ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸರ್ಕಾರಿ ನೌಕರರು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸ್ವತಂತ್ರವಾಗಿ, ಆತ್ಮಸಾಕ್ಷಿಯಂತೆ ಮತ ಚಲಾಯಿಸಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ:ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳ ಮೂಲಕ ಮತದಾರರ ನೋಂದಣಿ ಮಾಡಿಸುವ ನೆಪದಲ್ಲಿ ಸರ್ಕಾರಿ ನೌಕರರನ್ನು ರಾಜಕಾರಣಕ್ಕೆ ಎಳೆಯುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸರ್ಕಾರಿ ನೌಕರರು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸ್ವತಂತ್ರವಾಗಿ, ಆತ್ಮಸಾಕ್ಷಿಯಂತೆ ಮತ ಚಲಾಯಿಸಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಪದಾಧಿಕಾರಿಗಳು, ಘಟನಾಯಕರು ಹಾಗೂ ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿಗಳು, ಪಿಡಿಒಗಳು ಹಾಗೂ ಇತರ ಅಧಿಕಾರಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದರು.ಸರ್ಕಾರಿ ನೌಕರರು ಹಾಗೂ ಅವರ ಸಂಘಟನೆಗಳ ಸದಸ್ಯರನ್ನು ಸಂಪರ್ಕಿಸಿದಾಗ, ಮತದಾರರ ನೋಂದಣಿ ವಿಚಾರದಲ್ಲಿ ಸರ್ಕಾರದ ಕಾರ್ಯವೈಖರಿಯನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು. ಸರ್ಕಾರಿ ನೌಕರರು ಶಾಶ್ವತವಾಗಿದ್ದು, ಆಡಳಿತ ನಡೆಸುವ ಪಕ್ಷಗಳು ಬದಲಾಗುತ್ತವೆ. ಹೀಗಾಗಿ ಯಾವುದೇ ಪಕ್ಷದ ಒತ್ತಡಕ್ಕೆ ಒಳಗಾಗಿ ಮತ ಚಲಾಯಿಸದೆ, ಅಭ್ಯರ್ಥಿಗಳ ಕಾರ್ಯವೈಖರಿ ಹಾಗೂ ತಮ್ಮ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದರು.
ಹಾವೇರಿ, ರಾಣಿಬೆನ್ನೂರಿನಲ್ಲಿ ಹೆಚ್ಚು ನಿರೀಕ್ಷೆ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾವೇರಿ ಮತ್ತು ರಾಣಿಬೆನ್ನೂರು ನಗರಗಳಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರಿದ್ದಾರೆ. ಈ ಎರಡೂ ನಗರಗಳಲ್ಲಿ ಪಕ್ಷದ ಕಾರ್ಯಕರ್ತರು ಉತ್ತಮ ಕೆಲಸ ಮಾಡಿದ್ದು, ಹಾವೇರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಸಂಕನೂರು ಅವರಿಗೆ ಹೆಚ್ಚಿನ ಮತಗಳು ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು.ಕೌಶಲ್ಯಾಭಿವೃದ್ಧಿಗೆ ಕೇಂದ್ರದ ಒತ್ತು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಂಖ್ಯೆಯನ್ನು ದೇಶದ ಶಕ್ತಿಯನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಿದೆ. ಯುವಕರಿಗೆ ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಸ್ಥಾಪಿಸಲಾಗಿದೆ. ಈ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ವೆಚ್ಚ ಮಾಡಿರುವ ಅನುದಾನದಲ್ಲಿಯೂ ಕೇಂದ್ರದ ಹಣದ ಪಾಲಿದೆ ಎಂದು ಪ್ರತಿಪಾದಿಸಿದರು.
ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಡಿ ಕೋಟ್ಯಂತರ ಜನರು ನೋಂದಣಿಯಾಗಿದ್ದು, ಅನೇಕರು ತರಬೇತಿ ಪಡೆದು ಉದ್ಯೋಗಾವಕಾಶಗಳನ್ನು ಪಡೆದಿದ್ದಾರೆ. ಪ್ರಧಾನಮಂತ್ರಿ ಕೌಶಲ್ಯ ಯೋಜನೆಯ ನಾಲ್ಕನೇ ಹಂತಕ್ಕೆ 4,300 ಕೋಟಿ ಅನುದಾನ ನೀಡಲಾಗಿದ್ದು, ಮುಂದಿನ ನಾಲ್ಕು ವರ್ಷಗಳಲ್ಲಿ ಸುಮಾರು ಮೂರೂವರೆ ಕೋಟಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದರು.ಸ್ವಯಂ ಉದ್ಯೋಗಕ್ಕೆ ನೆರವು: ಮುದ್ರಾ ಯೋಜನೆಯಡಿ ಯಾವುದೇ ಗ್ಯಾರಂಟಿ ಇಲ್ಲದೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಹಾವೇರಿ ಜಿಲ್ಲೆಯೊಂದರಲ್ಲೇ ಈ ಯೋಜನೆಯಡಿ ಸುಮಾರು 1.6 ಲಕ್ಷ ಸಾಲಗಳನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಬಿಜೆಪಿ ಅಭ್ಯರ್ಥಿಯ ಕಾರ್ಯಗಳನ್ನು ಪದವೀಧರ ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಬೆಂಬಲ ಕೋರಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕ ಶಿವರಾಜ ಸಜ್ಜನರ, ಶಹರ ಘಟಕದ ಅಧ್ಯಕ್ಷ ಕಿರಣ ಕೊಳ್ಳಿ, ನೀಲಪ್ಪ ಚಾವಡಿ, ಸಂತೋಷ ಆಲದಕಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.