ಸಾರಾಂಶ
ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಡಾ.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ನಗರದಲ್ಲಿ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಮರ್ಪಣೆ ಮಾಡಿದರು. ಮೊದಲು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭೆ ಸದಸ್ಯರಾದ ಎಸ್.ಸುರೇಶ್, ಜಿಲ್ಲಾಧಿಕಾರಿ ಶಿಲ್ಪಾನಾಗ್, ಇನ್ನಿತರ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ನಗರಸಭೆ ಅಧ್ಯಕ್ಷ ಎಸ್.ಸುರೇಶ್ ಅವರು ದೀಪ ಬೆಳಗಿಸಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಿದರು.ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಎಲ್ಲಾ ಗ್ರಂಥಗಳಿಗಿಂತ ಶ್ರೇಷ್ಠ ಗ್ರಂಥ ನಮ್ಮ ಸಂವಿಧಾನವಾಗಿದೆ. ಅದೇ ಸಂವಿಧಾನದಡಿ ನಾವೆಲ್ಲರೂ ನೆಮ್ಮದಿಯಿಂದ ಬದುಕುತ್ತಿದ್ದೇವೆ. ಅದಕ್ಕೆ ಕಾರಣಕರ್ತರು ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ದೇಶದ ಎಲ್ಲರಿಗೂ ಸಮಾನತೆ ಒದಗಿಸಿದ ಮಹಾನ್ ಮಾನವತಾವಾದಿ ಡಾ.ಅಂಬೇಡ್ಕರ್ ಆಗಿದ್ದಾರೆ ಎಂದರು.
ಅಂಬೇಡ್ಕರ್ ಚಿಂತನೆ, ಆಶಯಗಳನ್ನು ಜನಸಾಮಾನ್ಯರಿಗೆ ಪಸರಿಸುವ ಸಲುವಾಗಿ ವಿಜಯವಾಡದಲ್ಲಿ ಅಂಬೇಡ್ಕರ್ ಪ್ರತಿಮೆ, ಬೃಹತ್ ಗ್ರಂಥಾಲಯ ಹಾಗೂ ಅಂತಾರಾಷ್ಟ್ರೀಯ ಅಧ್ಯಯನ ಕೇಂದ್ರ ತೆರೆಯಲಾಗಿದೆ. ಅದೇ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ಅನುಕೂಲವಾಗುವಂತೆ ಚಾಮರಾಜನಗರ ಜಿಲ್ಲೆಯಲ್ಲಿ ದಕ್ಷಿಣ ಭಾರತದಲ್ಲಿಯೇ ಅತಿದೊಡ್ಡ ಸಂಶೋಧನಾ ಕೇಂದ್ರವನ್ನು ಸಮಾಜ ಕಲ್ಯಾಣ ಇಲಾಖೆ ಮೂಲಕ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.ನಗರದ ಬುದ್ಧ ವಿಹಾರದ ಮಹೇಶ್ ಅವರು ಕಾರ್ಯಕ್ರಮದಲ್ಲಿ ಬುದ್ಧ ವಂದನೆ ಮಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಜಿಲ್ಲಾಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.