ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಡಾ.ಬಾಬು ಜಗಜೀವನರಾಂ

| Published : Apr 06 2024, 12:48 AM IST

ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಡಾ.ಬಾಬು ಜಗಜೀವನರಾಂ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸಂಗಮೇಶ್ವರ ನಗರದ ಡಾ.ಬಾಬು ಜಗಜೀವನರಾಂ ಉದ್ಯಾನದಲ್ಲಿ ಶುಕ್ರವಾರ ಡಾ.ಬಾಬು ಜಗಜೀವನರಾಂ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ದೇಶದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯತೆ ಮುಂತಾದ ಸಾಮಾಜಿಕ ಪಿಡುಗು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿ, ಶೋಷಿತ ಸಮುದಾಯದ ಏಳಿಗೆಗೆ ಶ್ರಮಿಸುವ ಮೂಲಕ ಸಮಾನತೆಯ ಸಂದೇಶಕ್ಕೆ ಸ್ಪಷ್ಟ ರೂಪ ಕೊಟ್ಟವರು ಡಾ.ಬಾಬು ಜಗಜೀವನರಾಂ ಎಂದು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಹನುಮಂತಪ್ಪ ಸಂಜೀವಣ್ಣವರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸಂಗಮೇಶ್ವರ ನಗರದ ಡಾ.ಬಾಬು ಜಗಜೀವನರಾಂ ಉದ್ಯಾನದಲ್ಲಿ ಶುಕ್ರವಾರ ನಡೆದ ಡಾ.ಬಾಬು ಜಗಜೀವನರಾಂ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಬಾಬು ಜಗಜೀವನರಾಂ, ಡಾ.ಬಿ.ಆರ್. ಅಂಬೇಡ್ಕರ್ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಕನಕದಾಸರು, ಮಹಾತ್ಮ ಗಾಂಧೀಜಿ ಸಹ ಸಾಕಷ್ಟು ಶೋಷಣೆಗೆ ಒಳಗಾಗಿ ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ಬಣ್ಣಸಿದರು.

ಸ್ವತಃ ಅಸ್ಪೃಸ್ಯತೆಯ ಅವಮಾನಕ್ಕೆ ಒಳಗಾದ ಡಾ.ಬಾಬೂಜಿ ಮುಂದೆ ಗಾಂಧೀಜಿಯವರು ಆರಂಭಿಸಿದ್ದ ಅಸ್ಪೃಶ್ಯತೆಯ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡರು. ಪ್ರಥಮ ಹಂಗಾಮಿ ಸರ್ಕಾರ ರಚನೆಯಾದಾಗ ಅವರಿಗೆ ಕಾರ್ಮಿಕ ಖಾತೆಯನ್ನು ನೀಡಲಾಗಿತ್ತು. ಮುಂದೆ ಅವರು ತಮ್ಮ ರಾಜಕೀಯ ಪಯಣದಲ್ಲಿ ಹಿಂದುರುಗಿ ನೋಡಿದ್ದೇ ಇಲ್ಲ. ಹಲವಾರು ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದರು.

ಹಸಿರು ಕ್ರಾಂತಿಯ ಹರಿಕಾರ ಎಂದೇ ಕರೆಯಲ್ಪಡುವ ಜಗಜೀವನರಾಂ ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯಪರ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು. ಬಾಬು ಜಗಜೀವನ ರಾಂ ಅವರು ಮೊದಲ ಉಪ ಪ್ರಧಾನಿಯಾಗಿ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಡಾ. ಹನುಮಂತಪ್ಪ ಹೇಳಿದರು.

ಸಂವಿಧಾನ ಪೀಠಿಕೆ ಬೋಧನೆ:

ವೇದಿಕೆ ಕಾರ್ಯಕ್ರಮ ಪ್ರಾರಂಭಕ್ಕೂ ಮುಂಚೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಸಂವಿಧಾನ ಪೀಠಿಕೆ ಬೋಧಿಸಿದರು.

ವಿದ್ಯಾರ್ಥಿಗಳಿಗೆ ಸನ್ಮಾನ: ಕಾರ್ಯಕ್ರಮದ ಕೊನೆಯಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತ ಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಮಹಾನಗರ ಪಾಲಿಕೆ ಆಯುಕ್ತ ಲೋಕೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ರಶೀದ್ ಮಿರಜನ್ನವರ, ಮುಖಂಡರಾದ ಮಲ್ಲೇಶ ಚೌಗಲಾ, ಯಲ್ಲಪ್ಪ ಹುದಲಿ, ಕರೆಪ್ಪ ಗುಡೆನ್ನವರ, ದುರ್ಗೇಶ ಮೇತ್ರಿ, ವಿವೇಕ ಕರ್ಪೇ ಸೇರಿದಂತೆ ಅನೇಕ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಭಾವಚಿತ್ರ ಮೆರವಣಿಗೆಗೆ ಚಾಲನೆ:

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ ಅವರು ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಿಂದ ಆರಂಭಗೊಂಡ ಮೆರವಣಿಗೆ ಚನ್ನಮ್ಮ ವೃತ್ತದ ಮಾರ್ಗವಾಗಿ ಸಂಗಮೇಶ್ವರ ನಗರದ ಡಾ.ಬಾಬು ಜಗಜೀವನರಾಂ ಉದ್ಯನಕ್ಕೆ ತಲುಪಿತು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ಮಹಾನಗರ ಪಾಲಿಕೆ ಆಯುಕ್ತ ಲೋಕೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಬೆಳಗಾವಿ ತಹಶೀಲ್ದಾರ ಸಿದ್ದಾರಾಯ ಭೋಸಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಪ್ರಿಯಾ ಕಡೆಚೂರು, ಮುಖಂಡರಾದ ಮಲ್ಲೇಶ ಚೌಗಲಾ, ಯಲ್ಲಪ್ಪ ಹುದಲಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.