ಸಾರಾಂಶ
ದಾಬಸ್‍ಪೇಟೆ: ಕುಷ್ಠರೋಗವನ್ನು ಆರಂಭಿಕ ಹಂತದಲ್ಲಿ ಗುರುತಿಸಿದಲ್ಲಿ ಅದರ ನಿವಾರಣೆ ಸಾಧ್ಯ ಎಂದು ಶಿವಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೇತನ್ ಕುಮಾರ್ ತಿಳಿಸಿದರು. ಸೋಂಪುರ ಹೋಬಳಿಯ ಶಿವಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರೋಗದ ಬಗ್ಗೆ ಸಮಾಜದಲ್ಲಿನ ತಪ್ಪು ತಿಳಿವಳಿಕೆಯಿಂದ ಜನರು ತಪಾಸಣೆಗೆ ಹಿಂದೇಟು ಹಾಕುತ್ತಾರೆ. ಅದನ್ನು ಬದಿಗೊತ್ತಿ ತಪಾಸಣೆಗೆ ಹಿಂಜರಿಯದೆ ಸಹಕರಿಸಬೇಕು. ಆಗ ಪ್ರಾಥಮಿಕ ಹಂತದಲ್ಲಿ ರೋಗ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ. ಜೊತೆಗೆ ರೋಗ ಗುಣಪಡಿಸಲು ಸಾಧ್ಯವಾಗುತ್ತದೆ ಎಂದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆನಂದ್ ಕುಮಾರ್ ಮಾತನಾಡಿ, ಸಾರ್ವಜನಿಕರು ಕುಷ್ಠರೋಗದ ಬಗ್ಗೆ ತಿಳಿದುಕೊಂಡು ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕುಷ್ಠರೋಗ ನಿವಾರಣೆ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ಹತ್ತಾರು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲು ಮುಂದಾಗಿದೆ. ಹಾಗಾಗಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಹಿರಿಯ ಪ್ರಾಥಮಿಕ ಸುರಕ್ಷಣಾಧಿಕಾರಿ ವಿಶಾಲಮ್ಮ, ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.