ಕೆಪಿಸಿ ಜಾಗ ಮಂಜೂರು ವಿಚಾರಕ್ಕೆ ಮೋಸ ಹೋಗಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು

| Published : Nov 05 2025, 12:15 AM IST

ಕೆಪಿಸಿ ಜಾಗ ಮಂಜೂರು ವಿಚಾರಕ್ಕೆ ಮೋಸ ಹೋಗಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು
Share this Article
  • FB
  • TW
  • Linkdin
  • Email

ಸಾರಾಂಶ

ಕೆಪಿಸಿ ಜಾಗವನ್ನು ಮಂಜೂರು ಮಾಡಿಸಿಕೊಡುತ್ತೇವೆ ಎಂದು ಕೆಲವರು ರೈತರಿಂದ ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಕುಂದಾಪುರ ಮೂಲದ ವ್ಯಕ್ತಿಯೊಬ್ಬ ಜನರಿಂದ ಹಣ ವಸೂಲಿ ಮಾಡುತ್ತಿದ್ದು, ಸಾರ್ವಜನಿಕರು ಹಣ ಕೊಟ್ಟು ಮೋಸ ಹೋಗಬಾರದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಕನ್ನಡಪ್ರಭ ವಾರ್ತೆ ಸಾಗರ

ಕೆಪಿಸಿ ಜಾಗವನ್ನು ಮಂಜೂರು ಮಾಡಿಸಿಕೊಡುತ್ತೇವೆ ಎಂದು ಕೆಲವರು ರೈತರಿಂದ ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಕುಂದಾಪುರ ಮೂಲದ ವ್ಯಕ್ತಿಯೊಬ್ಬ ಜನರಿಂದ ಹಣ ವಸೂಲಿ ಮಾಡುತ್ತಿದ್ದು, ಸಾರ್ವಜನಿಕರು ಹಣ ಕೊಟ್ಟು ಮೋಸ ಹೋಗಬಾರದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ಉಪವಿಭಾಗಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಹೆದ್ದಾರಿ ಪ್ರಾಧಿಕಾರ, ನಗರಸಭೆ, ಪಿಡಬ್ಲ್ಯೂಡಿ ಮತ್ತು ಮೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಕೆಪಿಸಿ ವಶದಲ್ಲಿರುವ ಭೂಮಿಯನ್ನು ಮಂಜೂರು ಮಾಡುತ್ತಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಹೇಳಿದರು.

ಲಿಂಗನಮಕ್ಕಿ ಆಣೆಕಟ್ಟು ನಿರ್ಮಾಣ ಸಂದರ್ಭದಲ್ಲಿ ಕೆಪಿಸಿ ಒಂದಷ್ಟು ಭೂಮಿಯನ್ನು ವಶಪಡಿಸಿಕೊಂಡಿದೆ. ಅದನ್ನು ಪುನಃ ಸಂತ್ರಸ್ತರಿಗೆ ಕೊಡುವ ಪ್ರಸ್ತಾಪ ಸದ್ಯ ಸರ್ಕಾರದ ಎದುರು ಇಲ್ಲ. ಆದರೆ ಕೆಲವು ಬ್ರೋಕರ್‌ಗಳು ಹುಟ್ಟಿಕೊಂಡು ಜನರನ್ನು ವಂಚಿಸುತ್ತಿದ್ದಾರೆ. ಸುಳ್ಳು ಸುದ್ದಿ ನಂಬಬೇಡಿ. ತೀ.ನ.ಶ್ರೀನಿವಾಸ್ ಕೆಪಿಸಿ ವಶದಲ್ಲಿರುವ ಭೂಮಿ ಹಿಂದಿರುಗಿಸಿ ಎಂದು ಅರ್ಜಿ ಸಲ್ಲಿಸಿದ್ದಾರೆ. ಕೆಲವರು ತುಮರಿ ಭಾಗದಲ್ಲಿ ಹೋಗಿ ರೈತರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಜನರು ಸುಳ್ಳು ಸುದ್ದಿಯನ್ನು ನಂಬಬಾರದು. ತುಮರಿ ಭಾಗದಲ್ಲಿ ಯಾರಾದರು ಸುಳ್ಳು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದರೆ, ಅವರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.

ನಗರಸಭೆ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಲು ಸಿದ್ದತೆ ನಡೆಸಿದ್ದೇವೆ. ಮುಂದಿನ ಎರಡು ತಿಂಗಳಿನಲ್ಲಿ ರಸ್ತೆ ಕಾಮಗಾರಿ ಮುಗಿಸಬೇಕು. ಪೊಲೀಸ್ ಸ್ಟೇಷನ್ ಸ್ಥಳಾಂತರಿಸಿ ರಸ್ತೆ ಅಗಲೀಕರಣ ಮಾಡಲು ತಿಳಿಸಿದೆ. ಇದರ ಜೊತೆಗೆ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಹ ನಿಗಾವಹಿಸಿದೆ. ರೈಲ್ವೆ ನಿಲ್ದಾಣ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುವುದು ಹಾಗೂ ಅಗ್ರಹಾರ, ಶಿವಪ್ಪನಾಯಕ ವೃತ್ತ, ಪೊಲೀಸ್ ಸ್ಟೇಷನ್ ವೃತ್ತವನ್ನು ಅಭಿವೃದ್ದಿಪಡಿಸಲಾಗುತ್ತದೆ ಎಂದರು.

ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಲೋಕೇಶ್, ರಾಕೇಶ್, ದೇವರಾಜ್, ಗೋಪಿನಾಥ್, ರಮೇಶ್ ಟಿ.ಪಿ. ಇನ್ನಿತರರು ಹಾಜರಿದ್ದರು.

ಸಚಿವ ಸ್ಥಾನ ಸಿಗುವ ವಿಶ್ವಾಸ

ಮೂರು ಬಾರಿ ಗೆದ್ದು ಶಾಸಕನಾಗಿರುವ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಶಾಸಕ ಬೇಳೂರು ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ದೆಹಲಿಗೆ ಹೋಗಿದ್ದಾಗ ವರಿಷ್ಠರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ. ನನ್ನ ಹಕ್ಕನ್ನು ಕೇಳಲು ಯಾವುದೇ ಮುಜುಗರವಿಲ್ಲ. ಅಗತ್ಯಬಿದ್ದರೆ ಇನ್ನೊಮ್ಮೆ ದೆಹಲಿಗೆ ಹೋಗಲು ಸಹ ಸಿದ್ದನಿದ್ದೇನೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ನಾನು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಮುಖ್ಯಮಂತ್ರಿ ಬದಲಾವಣೆ, ಸಚಿವರ ಬದಲಾವಣೆ ಶಾಸಕರ ಕೈಯಲ್ಲಿ ಇಲ್ಲ. ಎಲ್ಲವೂ ರಾಷ್ಟ್ರೀಯ ನಾಯಕರು ನೋಡಿಕೊಳ್ಳುತ್ತಾರೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ಮಾಡುತ್ತಾರೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.