ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವು ಜಿಲ್ಲೆಯಲ್ಲಿ ಪಾರದರ್ಶಕವಾಗಿ ನಡೆಯುತ್ತಿದ್ದು, ಆ. 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಕೈಗೊಳ್ಳಬೇಕಾದ ಚಟುವಟಿಕೆಗಳಿಗೆ ಅಧಿಕಾರಿಗಳು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವು ಜಿಲ್ಲೆಯಲ್ಲಿ ಪಾರದರ್ಶಕವಾಗಿ ನಡೆಯುತ್ತಿದ್ದು, ಆ. 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಕೈಗೊಳ್ಳಬೇಕಾದ ಚಟುವಟಿಕೆಗಳಿಗೆ ಅಧಿಕಾರಿಗಳು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚಿಸಿದರು.ನಗರದ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತ ಕಾರ್ಯಾಗಾರದಲ್ಲಿ ಕರಡು ಪಟ್ಟಿ ಪ್ರಕಟಣೆ ನಂತರದ ಕಾರ್ಯಗಳ ಕುರಿತು ಮಾತನಾಡಿದ ಅವರು, ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ 41,07,000 ಮತದಾರರಿಗೆ 4,525 ಬಿಎಲ್‌ಒಗಳ ಮೂಲಕ ಎನ್ಯೂಮರೇಷನ್ ಅರ್ಜಿಗಳನ್ನು ವಿತರಿಸಲಾಗಿದ್ದು, ಈ ಪೈಕಿ 35,93,561 ಅರ್ಜಿಗಳನ್ನು ಗಣಕೀಕರಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದ 36,476 ಮತದಾರರು, 1,34,903 ಮೃತ ಮತದಾರರು, 26,459 ಗೈರು ಮತದಾರರು ಹಾಗೂ 2,83,249 ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.ಗೈರು, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ವಿವರಗಳನ್ನು ಸಂಬಂಧಿಸಿದ ಕಚೇರಿಗಳಿಗೆ ಈಗಾಗಲೇ ಸಲ್ಲಿಸಲಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಪ್ರಕಟವಾಗದಿದ್ದರೆ, ಅಗತ್ಯ ದಾಖಲೆಗಳೊಂದಿಗೆ ನಮೂನೆ-6ರ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಬ್ಲಾಕ್ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.ಆ.24ರಿಂದ ಲಿಂಕ್ ಅಥವಾ ಸಂಬಂಧಿಕರ ಮ್ಯಾಪಿಂಗ್ ಇಲ್ಲದ ಮತದಾರರಿಗೆ ನೋಟಿಸ್‌ಗಳನ್ನು ಜನರೇಟ್ ಮಾಡಲಾಗುವುದು. ಬಿಎಲ್‌ಒಗಳು ನೋಟಿಸ್‌ಗಳನ್ನು ಖುದ್ದಾಗಿ ಮತದಾರರ ಮನೆಗೆ ತಲುಪಿಸಿ, ಮತದಾರರ ಸಹಿ ಹಾಗೂ ದಾಖಲೆಗಳನ್ನು ಸ್ವೀಕರಿಸುವ ಛಾಯಾಚಿತ್ರವನ್ನು ಮೊಬೈಲ್ ಆ್ಯಪ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು ಎಂದು ಸೂಚಿಸಿದರು.ಭಾರತದಲ್ಲಿ 01-07-1987ಕ್ಕಿಂತ ಮೊದಲು ಜನಿಸಿದವರು ತಮ್ಮದೇ ದಾಖಲೆಗಳನ್ನು ಸಲ್ಲಿಸಬೇಕು. 01-07-1987ರಿಂದ 02-12-2004ರ ನಡುವೆ ಜನಿಸಿದವರು ತಮ್ಮ ದಾಖಲೆಗಳೊಂದಿಗೆ ತಂದೆ ಅಥವಾ ತಾಯಿಯ ಜನ್ಮ ದಿನಾಂಕ ಹಾಗೂ ಸ್ಥಳಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.ಲಿಂಕ್ ಅಥವಾ ಸಂಬಂಧಿಕರ ಮ್ಯಾಪಿಂಗ್ ಇಲ್ಲದ ಮತದಾರರಿಗೆ ನೀಡುವ ನೋಟಿಸ್‌ಗಳ ವಿಚಾರಣೆಯನ್ನು ಅತ್ಯಂತ ಜಾಗರೂಕತೆಯಿಂದ ನಡೆಸಿ, ಪ್ರತಿಯೊಂದು ವಿವರವನ್ನು ತಂತ್ರಾಂಶದಲ್ಲಿ ದಾಖಲಿಸಬೇಕು. ನೋಟಿಸ್‌ಗೆ ಸಂಬಂಧಿಸಿದ ಅಹವಾಲುಗಳನ್ನು 15ರಿಂದ 20 ದಿನಗಳೊಳಗೆ ಪೂರ್ಣಗೊಳಿಸಲು ಪ್ರಯತ್ನಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಕಳೆದೆರಡು ತಿಂಗಳಿನಿಂದ ಜಿಲ್ಲೆಯಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಒಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯಾದ್ಯಂತ ಬೆಳಗಾವಿ ಜಿಲ್ಲೆಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದ್ದು, ಜಿಲ್ಲೆಯಲ್ಲಿ ಅನುಸರಿಸಿದ ಕೆಲವು ಕ್ರಮಗಳನ್ನು ಇತರೆ ರಾಜ್ಯಗಳಲ್ಲೂ ಅಳವಡಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಭಿನಂದಿಸಿದರು.ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಮಹಾನಗರ ಪಾಲಿಕೆ ಉಪ ಆಯುಕ್ತ ಸಿದ್ದು ಹುಲ್ಲೋಳಿ ಮಾತನಾಡಿ, ಆ. 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದ್ದು, ಒಂದು ತಿಂಗಳ ಕಾಲ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ತಿಳಿಸಿದರು.
ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಿಗೆ 126 ಹೆಚ್ಚುವರಿ ಎಇಆರ್‌ಒಗಳನ್ನು ನೇಮಿಸಲಾಗಿದೆ. ಅವರು ತಮ್ಮ ಲಾಗಿನ್ ಮೂಲಕ ನೋಟಿಸ್ ಜನರೇಟ್ ಮಾಡಬೇಕು. ನೋಟಿಸ್‌ಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಆಲಿಸಲು ವಾರ್ಡ್ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು. ಸಂಭವನೀಯ ತಪ್ಪುಗಳಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸುವುದು ಸೇರಿದಂತೆ ವಿವಿಧ ಹಂತಗಳ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ಸವಿವರವಾಗಿ ವಿವರಿಸಿದರು.ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತ ಗುಲಾಬರಾವ್ ಭೂಷಣ ಭೊರಸೆ, ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್, ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ಗೀತಾ ಕೌಲಗಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಬಾಗಲಕೋಟೆ ಅಪರ ಜಿಲ್ಲಾಧಿಕಾರಿ, ಎಇಆರ್‌ಒ, ಇಆರ್‌ಒ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.