ಕತೆ, ಕಾದಂಬರಿ, ಸಣ್ಣ ಕಥೆಗಳನ್ನು ರಚಿಸುವಾಗ ಪರಿಸರ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಮನೋಜ್ಞವಾಗಿ ತಮ್ಮ ಕಥೆಗಳನ್ನು ಪ್ರಸ್ತುತಪಡಿಸುತ್ತಿದ್ದ ಡಾ. ನಾ ಡಿಸೋಜಾ ಅವರದ್ದು ಸ್ನೇಹಮಯಿ ವ್ಯಕ್ತಿತ್ವ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಅಂಬೆಕಲ್ ನವೀನ್ ಹೇಳಿದರು.

ಮಡಿಕೇರಿ: ಕತೆ, ಕಾದಂಬರಿ, ಸಣ್ಣ ಕಥೆಗಳನ್ನು ರಚಿಸುವಾಗ ಪರಿಸರ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಮನೋಜ್ಞವಾಗಿ ತಮ್ಮ ಕಥೆಗಳನ್ನು ಪ್ರಸ್ತುತಪಡಿಸುತ್ತಿದ್ದ ಡಾ. ನಾ ಡಿಸೋಜಾ ಅವರದ್ದು ಸ್ನೇಹಮಯಿ ವ್ಯಕ್ತಿತ್ವ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಅಂಬೆಕಲ್ ನವೀನ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ನಾ ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ದತ್ತಿನಿದಿಗಳ ಮುಖಾಂತರ ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಮಕ್ಕಳಲ್ಲಿ ಸಾಹಿತ್ಯ ಪ್ರಜ್ಞೆ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು. ನಾ ಡಿಸೋಜ ಮಕ್ಕಳ ಸಾಹಿತ್ಯಗಳ ಕುರಿತು ದತ್ತಿ ಉಪನ್ಯಾಸ ನೀಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಅವರು ನಾ ಡಿಸೋಜ ಅವರದ್ದು ಅತ್ಯುಕೃಷ್ಟ ಸಾಹಿತ್ಯ ಜಾನಪದ, ಪರಿಸರ, ಮಕ್ಕಳ ಸಾಹಿತ್ಯ, ಮಕ್ಕಳ ಕಥೆಗಳು, ಕಾದಂಬರಿ ಹೀಗೆ 80ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ನಾ ಡಿಸೋಜ ಅವರು ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಮ್ಮೇಳನವನ್ನು ಸುಸೂತ್ರವಾಗಿ ನಡೆಸಿಕೊಟ್ಟಿದ್ದಾರೆ. ಸರಳ ಸಜ್ಜನಿಕೆಯ ಜಾತ್ಯತೀತ ಮನೋಭಾವದ ಡಾ. ನಾಬರ್ಟ್ ಡಿಸೋಜ ಅವರ ಹೆಸರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಎರಡು ಲಕ್ಷ ರು. ದತ್ತಿ ಸ್ಥಾಪನೆ ಮಾಡಿದ್ದು, ಅದರ ಬಡ್ಡಿ ಹಣದಲ್ಲಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುವ ಆಶಯವಿದೆ ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಿಕ್ಷಣ ಸಂಯೋಜಕಿ ಜಾನೆಟ್ ಐ.ಜಿ. ಅವರು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿ ಮೂಡಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರೆ ಮುಂದೊಂದು ದಿನ ಸಾಹಿತಿಯಾಗಿ ಬೆಳೆಯಲು ಅವಕಾಶವಾಗುತ್ತದೆ ಎಂದರು.

ಇನ್ನೊಬ್ಬ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲ ಪ್ರಪಂಚವನ್ನು ಸೃಜನಶೀಲತೆಯಿಂದ ಗಮನಿಸುವ ಮೂಲಕ ತಾವು ಸಾಧಿಸುವ ಸಾಧನೆಯಲ್ಲಿ ಮಾನವೀಯತೆ ಮತ್ತು ಪ್ರೀತಿ ವಿಶ್ವಾಸದಿಂದ ಮುನ್ನಡೆಯಬೇಕು ಎಂದರು.

ದತ್ತಿ ಆಶಯದಂತೆ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಸಂತ ಮೈಕಲರ ಶಾಲೆಯ ಕೆ.ಡಿ. ವೈಷ್ಣವಿ ಮತ್ತು ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಎಎಲ್ಜಿ ಕ್ರೆಸೆಂಟ್ ಶಾಲೆಯ ಲೇಖಶ್ರೀ ಮತ್ತು ಹರ್ಷಶ್ರೀ ಪಡೆದುಕೊಂಡರು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಂಸಾಪತ್ರ ವಿತರಿಸಲಾಯಿತು. ಅಲ್ಲದೆ ಕೊಡಗು ಜಿಲ್ಲೆಯಲ್ಲಿ ನಡೆದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂತ ಜೋಸೆಫರ ಶಾಲೆಯ ವಿದ್ಯಾರ್ಥಿಗಳಿಗೆ, ದ್ವಿತೀಯ ಸ್ಥಾನ ಪಡೆದ ಸ್ವಂತ ಮೈಕಲರ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ತೃತೀಯ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಂಸ ಪತ್ರ ವಿತರಿಸಲಾಯಿತು. ಇದೇ ಸಂದರ್ಭ ಕಾಲೇಜಿನಲ್ಲಿ ವಿನೂತನ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಪ್ರಸನ್ನ ಅವರನ್ನು ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡು ತಮ್ಮನ್ನು ತಾವು ಬೆಳೆಸಿಕೊಳ್ಳಬೇಕು. ಎಲ್ಲರೂ ಪ್ರಥಮ ಸ್ಥಾನ ಪಡೆಯಲು ಸಾಧ್ಯವಿಲ್ಲ. ಆದರೆ ಮುಂದೊಂದು ದಿನ ಪಡೆಯುವ ಪ್ರಯತ್ನವನ್ನು ಮಾಡಬಹುದು ಎಂದರು. ಕಸಾಪ ಸಂಘಟನಾ ಕಾರ್ಯದರ್ಶಿ ವಾಸು ರೈ, ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ನಿರೂಪಿಸಿದರು.