Dr. Umesh Jadhav visits Kadechur industrial site
ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ । ನಿರ್ಲಕ್ಷ್ಯ ವಹಿಸಿದ ಕಂಪನಿ ಬಂದ್ ಮಾಡಲು ಆಗ್ರಹ
ಕನ್ನಡಪ್ರಭ ವಾರ್ತೆ ಸೈದಾಪುರಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಅನಿಲ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಅತ್ಯಂತ ನೋವಿನ ಸಂಗತಿ ಎಂದು ಮಾಜಿ ಸಂಸದ ಡಾ.ಉಮೇಶ್ ಜಾಧವ್ ವಿಷಾದ ವ್ಯಕ್ತಪಡಿಸಿದರು.
ಕೈಗಾರಿಕಾ ಪ್ರದೇಶಕ್ಕೆಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ಹಲವು ರಾಸಾಯನಿಕ ಕಂಪನಿಗಳಲ್ಲಿ ಕಾರ್ಮಿಕರ ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿಲ್ಲ. ಅದರ ಪರಿಣಾಮ ಅಮಾಯಕ ಕಾರ್ಮಿಕರು ಪ್ರಾಣ ಕಳೆದುಕೊಳ್ಳುವಂತಹ ದುರ್ಘಟನೆಗಳು ಮರುಕಳಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ನಿರ್ಲಕ್ಷ್ಯ ತೋರಿದ ಕಂಪನಿಯ ವಿರುದ್ಧ ಕಠಿಣ ಕ್ರಮ ಕೈಗೊಂಡು ಅದನ್ನು ಶಾಶ್ವತವಾಗಿ ಬಂದ್ ಮಾಡಬೇಕು. ಅನೇಕ ಕೈಗಾರಿಕೆಗಳು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ರಾಸಾಯನಿಕ ದ್ರವ ತ್ಯಾಜ್ಯವನ್ನು ಹಳ್ಳ-ಕೊಳ್ಳಗಳಿಗೆ ಬಿಡುತ್ತಿರುವ ಬಗ್ಗೆ ಸ್ಥಳೀಯರು ತಮ್ಮ ಗಮನಕ್ಕೆ ತಂದಿದ್ದಾರೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈಗಾಗಲೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನು ದೂರವಾಣಿ ಮೂಲಕ ತೀವ್ರ ತರಾಟೆಗೆ ತೆಗೆದುಕೊಳ್ಳಲಾಗಿದೆ ಎಂದರು.
ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಈ ಗಂಭೀರ ವಿಷಯವನ್ನು ನಮ್ಮ ಪಕ್ಷದ ಶಾಸಕರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸುವಂತೆ ಮನವಿ ಮಾಡುತ್ತೇನೆ. ಜತೆಗೆ, ಜಿಲ್ಲೆಯ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳು ಕೇಂದ್ರದ ಕೈಗಾರಿಕಾ ಸಚಿವರನ್ನು ಭೇಟಿ ಮಾಡಿ, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮತ್ತು ಪರಿಸರಕ್ಕೆ ಯಾವುದೇ ಹಾನಿಯಾಗದ ಕೈಗಾರಿಕೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು.ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಮಹೇಶ್ ರೆಡ್ಡಿ ಮುದ್ನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಕುರಕುಂದಿ, ನಗರಸಭೆ ಮಾಜಿ ಸದಸ್ಯ ಸ್ವಾಮಿದೇವ ದಾಸನಕೇರಾ, ಅಮೃತ ಬೋರಬಂಡ, ದೇವರಾಜ ಹುಳೆಸೂಗರ್, ಜಗದೀಶ ಮೆಂಜಿ, ಶೇಖರ ಕಡೇಚೂರು, ಭೀಮು ಬಾಡಿಯಾಳ, ಅಯ್ಯಪ್ಪ ಬಾಡಿಯಾಳ, ಮುಖಂಡರು, ಸ್ಥಳೀಯರು ಉಪಸ್ಥಿತರಿದ್ದರು.
----ಫೋಟೊ-----7ವೈಡಿಆರ್6 :
ಸೈದಾಪುರ ಸಮೀಪದ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶಕ್ಕೆ ಮಾಜಿ ಸಂಸದ ಡಾ. ಉಮೇಶ್ ಜಾಧವ್, ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ್ ಭೇಟಿ ನೀಡಿದರು.-----
7ವೈಡಿಆರ್7ಸೈದಾಪುರ ಸಮೀಪದ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ತ್ಯಾಜ್ಯ ನೇರವಾಗಿ ಹಳ್ಳಗಳಿಗೆ ಬಿಟ್ಟಿರುವುದು ವೀಕ್ಷಿಸಿದ ಮಾಜಿ ಸಂಸದ ಡಾ.ಉಮೇಶ ಜಾಧವ್.