ಸಾರಾಂಶ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಗುರುವಾರ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪಾಲಿಕೆ ಅಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆಗೆ ನೀರು ಸರಬರಾಜು ಮಾಡುವ ಬಂಟ್ವಾಳದ ತುಂಬೆ ಡ್ಯಾಂನಲ್ಲಿ 5.70 ಮೀಟರ್ ನೀರು ಇದ್ದು, ಎಎಂಆರ್ ಅಣೆಕಟ್ಟಿನಲ್ಲಿ ನೀರಿನ ಮಟ್ಟ 18.9 ಮೀಟರ್ ಇದೆ ಎಂದು ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲು ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪಾಲಿಕೆ ಅಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆಗೆ ನೀರು ಸರಬರಾಜು ಮಾಡುವ ಬಂಟ್ವಾಳದ ತುಂಬೆ ಡ್ಯಾಂನಲ್ಲಿ 5.70 ಮೀಟರ್ ನೀರು ಇದ್ದು, ಎಎಂಆರ್ ಅಣೆಕಟ್ಟಿನಲ್ಲಿ ನೀರಿನ ಮಟ್ಟ 18.9 ಮೀಟರ್ ಇದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದಲ್ಲಿ ಅಥವಾ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ಅಧಿಕಾರಿಗಳು ತಮ್ಮ ಹಂತದಲ್ಲಿ ವ್ಯವಸ್ಥಿತವಾಗಿ ಕ್ರಮವಹಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾಧಿಕಾರಿ ಸೂಚಿಸಿದರು. ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕವೂ ನೀರು ಸರಬರಾಜು ಮಾಡಲು ಅವರು ತಿಳಿಸಿದರು. ನಗರ ಪ್ರದೇಶಗಳಲ್ಲಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರಿನ ಸರಬರಾಜು ನಿರ್ವಹಣೆ ಮಾಡಲು ಜಿಲ್ಲಾಧಿಕಾರಿಗಳು ತಿಳಿಸಿದರು. ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ತಪ್ಪಿಸಲು ರಸ್ತೆ ಬದಿಗಳ, ಕಾಡಿನ ಒಳಗಡೆ ಇರುವ ವಿದ್ಯುತ್ ಲೈನ್‍ಗಳು ಗಾಳಿಗೆ ತಾಗಿಕೊಂಡು ಬೆಂಕಿ ಕಿಡಿ ಹಾರದಂತೆ, ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಉಂಟಾಗುವ ಬೆಂಕಿಯ ಕಿಡಿಗಳು ಒಣಗಿದ ಹುಲ್ಲು ಮತ್ತು ಗಿಡ ಗಂಟೆಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಮುಂಜಾಗ್ರತಾ ಕ್ರಮವಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು, ಮತ್ತು ಅಗ್ನಿಶಾಮಕ ನಡೆದ ಅಧಿಕಾರಿಗಳೊಂದಿಗೆ ಸಭೆಯನ್ನು ಕ್ಷೇತ್ರ ಮಟ್ಟದಲ್ಲಿ ನಡೆಸಬೇಕು. ಬೆಂಕಿ ನಂದಿಸುವ ಸಲಕರಣೆಗಳನ್ನು ಮುಂಚಿತವಾಗಿ ಖರೀದಿಸಬೇಕು ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗೆ ಅವರು ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ ಮತ್ತಿತರರಿದ್ದರು.