ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ವಂಡ್ಸೆ ಮತ್ತು ಬೈಂದೂರು ಹೋಬಳಿಯ ಕೆಲವು ಗ್ರಾಮಗಳಲ್ಲಿ ಕಳೆದ 15ರಿಂದ 20 ದಿನಗಳಿಂದ ಕಾಡು ಹಂದಿಗಳು ಸಾಯುತ್ತಿರುವ ಪ್ರಕರಣಗಳು ವರದಿಯಾಗಿದ್ದು, ಇದೀಗ ಸಾಕು ಹಂದಿಗಳೂ ಮೃತಪಟ್ಟಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಆದರೆ ಈ ಹಂತದಲ್ಲಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.

ಸೋಮವಾರ ಕುಂದಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಶು ಸಂಗೋಪನೆ, ಅರಣ್ಯ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯಾಡಳಿತದ ಅಧಿಕಾರಿಗಳೊಂದಿಗೆ ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೃತಪಟ್ಟ ಕಾಡು ಹಾಗೂ ಸಾಕು ಹಂದಿಗಳ ಮಾದರಿಗಳನ್ನು ಈಗಾಗಲೇ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಶೀಘ್ರದಲ್ಲೇ ಲಭ್ಯವಾಗುವ ನಿರೀಕ್ಷೆ ಇದೆ. ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿಯಲಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಹೇಳಿದರು.ಈ ನಡುವೆ ಪಶು ಸಂಗೋಪನೆ, ಅರಣ್ಯ, ಆರೋಗ್ಯ ಇಲಾಖೆ ಮತ್ತು ಸ್ಥಳೀಯಾಡಳಿತದ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.ಕುಂದಾಪುರ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಅರುಣ್ ಕುಮಾರ್ ಹೆಗ್ಡೆ, ಎರಡು ಕಾಡು ಹಂದಿ ಹಾಗೂ ಒಂದು ಸಾಕು ಹಂದಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಸಾಕು ಹಂದಿ ಮೃತಪಟ್ಟ ಮನೆಯ ಸದಸ್ಯರ ಆರೋಗ್ಯ ತಪಾಸಣೆಯನ್ನೂ ನಡೆಸಲಾಗಿದ್ದು, ಯಾರಲ್ಲೂ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ. ಹೀಗಾಗಿ ಸಾರ್ವಜನಿಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದರು.ಕುಂದಾಪುರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಪಂಗಳ ಆಡಳಿತಾಧಿಕಾರಿಗಳು ಮತ್ತು ಪಿಡಿಒಗಳು ಇದ್ದರು.