ಕನ್ನಡಪ್ರಭ ವಾರ್ತೆ ಮದ್ದೂರು
ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಗೆಜ್ಜಲಗೆರೆ ಗ್ರಾಮಕ್ಕೆ ಟ್ಯಾಂಕರ್ ಗಳ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.ಗ್ರಾಮದ ಗ್ರಾಪಂ ಆವರಣದಲ್ಲಿ ಗೆಜ್ಜಲಗೆರೆ ಗ್ರಾಮವನ್ನು ನಗರಸಭೆಗೆ ಸೇರ್ಪಡೆ ವಿರೋಧಿಸಿ ಸುಮಾರು 123 ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಗುರುವಾರ ರಾತ್ರಿ ಆಗಮಿಸಿ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.ಅಧಿಕಾರಿಗಳು ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡದ ಹಿನ್ನೆಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಇದನ್ನು ಮನಗಂಡು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಟ್ಯಾಂಕರ್ ಗಳ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದಾರೆ. ಗ್ರಾಮದ ಜನತೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಧೈರ್ಯ ತುಂಬಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ಸರಬರಾಜು ಮಾಡುತ್ತಿದ್ದ ಬೋರ್ ವೆಲ್ ಮೂರ್ನಾಲ್ಕು ದಿನಗಳಿಂದ ಕೆಟ್ಟು ಹೋಗಿದೆ. ಗ್ರಾಮದ ಜನತೆ ಸಾಕಷ್ಟು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ನಿರ್ವಹಣೆಯನ್ನು ತಾಲೂಕು ಅಥವಾ ಜಿಲ್ಲಾಡಳಿತ ಮಾಡಬೇಕು. ಅದು ಬಿಟ್ಟು ನಗರಸಭೆ ಅಧಿಕಾರಿಗಳು ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.ಗ್ರಾಮಕ್ಕೆ ಕುಡಿಯುವ ನೀರು ಸೇರಿದಂತೆ ದಿನ ಬಳಕೆಗೆ ಬೇಕಾಗುವ ನೀರಿನ ವ್ಯವಸ್ಥೆಯನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಟ್ಯಾಂಕರ್ ಗಳ ಮೂಲಕವೇ ಪೂರೈಸುವ ಭರವಸೆ ನೀಡಿದ್ದಾರೆ. ಈಗಾಗಲೇ ಗ್ರಾಮಕ್ಕೆ ಎರಡು ಟ್ಯಾಂಕರ್ ಗಳ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದೆ. ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಮುಗಿಯುವವರೆಗೂ ಜನತೆಗೆ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ರೈತ ನಾಯಕಿ ಸುನಂದ ಜಯರಾಂ, ತಾಪಂ ಮಾಜಿ ಅಧ್ಯಕ್ಷ ಜಿ.ಪಿ.ಯೋಗೇಶ್, ಮುಖಂಡರಾದ ಲಿಂಗಪ್ಪಾಜಿ, ಜಿ.ಎ.ಶಂಕರ್, ಗುರು, ವೀರಪ್ಪ, ಮೋಹನ್, ಚಂದ್ರಶೇಖರ್, ಶಿವನಂಜು, ಪ್ರತಾಪ್ ಇದ್ದರು.