ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಭಾಗಗಳಲ್ಲಿ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಸಾಗಾಟ ಮಾಡಲಾಗುತ್ತಿದ್ದ ಅಡಕೆ ತುಂಬಿದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಎಂಬ ನೆಪದಲ್ಲಿ ಮಹಾರಾಷ್ಟ್ರ ಬಿಜೆಪಿ ಸರಕಾರ ವಶಪಡಿಸಿಕೊಳ್ಳುತ್ತಿರುವುದು ಅತ್ಯಂತ ಖಂಡನೀಯ.
ಮಹಾರಾಷ್ಟ್ರದಲ್ಲಿ ಅಡಕೆ ಸಾಗಾಟದ ಲಾರಿ ವಶಪಡಿಸಿಕೊಳ್ಳುತ್ತಿರುವುದು ಖಂಡನೀಯಕನ್ನಡಪ್ರಭ ವಾರ್ತೆ ಯಲ್ಲಾಪುರ
ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಭಾಗಗಳಲ್ಲಿ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಸಾಗಾಟ ಮಾಡಲಾಗುತ್ತಿದ್ದ ಅಡಕೆ ತುಂಬಿದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಎಂಬ ನೆಪದಲ್ಲಿ ಮಹಾರಾಷ್ಟ್ರ ಬಿಜೆಪಿ ಸರಕಾರ ವಶಪಡಿಸಿಕೊಳ್ಳುತ್ತಿರುವುದು ಅತ್ಯಂತ ಖಂಡನೀಯ. ಇದು ರೈತ ವಿರೋಧಿ ಕ್ರಮವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಸಾವಿರಾರು ಅಡಕೆ ಬೆಳೆಗಾರರು ಕಳೆದ ಎರಡು ವರ್ಷಗಳಿಂದ ಎಲೆಚುಕ್ಕೆ ರೋಗದ ಹಾವಳಿಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಬೆಳೆ ನಷ್ಟ, ಉತ್ಪಾದನೆ ಕುಸಿತ ಹಾಗೂ ಆರ್ಥಿಕ ಸಂಕಷ್ಟದಿಂದ ರೈತರು ಈಗಾಗಲೇ ಕಂಗೆಟ್ಟಿದ್ದು, ಇಂತಹ ಸಂದರ್ಭದಲ್ಲಿ ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಈ ಕ್ರಮ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಅಡಕೆ ಬೆಳೆಗಾರರು ಮತ್ತು ವ್ಯಾಪಾರಸ್ಥರು ಎಲ್ಲ ಕಾನೂನುಬದ್ಧ ದಾಖಲೆಗಳನ್ನು ಹೊಂದಿದ್ದರೂ ಲಾರಿಗಳನ್ನು ವಶಪಡಿಸಿಕೊಳ್ಳುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಭಾರೀ ಆತಂಕ ಉಂಟಾಗಿದೆ. ರೈತರು ತಮ್ಮ ಉತ್ಪನ್ನಕ್ಕೆ ನ್ಯಾಯಯುತ ಬೆಲೆ ಸಿಗದೆ ಆರ್ಥಿಕವಾಗಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಡಕೆ ಬೆಳೆಗಾರರ ಜೀವನಾಧಾರಕ್ಕೆ ಧಕ್ಕೆ ತರುವ ಇಂತಹ ದಮನಕಾರಿ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು. ಕೇಂದ್ರ ಹಾಗೂ ಮಹಾರಾಷ್ಟ್ರದ ಬಿಜೆಪಿ ಸರ್ಕಾರ ರೈತರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಸಮಸ್ಯೆಯನ್ನು ತುರ್ತಾಗಿ ಪರಿಹರಿಸಬೇಕು. ರೈತರ ಬದುಕು ಮತ್ತು ಅವರ ಶ್ರಮದೊಂದಿಗೆ ಚೆಲ್ಲಾಟ ನಡೆಸುವ ಯಾವುದೇ ಕ್ರಮವನ್ನು ಸಹಿಸಲಾಗುವುದಿಲ್ಲ.
ರಾಜ್ಯದ ಲಕ್ಷಾಂತರ ಅಡಕೆ ಬೆಳೆಗಾರರ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ಈ ವಿಚಾರದಲ್ಲಿ ಸರ್ಕಾರಗಳು ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ರೈತರು ಮತ್ತು ಅಡಕೆ ಬೆಳೆಗಾರರ ಪರವಾಗಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಹೆಬ್ಬಾರ ಎಚ್ಚರಿಕೆ ನೀಡಿದ್ದಾರೆ.