ಡಾ. ಅಂಬೇಡ್ಕರ್ ಆಧುನಿಕ ಭಾರತದ ನಿರ್ಮಾತೃ: ನ್ಯಾಯಾಧೀಶ ಮಾಯಣ್ಣ

| Published : Apr 15 2024, 01:27 AM IST

ಡಾ. ಅಂಬೇಡ್ಕರ್ ಆಧುನಿಕ ಭಾರತದ ನಿರ್ಮಾತೃ: ನ್ಯಾಯಾಧೀಶ ಮಾಯಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಡಾ. ಬಿ.ಆರ್. ಅಂಬೇಡ್ಕರ್ ಅವರು ಅಪಾರ ಜ್ಞಾನ ಸಂಪತ್ತನ್ನು ಹೊಂದಿದ್ದು, ೩೨ಕ್ಕೂ ಅಧಿಕ ಪದವಿ ಪಡೆದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದು ನ್ಯಾಯಾಧೀಶ ಮಾಯಣ್ಣ ಬಿ.ಎಲ್. ತಿಳಿಸಿದರು.

ಕಾರವಾರ: ಜ್ಞಾನದ ಹಿಮಾಲಯ, ಜ್ಞಾನದ ರತ್ನವಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆ, ಸಿದ್ಧಾಂತ, ಅವರು ಹಾಕಿಕೊಟ್ಟ ಮಾರ್ಗ ಹಾಗೂ ಅವರ ದೂರದೃಷ್ಟಿ ನೋಡಿದಾಗ ಅವರನ್ನು ಆಧುನಿಕ ಭಾರತದ ನಿರ್ಮಾತೃ ಎಂದು ಕರೆಯಲಾಗುತ್ತದೆ ಎಂದು ಇಲ್ಲಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಬಿ.ಎಲ್. ತಿಳಿಸಿದರು.

ನಗರದ ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೩ನೇ ಜಯಂತಿ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಮರ್ಪಿಸಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ಅಪಾರ ಜ್ಞಾನ ಸಂಪತ್ತನ್ನು ಹೊಂದಿದ್ದು, ೩೨ಕ್ಕೂ ಅಧಿಕ ಪದವಿ ಪಡೆದ ಏಕೈಕ ವ್ಯಕ್ತಿಯಾಗಿದ್ದಾರೆ. ಸ್ವತಂತ್ರ ಭಾರತದ ಮೊದಲ ಕಾನೂನು ಮಂತ್ರಿ, ಅರ್ಥಶಾಸ್ತಜ್ಞ, ನ್ಯಾಯಶಾಸ್ತಜ್ಞ ಹಾಗೂ ಸಮಾಜ ಸುಧಾಕರಾಗಿದ್ದವರು. ಆಗಿನ ಕಾಲದಲ್ಲಿ ಶಿಕ್ಷಣ ಪಡೆಯುವುದು ಅತ್ಯಂತ ಕಠಿಣವಾಗಿತ್ತು. ಅಂತಹ ಸಂದರ್ಭದಲ್ಲಿ ಉನ್ನತ ಶಿಕ್ಷಣ ಪಡೆದು ದೀನ- ದಲಿತರು, ಶೋಷಿತರು ಹಾಗೂ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿ ಎಲ್ಲರಿಗೂ ಸಮಾನತೆ ದೊರಕಿಸಿಕೊಡಲು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ಮಹಾನ ವ್ಯಕ್ತಿ ಎಂದರು.

ಸಂವಿಧಾನ ರಚನಾ ಕರಡು ಸಮಿತಿಯ ಅಧ್ಯಕ್ಷರಾಗಿ ವೈವಿಧ್ಯಮಯ ಸಂಸ್ಕೃತಿ, ಆಚಾರ ವಿಚಾರ ಹೊಂದಿದ ಬೃಹತ್ ಭಾರತ ರಾಷ್ಟ್ರಕ್ಕೆ ಸಂವಿಧಾನ ರಚಿಸುವುದು ಸಾಮಾನ್ಯ ಮಾತಲ್ಲ. ಅಂತಹ ಶ್ರೇಷ್ಠ ಸಂವಿಧಾನವನ್ನು ರಚಿಸುವ ಮೂಲಕ ಸುಭದ್ರ ರಾಷ್ಟ್ರಕ್ಕೆ ಅವರ ನೀಡಿದ ಕೊಡುಗೆ ಇಂದಿಗೂ ಪ್ರಸ್ತುತ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ದೇಶದ ಪ್ರತಿಯೊಬ್ಬರಿಗೂ ರಕ್ಷಣೆ ನೀಡುವುದು ಸಂವಿಧಾನವಾಗಿದೆ. ಅಂತಹ ಶ್ರೇಷ್ಠ ಸಂವಿಧಾನ ರಚಿಸುವ ಮೂಲಕ ಸಮಾಜದಲ್ಲಿನ ಅಸ್ಪೃಶ್ಯತೆ ನಿವಾರಿಸಿ ಎಲ್ಲರಿಗೂ ಸಮಾನತೆ ಒದಗಿಸಲು ಶ್ರಮಿಸಿದ ಮಹಾನ ನಾಯಕರಾಗಿದ್ದಾರೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡಾಗ ಮಾತ್ರ ಸಂವಿಧಾನದ ಆಶಯಗಳಿಗೆ ಗೌರವ ಸೂಚಿಸಿದಂತಾಗುತ್ತದೆ ಎಂದರು.

ನಿವೃತ್ತ ಪ್ರಾಧ್ಯಾಪಕ ಎಂ.ಆರ್. ನಾಯಕ ಉಪನ್ಯಾಸ ನೀಡಿ, ದೀನ- ದಲಿತರ, ದುರ್ಬಲರ, ಶೋಷಿತರ ಹಾಗೂ ಮಹಿಳೆಯರ ಅಭ್ಯುದಯಕ್ಕಾಗಿ ಶ್ರಮಿಸಿದ ಮಹಾನ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ಆಗಿದ್ದಾರೆ. ವಿಶ್ವಸಂಸ್ಥೆ ಅಂಬೇಡ್ಕರ್ ಜನ್ಮದಿನವನ್ನು ವಿಶ್ವ ಜ್ಞಾನ ದಿನ ಎಂದು ಘೋಷಿಸುವ ಮೂಲಕ ವಿಶ್ವಾದ್ಯಂತ ಅವರ ಜನ್ಮದಿನವನ್ನು ವಿಶ್ವ ಜ್ಞಾನ ದಿನ ಎಂದು ಆಚರಿಸಲಾಗುತ್ತಿದೆ. ಜ್ಞಾನವನ್ನು ಪಡೆಯಬೇಕಾದರೆ ಅಧ್ಯಯನ ಅವಶ್ಯ ಎಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ, ಸಮಾಜದಲ್ಲಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಸಮಾಜದಲ್ಲಿನ ಅಸ್ಪೃಶ್ಯತೆ ತೊಲಗಿಸಿ ಸಮಾನತೆಯನ್ನು ತರಲು ಶ್ರಮಿಸಿದ ಅವರು ಸಮಾಜದಲ್ಲಿನ ಅಸಮಾನತೆ ಹಾಗೂ ಲಿಂಗಭೇದಗಳ ವಿರೋಧಿಸಿದ್ದರು ಎಂದರು.

ಸಭಾ ಕಾರ್ಯಕ್ರಮಕ್ಕೂ ಪೂರ್ವ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ ಹಾಗೂ ಡಾ.ಬಾಬುಜಗಜೀವನ ರಾಮ್ ಅವರ ಭಾವಚಿತ್ರಗಳ ಮೆರವಣಿಗೆಗೆ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರಕುಮಾರ ಕಾಂದೂ ಪುಷ್ಪಾರ್ಚನೆ ಮಾಡಿ ಹಸಿರು ನಿಶಾನೆ ನೀಡಿದರು. ಡೊಳ್ಳು ಕುಣಿತ, ವೀರಗಾಸೆ, ಲಂಬಾಣಿ ನೃತ್ಯ, ಕುಂಬ ಕಳಸ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಗೆ ಮೆರಗು ನೀಡಿದ್ದವು. ಡಿಸಿ ಕಚೇರಿಯಿಂದ ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿ ಜಿಲ್ಲಾ ರಂಗಮ೦ದಿರದ ಬಳಿ ಮುಕ್ತಾಯವಾಯಿತು.

ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಸಹಾಯಧನ ವಿತರಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶೆ ರೇಣುಕಾ ರಾಯ್ಕರ, ಜಿಪಂ ಸಿಇಒ ಈಶ್ವರಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠ ಎನ್. ವಿಷ್ಣುವರ್ಧನ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ ಸಿ., ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠ ಸಿ.ಟಿ ಜಯಕುಮಾರ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಉಪವಿಭಾಗಾಧಿಕಾರಿ ಕನಿಷ್ಕ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ ಇದ್ದರು.