ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 134ನೇ ಜಯಂತಿಯನ್ನು ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅದ್ಧೂರಿಯಾಗಿ ಆಚರಿಸಿದರು.ಪಟ್ಟಣ ಪುರಸಭೆ ಕಚೇರಿ ಆವರಣದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆಗೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಹಸೀಲ್ದಾರ್ ಡಾ.ಸ್ಮಿತಾರಾಮು ಹಾಗೂ ಪುರಸಭೆ ಅಧ್ಯಕ್ಷೆ ಕೋಕಿಲಾ ಅರುಣ್ ಸೇರಿದಂತೆ ಇತರರು ಮಾಲಾರ್ಪಣೆ ಸಲ್ಲಿಸಿ ಗೌರವ ಸಮರ್ಪಿಸಿದರು.
ಬಳಿಕ ಮಾತನಾಡಿದ ತಹಸೀಲ್ದಾರ್ ಡಾ.ಸ್ಮಿತಾರಾಮು ಮಾತನಾಡಿ, ಅಂಬೇಡ್ಕರ್ ಕೊಡುಗೆ ವಿಶ್ವಕ್ಕೆ ಅನನ್ಯವಾಗಿದೆ.ಅರ್ಥಶಾಸ್ತ್ರಜ್ಞರಾಗಿ ಕೊಡುಗೆ ನೀಡಿರುವ ಅಂಬೇಡ್ಕರ್ ಅವರು ಪ್ರತಿಯೊಬ್ಬರ ಸಮಾನತೆಯ ಆಶಯದ ನೆಲಗಟ್ಟಿನಲ್ಲಿ ಕಾರ್ಯೋನ್ಮುಖರಾಗಿ ವಿಶ್ವವೇ ಮೆಚ್ಚುವಂತಹ ಸಂವಿಧಾನವನ್ನು ರಚಿಸಿದ್ದಾರೆಂದು ಬಣ್ಣಿಸಿದರು.
ಪುರಸಭೆ ಅಧ್ಯಕ್ಷೆ ಕೋಕಿಲಾ ಅರುಣ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕೆಂದರು.ಬೆಂಗಳೂರು ದಿ. ಆಕ್ಸಫರ್ಡ್ ಕಾಲೇಜು ಕನ್ನಡ ವಿಭಾಗ ಪ್ರಾಧ್ಯಾಪಕ ಡಾ.ಶಿವರಾಜು ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಿ ಗೌರವಿಸಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.
ಪಟ್ಟಣದ ಶ್ರೀಉಗ್ರನರಸಿಂಹಸ್ವಾಮಿ ದೇವಾಲಯದ ಆವರಣದಿಂದ ಸಾಂಸ್ಕೃತಿಕ ಕಲಾ ತಂಡಗಳೊಟ್ಟಿಗೆ ತೆರೆದ ವಾಹನದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಕರೆತರಲಾಯಿತು.ಈ ವೇಳೆ ಪುರಸಭೆ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತ, ಸದಸ್ಯರಾದ ಪ್ರಮೀಳ, ಸುರೇಶ್‌ಕುಮಾರ್, ಕಮಲ್‌ನಾಥ್, ಸಿದ್ದರಾಜು, ತಾಪಂ ಇಒ ರಾಮಲಿಂಗಯ್ಯ, ಮುಖ್ಯಾಧಿಕಾರಿ ಮೀನಾಕ್ಷಿ, ಬಿಇಒ ಟಿ.ದೇವರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಲ್.ನಾಗರಾಜು, ಮುಖಂಡ ಚಿದಂಬರ್‌ಮೂರ್ತಿ, ಸ್ಥಳೀಯ ದಲಿತ ಮುಖಂಡರು, ಅಧಿಕಾರಿಗಳು ಹಾಜರಿದ್ದರು.