ಸಾರಾಂಶ
ಡಾ.ಬಿ.ಆರ್.ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದಲೇ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕುವಂತಾಗಿದೆ. ಅಂಬೇಡ್ಕರ್ ಎನ್ನುವುದು ಜ್ಞಾನದ ಬೆಳಕು. ಅವರ ಸಾಧನೆಗೆ ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡುಕ ಜೀವನವನ್ನು ಸಾರ್ಥಕತೆಗೊಳಿಸಿಕೊಳ್ಳಬೇಕು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಲೂಕು ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಹಾಗೂ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 134ನೇ ಜಯಂತಿಯನ್ನು ಆಚರಿಸಲಾಯಿತು.ಜಯಂತಿ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಧಿಕಾರಿಗಳು, ಶಿಕ್ಷಕರು ಹಾಗೂ ಸಂಘಟನೆಗಳ ಮುಖಂಡರು ಪುಷ್ಪನಮನ ಸಲ್ಲಿಸಿ ತಾಲೂಕಿನಾದ್ಯಂತ ಅರ್ಥಪೂರ್ಣವಾಗಿ ಆಚರಿಸಿದರು.
ಪ್ರವಾಸಿ ಮಂದಿರದ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ವಿವಿಧ ಜನಪರ ಸಂಘಟನೆಗಳ ಮುಖಂಡರು ಹಾಗೂ ಅಭಿಮಾನಿಗಳು ಮಾಲಾರ್ಪಣೆ ಮಾಡಿ ನಮಿಸಿದರು. ಪಟ್ಟಣದ ಪುರಸಭೆ, ತಾಲೂಕು ಕಚೇರಿ, ತಾಪಂ, ಬಿಇಒ ಕಚೇರಿ, ಚೆಸ್ಕಾಂ, ಟಿಎಪಿಸಿಎಂಎಸ್, ಸಮಾಜ ಕಲ್ಯಾಣ ಇಲಾಖೆ, ಕಾವೇರಿ ನೀರಾವರಿ ನಿಗಮ, ಕೃಷಿ ಇಲಾಖೆ ಸೇರಿದಂತೆ ವಿವಿಧ ಕಚೇರಿಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅಧಿಕಾರಿಗಳು, ಸಿಬ್ಬಂದಿ ಸ್ಮರಿಸಿದರು.ಅಂಬೇಡ್ಕರ್ ಜಯಂತಿ ಅಂಗವಾಗಿ ಪಟ್ಟಣದ ಸರ್ಕಾರಿ ಕಚೇರಿಗಳಿಗೆ ದೀಪಾಲಾಂಕಾರ ಮಾಡಲಾಗಿತ್ತು. ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಕೇಂದ್ರ ಸರ್ಕಾರ ಅಂಬೇಡ್ಕರ್ ಜಯಂತಿ ದಿನದಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ತಾಲೂಕಿನ ಶಾಲಾ ಕಾಲೇಜಿನ ಶಿಕ್ಷಕರು ಮತ್ತು ಉಪನ್ಯಾಸಕರು ಶಾಲಾ ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಿದರು.ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಲೋಕೇಶ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದಲೇ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕುವಂತಾಗಿದೆ. ಅಂಬೇಡ್ಕರ್ ಎನ್ನುವುದು ಜ್ಞಾನದ ಬೆಳಕು. ಅವರ ಸಾಧನೆಗೆ ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡುಕ ಜೀವನವನ್ನು ಸಾರ್ಥಕತೆಗೊಳಿಸಿಕೊಳ್ಳಬೇಕೆಂದು ತಿಳಿಹೇಳಿದರು.