ಸಾರಾಂಶ
ಮಂಗಳೂರು: ದೇಶದ ಕೃಷಿಯ ಏಳಿಗೆಗೆ ಅಪಾರ ಕೊಡುಗೆ ನೀಡಿದ ಹಾಗೂ ಕಾರ್ಮಿಕರ ಕಾನೂನುಗಳು, ಅವರ ಹಕ್ಕುಗಳ ಅನುಷ್ಠಾನಕ್ಕೆ ಶ್ರಮಿಸಿದ ಡಾ. ಬಾಬು ಜಗಜೀವನ್ ರಾಮ್ ಅವರ ಕೊಡುಗೆಗಳು ಅನನ್ಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಬಣ್ಣಿಸಿದರು.ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.ಲೋಕಸಭೆಗೆ ಚುನಾವಣೆಗಳು ಘೋಷಣೆಯಾದ ಕಾರಣ ಈ ಬಾರಿ ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ಕಾರ್ಮಿಕರ ಕಾನೂನುಗಳು ಹಾಗೂ ಕಾರ್ಮಿಕರ ಹಕ್ಕುಗಳನ್ನು ಅವರಿಗೆ ಲಭಿಸುವಂತೆ ವಿಶ್ವಮಟ್ಟದಲ್ಲಿ ನಡೆಯುತ್ತಿದ್ದ ಚರ್ಚೆಗಳಲ್ಲಿ ಅವರ ಕೊಡುಗೆ ಅಮೂಲ್ಯವಾದದ್ದಾಗಿದೆ ಎಂದರು.ಬಾಬು ಜಗಜೀವನ್ ರಾಮ್ ಅವರ ಆದರ್ಶಗಳು, ಚಿಂತನೆಗಳ ಬಗ್ಗೆ ಅರಿತು ಕೊಂಡಾಗ ಮಾತ್ರವೇ ಇಂತಹ ಕಾರ್ಯಕ್ರಮಗಳನ್ನು ಆಚರಿಸುವ ಉದ್ದೇಶ ಈಡೇರುತ್ತದೆ. ಇಂತಹ ಮಹಾನ್ ವ್ಯಕ್ತಿಗಳು ಅವರ ವ್ಯಕ್ತಿತ್ವದಿಂದ ನಮಗೆಲ್ಲ ಆದರ್ಶರಾಗಿದ್ದಾರೆ ಎಂದು ಅವರು ಹೇಳಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಲತಿ ಮತ್ತಿತರರಿದ್ದರು.