ಸಾರಾಂಶ
ಖಾಸಗಿ ಆಸ್ಪತ್ರಗಳಲ್ಲಿ ಸಿಗುವ ಸೌಲಭ್ಯಗಳಿಗಿಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯ ಮತ್ತು ಚಿಕಿತ್ಸೆ ಸಿಗುತ್ತದೆ
ಕನ್ನಡಪ್ರಭ ವಾರ್ತೆ ಮೈಸೂರು
ಖಾಸಗಿ ಆಸ್ಪತ್ರೆಗಳ ವಂಚನೆಗಳಿಗೆ ಬಲಿಯಾಗಬೇಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಿ ಎಂದು ಶಾಂತಿನಗರದ ನಗರ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಜಾವೇದ್ ಪಾಶಾ ಕರೆ ನೀಡಿದರು.ನಗರದ ಶಾಂತಿನಗರದ ಮೇವ ಎಜುಕೇಶನ್ ಟ್ರಸ್ಟ್ ನಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಯೋಜಿಸಿದ್ದ ಮಹಿಳೆಯರಿಗೆ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಖಾಸಗಿ ಆಸ್ಪತ್ರಗಳಲ್ಲಿ ಸಿಗುವ ಸೌಲಭ್ಯಗಳಿಗಿಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯ ಮತ್ತು ಚಿಕಿತ್ಸೆ ಸಿಗುತ್ತದೆ. ಆದರೆ ಜನರು ತಪ್ಪು ತಿಳುವಳಿಕೆಯಿಂದಾಗಿ ಖಾಸಗಿ ಆಸ್ಪತ್ರೆ ಕಡೆಗೆ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಜನರು ಉಚಿತವಾಗಿ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ನಿರ್ದೇಶಕಿ ಸರಸ್ವತಿ ಮಾತನಾಡಿ, ಹುಟ್ಟಿದ ಮಗುವಿಗೆ ಸ್ತನ್ಯಪಾನ ಮಾಡಿಸುವುದರಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ. ಎದೆ ಹಾಲು ಅಮೃತಕ್ಕೆ ಸಮಾನ. ಎದೆ ಹಾಲನ್ನು ಕುಡಿಸುವುದರಿಂದ ಸೌಂದರ್ಯ ಹಾಳಾಗುತ್ತದೆ ಎಂಬುದು ಕೆಲವು ಮಹಿಳೆಯರ ತಪ್ಪು ಕಲ್ಪನೆಯಾಗಿದೆ. ಮಹಿಳೆಯರು ಆರೋಗ್ಯವಾಗಿರಲು ಪೌಷ್ಟಿಕ ಆಹಾರ ಸೇವಿಸುವ ಮೂಲಕ ಹಲವು ರೋಗಗಳನ್ನು ತಮ್ಮ ಹಂತದಲ್ಲೆ ತಡೆಗಟ್ಟಬಹುದು ಎಂದು ಹೇಳಿದರು.
ಇದೇ ವೇಳೆ ಹೋಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಮತ್ತು ಕಂಪ್ಯೂಟರ್ ತರಬೇತಿ ಪಡೆದ ಯುವಜನರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.ಅಂಗನವಾಡಿ ಮೇಲ್ವಿಚಾರಕಿ ತಾರಾ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪದ್ಮಾವತಿ, ಮೇವ
ಎಜುಕೇಶನ್ ಟ್ರಸ್ಟ್ ನಿರ್ದೇಶಕ ಸರ್ಫ್ ರಾಜ್ ರೆಹಮಾನ್, ಅಂಗನಾವಡಿ ಮೇಲ್ವಿಚಾರಕಿ ಕಮಲಾಕ್ಷಿ, ನಿವೃತ್ತ ಕಾರ್ಮಿಕ ಆಧಿಕಾರಿ ಮಹಮ್ಮದ್ ರಫಿಉಲ್ಲಾ ಇದ್ದರು. ನ್ಯಾನ್ಸಿ ಸ್ವಾಗತಿಸಿದರು. ಜ್ಯೋತಿ ವಂದಿಸಿದರು. ವಿಕ್ಟೋರಿಯಾ ನಿರೂಪಿಸಿದರು.