ಡಾ.ಅಂಬೇಡ್ಕರ್‌ ಸೇವೆ ಎಂದೆಂದಿಗೂ ಅಮರ

| Published : Dec 07 2024, 12:31 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಆಧುನಿಕ ಭಾರತದ ನಿರ್ಮಾತೃ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ತ್ಯಾಗ ಮತ್ತು ಸಮಾಜ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಗುಲಬರ್ಗಾ ವಿ.ವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಆಧುನಿಕ ಭಾರತದ ನಿರ್ಮಾತೃ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ತ್ಯಾಗ ಮತ್ತು ಸಮಾಜ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಗುಲಬರ್ಗಾ ವಿ.ವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್‌.ಅಂಬೇಡ್ಕರ್‌ ಅಧ್ಯಯನ ಕೇಂದ್ರ ಮತ್ತು ಪ.ಜಾ, ಪ.ಪಂ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 68ನೇ ಮಹಾಪರಿನಿರ್ವಾಣ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸದಲ್ಲಿ ಅವರು ಬಣ್ಣಿಸಿದರು.

ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಅಂಬೇಡ್ಕರ ಅವರು ಈ ದೇಶಕ್ಕೆ ಮಹಾನ್ ಕೊಡುಗೆ ನೀಡಿದ್ದಾರೆ ಎಂದರು.

ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಮಾತನಾಡಿ, ಅಂಬೇಡ್ಕರ ಅವರ ಜೀವನ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ಆರ್ಥಿಕ ಪ್ರಗತಿಗೆ ಮಹತ್ವಪೂರ್ಣ ಕೊಡುಗೆಗಳನ್ನು ನೀಡಿದ ಮಹಾನ್ ವ್ಯಕ್ತಿ. ಆರ್ಥಿಕ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸಲು ತತ್ವಗಳನ್ನು ರೂಪಿಸಿ, ದಲಿತರು ಹಾಗೂ ಹಿಂದುಳಿದ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಹಕ್ಕುಗಳನ್ನು ರಕ್ಷಿಸಲು ಹಲವು ಕ್ರಮಗಳನ್ನು ಜಾರಿಗೆ ತಂದರು ಎಂದು ಸ್ಮರಿಸಿದರು,

ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಸಂಘಟಿಸಿ ವಿಜೇತರಿಗೆ ನಗದು ಬಹುಮಾನ ನೀಡಲಾಯಿತು. ಡಾ.ಬಿ.ಆರ್‌.ಅಂಬೇಡ್ಕರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ ಸ್ವಾಗತಿಸಿದರು. ಪ.ಜಾ, ಪ.ಪಂ ಘಟಕದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ನಿರೂಪಿಸಿದರು. ಡಾ.ಬಾಬು ಲಮಾಣಿ ವಂದಿಸಿದರು.