ಭಾರತ ದೇಶವು ಇಂದು ಎಲ್ಲ ಕ್ಷೇತ್ರಗಳಲ್ಲಿ ಸದೃಢವಾಗಿ ಬೆಳೆದಿದೆ. ಇದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವು ಮಹತ್ವದ ಕಾಣಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ಹಾವೇರಿ: ಭಾರತ ದೇಶವು ಇಂದು ಎಲ್ಲ ಕ್ಷೇತ್ರಗಳಲ್ಲಿ ಸದೃಢವಾಗಿ ಬೆಳೆದಿದೆ. ಇದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವು ಮಹತ್ವದ ಕಾಣಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜಕಲ್ಯಾಣ ಇಲಾಖೆ, ನಗರಸಭೆ ಹಾಗೂ ಪರಿಶಿಷ್ಟ ಜಾತಿ ಒಕ್ಕೂಟಗಳು ಹಾವೇರಿ ಸಂಯುಕ್ತ ಆಶ್ರಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆ ಅವರ ಆದರ್ಶದ ಬದುಕು ಇವತ್ತಿಗೂ ಸಹ ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ. ಇಡೀ ಜಗತ್ತಿನಲ್ಲಿಯೇ ಅತಿ ಹೆಚ್ಚು ಪ್ರತಿಭೆ ಯಾರಿಗಾದರೂ ಇದ್ದರೆ ಅದು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಮಾತ್ರ, ದಲಿತ ಸಮುದಾಯದಿಂದ ಬಂದಂತಹ ಇವರು ಸಮಾಜದಲ್ಲಿ ಸಾಕಷ್ಟು ನೋವುಗಳನ್ನು ಮತ್ತು ಅವಮಾನಗಳನ್ನು ಅನುಭವಿಸಿದರು. ಇದು ಅವರ ಮೇಲೆ ತುಂಬಾನೇ ಪ್ರಭಾವ ಬೀರಿತು. ಅದನ್ನೆಲ್ಲ ಮೆಟ್ಟಿನಿಂತು ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಹೋರಾಟ ಮಾಡಿದರು. ಭಾರತದ ಸಂವಿಧಾನ ರಚಿಸುವ ಸಂದರ್ಭದಲ್ಲಿ ಜಗತ್ತಿನ 60 ದೇಶಗಳ ಸಂವಿಧಾನಗಳನ್ನು ಅಭ್ಯಸಿಸಿ ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ ಎಂದರು. ಡಾ. ಬಿ.ಆರ್. ಅಂಬೇಡ್ಕರ್ ಅವರು ಎಂದು ಮರೆಯಲಾಗದ ಚೈತನ್ಯ ಶಕ್ತಿ, ಕೇವಲ ಅವರ ಹೆಸರನ್ನು ಬಳಸಿಕೊಂಡು ನಾವುಗಳು ಓಡಾಡುವುದಾಗಬಾರದು. ಸಂವಿಧಾನದಲ್ಲಿ ಅವರು ಕೊಟ್ಟಂತಹ ಆಶಯಗಳನ್ನು ಮತ್ತು ಆಚಾರ ವಿಚಾರಗಳನ್ನು ಎತ್ತು ಹಿಡಿದಾಗ ಮಾತ್ರ ಅವರಿಗೆ ಗೌರವ ಕೊಟ್ಟಂತಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್ ಗಾಜೀಗೌಡ್ರ, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ್ ವರಗಪ್ಪನವರ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.ಪುತ್ಥಳಿಗೆ ಮಾಲಾರ್ಪಣೆ:ಇದಕ್ಕೂ ಮೊದಲು ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್‌ವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌ಎಫ್‌ಎನ್ ಗಾಜಿಗೌಡ್ರ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಮಾಜಿ ಶಾಸಕ ನೆಹರು ಓಲೇಕಾರ, ವಿವಿಧ ಇಲಾಖೆ ಅಧಿಕಾರಿಗಳು ಸಮಾಜ ಮುಖಂಡರು ಉಪಸ್ಥಿತರಿದ್ದರು.