ವೈದ್ಯರ ಮುಷ್ಕರ: ಆಸ್ಪತ್ರೆಗಳ ಸೇವೆ ಸ್ಥಗಿತ

| Published : Aug 18 2024, 01:51 AM IST

ಸಾರಾಂಶ

ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಹತ್ಯೆ ಖಂಡಿಸಿ ಜಿಲ್ಲಾಸ್ಪತ್ರೆಯಲ್ಲಿ ಹಿರಿಯ, ಕಿರಿಯ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹೊರ ರೋಗಿಗಳ ಸೇವೆ ಬಂದ್ ಮಾಡಿ, ಪ್ರತಿಭಟಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿರುವ 24 ಗಂಟೆಗಳ ರಾಷ್ಟ್ರವ್ಯಾಪಿ ವೈದ್ಯರ ಮುಷ್ಕರಕ್ಕೆ ಜಿಲ್ಲಾದ್ಯಂತ ವೈದ್ಯರು ಬೆಂಬಲ ಸೂಚಿಸಿದ್ದು, ಬೆಳಗ್ಗೆ 6ರಿಂದಲೇ ಎಲ್ಲಾ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತಗೊಳಿಸಿದ್ದರಿಂದ ರೋಗಿಗಳು ಚಿಕಿತ್ಸೆಗಾಗಿ ಪರದಾಡಬೇಕಾಯಿತು.

ನಗರದ ಜಿಲ್ಲಾ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹತ್ಯೆ ಖಂಡಿಸಿ ವೈದ್ಯಕೀಯ ಸೇವೆ ಬಂದ್‌ನ ಬ್ಯಾನರ್‌ ಹಿಡಿದು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ತುರ್ತು ಸೇವೆ ಹೊರತುಪಡಿಸಿದರೆ, ಬೇರಾವುದೇ ಸೇವೆಗಳೂ ಲಭ್ಯವಿರಲಿಲ್ಲ. ಭಾರತೀಯ ವೈದ್ಯಕೀಯ ಸಂಘವು ಶನಿವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದ ಬೆನ್ನಲ್ಲೇ ಐಎಂಎ ಜಿಲ್ಲಾ ಘಟಕವು ಸಹ ಬಂದ್‌ಗೆ ಬೆಂಬಲ ಸೂಚಿಸಿತ್ತು. ಜಿಲ್ಲಾ, ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆ ಹೀಗೆ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು ಹೊರ ರೋಗಿ ಸೇವೆ ಬಂದ್ ಮಾಡಿ, ಮುಷ್ಕರದಲ್ಲಿ ಭಾಗಿಯಾದರು.

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆ.14ರಂದು ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನದಂದು ನಡೆದ ಪೈಶಾಚಿಕ ಕೃತ್ಯ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ್ದನ್ನು ಐಎಂಎ ತೀವ್ರವಾಗಿ ಖಂಡಿಸಿತಲ್ಲದೇ, ಅತ್ಯಾಚಾರ, ಹತ್ಯೆ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಅತ್ಯಾಚಾರಕ್ಕೊಳಗಾಗಿ ಅಮಾನುಷವಾಗಿ ಹತ್ಯೆಯಾದ ವೈದ್ಯಕೀಯ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಸಿಗಬೇಕು. ನಿಷ್ಪಕ್ಷಪಾತ ತನಿಖೆಯಾಗಿ, ಅತ್ಯಾಚಾರಿ ಹಂತಕರ ವಿರುದ್ಧ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣವನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ಒಪ್ಪಿಸಬೇಕು. ಪ್ರಕರಣ ತ್ವರಿತವಾಗಿ ವಿಚಾರಣೆ ನಡೆಸಿ, ಅತ್ಯಾಚಾರಿ, ಹಂತಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾ ನಿರತ ಹಿರಿಯ, ಕಿರಿಯ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಆಗ್ರಹಿಸಿದರು.

ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ, ಆಸ್ಪತ್ರೆಗಳ ಮೇಲಿನ ದಾಳಿಗಳನ್ನು ತೀವ್ರವಾಗಿ ಖಂಡಿಸುತ್ತೇವೆ. ತಕ್ಷಣವೇ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ, ಆಸ್ಪತ್ರೆಗಳನ್ನು ಸುರಕ್ಷಿತ ವಲಯಗಳೆಂದು ಘೋಷಣೆ ಮಾಡಬೇಕು. ವೈದ್ಯಕೀಯ ವೃತ್ತಿಪರರಿಗೆ ಸೂಕ್ತ ರಕ್ಷಣೆ, ಭದ್ರತೆ ಕಲ್ಪಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅಗತ್ಯ ಕಾನೂನು ರೂಪಿಸಿ, ಅನುಷ್ಠಾನಕ್ಕೆ ತರಬೇಕು ಎಂದು ಮನವಿ ಮಾಡಿದರು.