ಸಾರಾಂಶ
ಲೋಕ ಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ಧರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ೧೧೭ ನೇ ಜಯಂತಿಯನ್ನು ನಗರದ ವಿವಿಧೆಡೆ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ಧರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ೧೧೭ ನೇ ಜಯಂತಿಯನ್ನು ನಗರದ ವಿವಿಧೆಡೆ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಮುಂಭಾಗ, ಜಿಲ್ಲಾ ಅಸ್ಪತ್ರೆ ಮುಂಭಾಗ, ಇಂಚರ ಗ್ರೂಪ್ ವತಿಯಿಂದ, ಭಕ್ತವೃಂದಿಂದ ಶ್ರೀಗಳ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಆನಂತರ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಣೆ ಮಾಡಲಾಯಿತು. ತ್ರಿವಿಧ ದಾಸೋಹದ ಮೂಲಕ ದೇಶದಲ್ಲಿ ಬಸವ ತತ್ವ ಭಿತ್ತಿ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ದಾಖಲಿಸುವಂತಹ ಸಾಧನೆ ಮಾಡಿರುವ ಶಿವಕುಮಾರ ಸ್ವಾಮೀಜಿಗಳು ಮನುಕುಲಕ್ಕೆ ಮಾದರಿ ಎಂದು ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವಸ್ವಾಮೀಜಿ ಹೇಳಿದರು, ಧರ್ಮ, ಜಾತಿ, ವರ್ಣ ಭೇದವಿಲ್ಲದೆ ಲಕ್ಷಾಂತರ ಮಂದಿಗೆ ಶಿಕ್ಷಣ ನೀಡುವ ಮೂಲಕ ಜ್ಞಾನದ ಬೆಳಕು ತೋರಿದರು. ಕೊನೆಯ ಉಸಿರಿರುವವರೆಗೂ ತಮ್ಮ ಬದುಕನ್ನು ಸಮಾಜ ಸೇವೆಗೆ ಮುಡುಪಾಗಿಟ್ಟ ಅವರು ಮಹಾನ್ ಮಾನವತಾವಾದಿ. ಸಿದ್ದಗಂಗಾ ಮಠದಲ್ಲಿ ಶಿಕ್ಷಣ ಪಡೆದ ಬಹುತೇಕ ಮಂದಿ ಉನ್ನತ ಸ್ಥಾನಗಳಲಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಸ್ವಾಮೀಜಿಯು ಶಿಕ್ಷಣದ ಮಹತ್ವ ತಿಳಿದು ರಾಜ್ಯದಲ್ಲಿ ಅಕ್ಷರ ಕ್ರಾಂತಿ ಮಾಡಿದರು. ಶ್ರೀಗಳು ನಿಜಕ್ಕೂ ಪವಾಡ ಪುರುಷರು. ಬಸವಣ್ಣರ ತತ್ವಾದರ್ಶ ಕಾರ್ಯರೂಪಕ್ಕೆ ತಂದ ಅಪರೂಪದ ತಪಸ್ವಿ ಎಂದರು.ಈ ವೇಳೆ ಕನ್ನಡ ಬಸವರಾಜು, ಡಾ. ಪರಮೇಶ್ವರಪ್ಪ, ಬಿರ್ಲಾ ನಾಗರಾಜು, ಜನ್ನೂರು ರೇವಣ್ಣ, ಬಸುಮರಿ, ರೇವಣ್ಣ, ಪ್ರಭು ಇತರರು ಇದ್ದರು.