ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಡೆತಡೆ ಮಾಡಬೇಡಿ

| Published : Apr 04 2025, 12:46 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಇಂಡಿ ಏಪ್ರೀಲ್‌, ಮೇ ಎರಡು ತಿಂಗಳ ಬೇಸಿಗೆಯಲ್ಲಿ ತಾಲೂಕಿನ ಯಾವುದೇ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಮುಂಬರುವ ದಿನಗಳಲ್ಲಿ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದು ಎಂಬ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ತಯಾರಿಸಿಟ್ಟುಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಇಂಡಿ

ಏಪ್ರೀಲ್‌, ಮೇ ಎರಡು ತಿಂಗಳ ಬೇಸಿಗೆಯಲ್ಲಿ ತಾಲೂಕಿನ ಯಾವುದೇ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಮುಂಬರುವ ದಿನಗಳಲ್ಲಿ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದು ಎಂಬ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ತಯಾರಿಸಿಟ್ಟುಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಹಮ್ಮಿಕೊಂಡ ಅಭಿವೃದ್ದಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಬೇಸಿಗೆಯಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಒದಗಿಸಲು ಯಾವುದೇ ಅಡೆ- ತಡೆ ಉಂಟಾಗದಂತೆ ನೋಡಿಕೊಳ್ಳಬೇಕು. ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗಬಾರದು. ಅಭಿವೃದ್ಧಿ ಅಧಿಕಾರಿಗಳು ಪ್ರತಿ ನಿತ್ಯ ಕೇಂದ್ರ ಸ್ಥಾನದಲ್ಲಿದ್ದು, ನೀರಿನ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಹೇಳಿದರು.

ಜನ ವಸತಿ ಪ್ರದೇಶದಲ್ಲಿನ ಜನ-ಜಾನುವಾರುಗಳಿಗೆ ಯಾವುದೇ ರೀತಿ ನೀರಿನ ಅಭಾವವಾಗದಂತೆ ಕುಡಿಯುವ ನೀರು ಪೂರೈಸಬೇಕು. ಬಸನಾಳ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಲ್ಲಿಕಾರ್ಜುನ ನೀಲಂಗಿ ಬಸನಾಳ, ಅಗಸನಾಳ, ಕ್ಯಾತನಕೇರಿ ಹಾಗೂ ತಾಂಡಾಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಗ್ರಾಮ ಪಂಚಾಯಿತಿಯ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಕುಡಿಯುವ ನೀರಿನ ತೊಂದರೆ ಆಗದಂತೆ ಸೂಕ್ತ ಕ್ರಮವಹಿಸಬೇಕು. ನಾಳೆ ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಬಸನಾಳ ಸೇರಿದಂತೆ ಇತರೆ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸುವುದಾಗಿ ಎಸಿ ತಿಳಿಸಿದರು.ತಾಪಂ ಇಒ ನಂದೀಪ ರಾಠೋಡ ಮಾತನಾಡಿ, ಕುಡಿಯುವ ನೀರಿನ ಅನುದಾನದ ಬಗ್ಗೆ ಮಾಹಿತಿ ನೀಡಬೇಕು. ವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಯಾವುದೇ ಕಾರಣಕ್ಕೂ ಸಬೂಬು ಹೇಳಬಾರದು. ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಗ್ರಾಮ ಪಂಚಾಯಿತಿಯವರು ಏನು ಮಾಡುತ್ತಿಲ್ಲ ಎಂಬ ದೂರುಗಳು ಬರಬಾರದು. ಬಂದರೆ ಅಂತಹ ಪಿಡಿಒಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಪಂ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯ ಎಇಇ, ತಾಲೂಕಿನ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಸಭೆಯಲ್ಲಿ ಹಾಜರಿದ್ದರು.-------

ಕೋಟ್‌

ಇಂಡಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಕೆಲವು ವಸತಿ ಪ್ರದೇಶ, ಶಾಲೆಗಳನ್ನು ಹೊರತುಪಡಿಸಿ ಈ ತಿಂಗಳು ತಾಲೂಕಿನಲ್ಲಿ ಎಲ್ಲಿಯೂ ಕಂಡು ಬಂದಿಲ್ಲ. ಮುಂದಿನ ತಿಂಗಳು ಸ್ವಲ್ಪಮಟ್ಟಿಗೆ ಆಗಬಹುದು. ಅಧಿಕಾರಿಗಳ ಸಭೆ ಮಾಡಲಾಗಿದೆ. ಮುಂಜಾಗ್ರತಾ ವಹಿಸಲು ಸೂಚಿಸಲಾಗಿದೆ. ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದು ಕ್ರಮ ಕೈಕೊಳ್ಳಲಾಗುತ್ತದೆ. ಸಾರ್ವಜನಿಕರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಪ್ರಯತ್ನಿಸಲಾಗುತ್ತದೆ.

ಅನುರಾಧಾ ವಸ್ತ್ರದ, ಉಪವಿಭಾಗಾಧಿಕಾರಿ ಇಂಡಿ