ಸಾರಾಂಶ
ಎಸ್ಸೆಸ್ಸೆಲ್ಸಿ ಪರೀಕ್ಷೆಯ ವೇಳಾ ಪಟ್ಟಿ ಈಗಾಗಲೇ ಪ್ರಕಟವಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಸಕಾರಾತ್ಮಕ ಮನೋಧೋರಣೆ ಹಾಗೂ ಓದಿದ್ದನ್ನು ಪದೇ ಪದೇ ಮನನ ಮಾಡಿಕೊಂಡು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿದರೆ ಪೋಷಕರು, ಶಿಕ್ಷಕರು ಮತ್ತು ಗ್ರಾಮಸ್ಥರು ಹೆಮ್ಮೆ ಪಡುವಂತಹ ಸಾಧನೆ ಮಾಡಬಹುದು.
ನಾಗಮಂಗಲ: ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೊಡ್ಡ ಕನಸುಗಳನ್ನು ಕಾಣುತ್ತಲೇ ಅದನ್ನು ನನಸು ಮಾಡಿಕೊಳ್ಳಲು ನಿರಂತರ ಪರಿಶ್ರಮ ಪಡಬೇಕು. ಆಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಪಾಂಡವಪುರ ಉಪವಿಭಾಗಾಧಿಕಾರಿ ಎ.ಆರ್. ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ದೇವಲಾಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮದೊಂದಿಗೆ ನಿರಂತರವಾಗಿ ಓದುವ ಅಭ್ಯಾಸ ಮೈಗೂಡಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು.ಛಲ, ಪ್ರತಿಭೆ, ಆತ್ಮವಿಶ್ವಾಸ ಮತ್ತು ಬದ್ಧತೆಗಳು ಇದ್ದಲ್ಲಿ ಜೀವನದಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ. ತಮ್ಮ ವಿದ್ಯಾರ್ಥಿ ಜೀವನದ ಕ್ಷಣಗಳನ್ನು ಸ್ಮರಿಸಿಕೊಂಡು ಪ್ರಸ್ತುತ ಹುದ್ದೆವರೆಗೂ ಸಾಗಿ ಬಂದ ಹಾದಿಯನ್ನು ಮಕ್ಕಳೊಂದಿಗೆ ಹಂಚಿಕೊಂಡು ಸ್ಫೂರ್ತಿ ತುಂಬಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ವೇಳಾ ಪಟ್ಟಿ ಈಗಾಗಲೇ ಪ್ರಕಟವಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಸಕಾರಾತ್ಮಕ ಮನೋಧೋರಣೆ ಹಾಗೂ ಓದಿದ್ದನ್ನು ಪದೇ ಪದೇ ಮನನ ಮಾಡಿಕೊಂಡು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿದರೆ ಪೋಷಕರು, ಶಿಕ್ಷಕರು ಮತ್ತು ಗ್ರಾಮಸ್ಥರು ಹೆಮ್ಮೆ ಪಡುವಂತಹ ಸಾಧನೆ ಮಾಡಬಹುದು ಎಂದರು.ಶಾಲೆಯ ಕಲಿಕಾ ಪರಿಸರ ಹಾಗೂ ಮಕ್ಕಳ ಭಾಗವಹಿಸುವಿಕೆಯನ್ನು ಮುಕ್ತಕಂಠದಿಂದ ಶ್ಲಾಘಿಸಿ, ದಾನಿಗಳ ನೆರವಿನಿಂದ ಈ ಶಾಲೆಯನ್ನು ಮತ್ತಷ್ಟು ಸಶಕ್ತಗೊಳಿಸುವ ಭರವಸೆ ನೀಡಿದರು. ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ಅಗತ್ಯ ಮಾರ್ಗದರ್ಶನ ನೀಡಿದರು.
ಈ ವೇಳೆ ಶಾಲೆ ಮುಖ್ಯಸ್ಥ ಎನ್.ಸಿ.ಶಿವಕುಮಾರ್, ಶಿಕ್ಷಕರಾದ ಗಿರೀಶ್, ತೋಂಟಾರಾಧ್ಯ, ಇಂದ್ರೇಶ್, ಅಂದಾನಿಗೌಡ, ನವೀನ್, ಕಾಂತರಾಜು, ಶ್ಯಾಮಲಾ, ಸಮ್ಯ ಸೇರಿದಂತೆ ಹಲವರು ಇದ್ದರು.