ಸಾರಾಂಶ
ಬಳ್ಳಾರಿ: ದುಶ್ಚಟಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ಮಹಾನಗರ ಪಾಲಿಕೆಯ ಮಹಾಪೌರ ಮುಲ್ಲಂಗಿ ನಂದೀಶ್ ಹೇಳಿದರು.
ಜಿಲ್ಲಾಡಳಿತ, ಜಿಪಂ, ಮದ್ಯಪಾನ ಸಂಯಮ ಮಂಡಳಿ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಿದ್ದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ 1930ರ ಆ.1ರಂದು ಜನಿಸಿದರು. ತಮ್ಮ 10ನೇ ವಯಸ್ಸಿನಲ್ಲಿ ಸವದಿಯ ವಿರಕ್ತಮಠದ ಕಿರಿಯ ಸ್ವಾಮೀಜಿ ಆದರು. ಕಾಶಿಯಲ್ಲಿ ಸಂಸ್ಕೃತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಪರಿಣಿತಿ ಸಾಧಿಸಿ ಬಹುಮುಖ ಪ್ರತಿಭೆ ಹೊಂದಿದ್ದರು ಎಂದು ಅವರು ತಿಳಿಸಿದರು.
ಅಂದಿನ ಸಮಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ಆವರಿಸಿದ್ದಾಗ ಶಿಕ್ಷಣ ಪಡೆಯುತ್ತಿದ್ದ ಕಾಶಿಯಿಂದ ಆಗಮಿಸಿ, ನೂರಾರು ಗ್ರಾಮಗಳಲ್ಲಿ ಗಂಜಿ ಕೇಂದ್ರ ಆರಂಭಿಸಿ ದಾಸೋಹ ನಡೆಸಿದರು. ಗೋಶಾಲೆಗಳನ್ನು ಆರಂಭಿಸಿ ಮೇವು ಮತ್ತು ನೀರಿನ ವ್ಯವಸ್ಥೆ ಕೈಗೊಂಡಿದ್ದರು ಎಂದು ಮೇಯರ್ ಅವರು ಮನನ ಮಾಡಿದರು.ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನವಾದ ಆಗಸ್ಟ್ 1ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ಆದೇಶಿಸಿದ್ದು, ಇಂದಿನ ಯುವಪೀಳಿಗೆಯು ಯಾವುದೇ ತರಹದ ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಆರೋಗ್ಯಕರ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎಸ್‌ಜಿಟಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಸವರಾಜ ಅಮಾತಿ ವಿಶೇಷ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತನಾಗುತ್ತೇನೆ ಎಂದು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಬಳ್ಳಾರಿಯ ಸಂಗೀತ ಶಿಕ್ಷಕ ಕೆ.ದೊಡ್ಡಬಸವ ಗವಾಯಿ ಅವರಿಂದ ವ್ಯಸನಗಳ ಕುರಿತ ಸುಗಮ ಸಂಗೀತ ಕಾರ್ಯಕ್ರಮವು ಕೇಳುಗರ ತಲೆದೂಗುವಂತಿತ್ತು.ಈ ಸಂದರ್ಭದಲ್ಲಿ ಮಹಾಗರ ಪಾಲಿಕೆಯ ಉಪಮೇಯರ್ ಡಿ.ಸುಕುಂ, ಕನ್ನಡ-ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ, ಸಿಬ್ಬಂದಿ ಮಲ್ಲೇಶಪ್ಪ, ಹನುಮೇಶ್, ತಿಪ್ಪೇಸ್ವಾಮಿ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು. ಜಾಥಾಗೆ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಮಂಜುನಾಥ ಚಾಲನೆ ನೀಡಿದರು.ಜಾಥಾವು ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿನ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದವರೆಗೆ ತಲುಪಿ ಸಂಪನ್ನಗೊಂಡಿತು.