಲ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವುದರ ಬಗ್ಗೆ ಮಾತ್ರ ಗಮನ ಹರಿಸಬಾರದು. ಗ್ರಾಮೀಣ ಪ್ರದೇಶದಲ್ಲೂ ಆರೋಗ್ಯ ಸೇವೆ ಒದಗಿಸುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.
ಬೆಂಗಳೂರಿನಲ್ಲಿ 26 ಲಕ್ಷ ಐಟಿ ವೃತ್ತಿಪರರಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ 13 ಲಕ್ಷ ಐಟಿ ವೃತ್ತಿಪರರಿದ್ದಾರೆ. ಮಾತ್ರವಲ್ಲ, ಇತರೆ ಕ್ಷೇತ್ರಗಳಲ್ಲಿಯೂ ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ನಮ್ಮ ರಾಜ್ಯ ಹೊಂದಿದೆ. ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಬರುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಹೋಗಬೇಕು. ನಾನು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿದ್ದೇನೆ. ಅಲ್ಲಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಭಾರತೀಯರು ಅದರಲ್ಲೂ ಕರ್ನಾಟಕದ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಮಾತನಾಡಿ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಕ್ಯಾನ್ಸರ್ ಆಸ್ಪತ್ರೆ ಹಾಗೂ ಟ್ರೋಮಾ ಕೇರ್ ಕೇಂದ್ರಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ನಮ್ಮ ಜನರಿಗೆ ಇಲ್ಲಿಯೇ ಅತ್ಯುತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ಸೇವೆಗಳನ್ನು ಪಡೆಯಬೇಕು ಎಂಬುದು ಸರ್ಕಾರದ ಆಶಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಸಿ.ಭಗವಾನ್, ಕುಲಸಚಿವ ಅರ್ಜುನ್ ಒಡೆಯರ್, ಮೌಲ್ಯಮಾಪನ ಕುಲಸಚಿವ ಡಾ. ರಿಯಾಜ್ ಬಾಷಾ ಹಾಜರಿದ್ದರು. 103 ವಿದ್ಯಾರ್ಥಿಗಳಿಗೆ ಚಿನ್ನದ ಪದಕ:
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ, ವಿವಿಧ ವಿಭಾಗಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದ 103 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ವಿತರಿಸಲಾಯಿತು. ಈ ಘಟಿಕೋತ್ಸವದಲ್ಲಿ ಒಟ್ಟು 72 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿಗಳನ್ನು ಪಡೆದರು.ಗೌರವ ಡಾಕ್ಟರೇಟ್ :
ಶಿಕ್ಷಣ, ಆರೋಗ್ಯ ಮತ್ತು ಸಮಾಜ ಸೇವಾ ಕ್ಷೇತ್ರಗಳಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ನೈಲಾಡಿ ಶ್ರೀಧರ್ ಶೆಟ್ಟಿ, ಹರ್ಷಂಗಿ ವೀರಭದ್ರಪ್ಪ, ಎ.ಸಿ.ಶಣ್ಮುಗಂ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.