ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ಜಿಲ್ಲೆಯ ಕೆರೆಗಳಿಗೆ ಕುಡಿಯುವ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದೆ. ಉಳಿದಂತೆ, ಪ್ರಸ್ತುತ 15 ಗ್ರಾಮಗಳಲ್ಲಿ 17 ಖಾಸಗಿ ಕೊಳವೆಬಾವಿ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಧಾರವಾಡ:
ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಕೈಗೊಂಡು ವರದಿ ಸಲ್ಲಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.ಪ್ರಾಧಿಕಾರದ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಶುಕ್ರವಾರ ಸಭೆ ಜರುಗಿಸಿದ ಅವರು, ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ಜಿಲ್ಲೆಯ ಕೆರೆಗಳಿಗೆ ಕುಡಿಯುವ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದೆ. ಉಳಿದಂತೆ, ಪ್ರಸ್ತುತ 15 ಗ್ರಾಮಗಳಲ್ಲಿ 17 ಖಾಸಗಿ ಕೊಳವೆಬಾವಿ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದ ಅವರು, ಪ್ರಸ್ತುತ 53 ನೀರು ಪೂರೈಕೆ ಟ್ಯಾಂಕರ್‌ಗಳಿದ್ದು, ಮುಂಜಾಗೃತೆ ಕ್ರಮವಾಗಿ ಬೇಸಿಗೆಯಲ್ಲಿ ಕುಡಿಯುವ ನೀರು ಅಗತ್ಯವಾದ ಗ್ರಾಮ ಅಥವಾ ವಾರ್ಡ್‌ಗಳಿಗೆ ತಕ್ಷಣ ನೀರು ಪೂರೈಕೆ ಮಾಡಲು ಅನುವುವಾಗುವಂತೆ ಹೆಚ್ಚುವರಿ ನೀರಿನ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದರು.
60 ಕೆರೆ ಭರ್ತಿ:ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕುಗಳಲ್ಲಿ ನವಿಲುತೀರ್ಥ ಜಲಾಶಯದಿಂದ ಕುಡಿಯುವ ನೀರಿನ 60 ಕೆರೆಗೆ ನೀರು ಭರ್ತಿ ಮಾಡಿಕೊಳ್ಳಲಾಗಿದೆ. ಇನ್ನು, ಜಿಲ್ಲೆಯ ಐದು ಸ್ಥಳೀಯ ನಗರ ಸಂಸ್ಥೆಗಳಲ್ಲಿ 100 ವಾರ್ಡ್‌ಗಳಿದ್ದು, ಯಾವುದೇ ವಾರ್ಡ್‌ಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. 80 ವಾರ್ಡ್‌ಗಳಲ್ಲಿ ಪ್ರತಿ ದಿನ ನೀರು ಪೊರೈಕೆ ಮಾಡಲಾಗುತ್ತಿದ್ದು, ಉಳಿದ 20ರಲ್ಲಿ 2 ರಿಂದ 3 ದಿನಗಳ ವರೆಗೆ ನೀರು ಸರಬರಾಜಿದೆ. ಐದು ಸ್ಥಳೀಯ ನಗರ ಸಂಸ್ಥೆಗಳಲ್ಲಿನ ಕೆರೆಗಳಲ್ಲಿ ಕುಡಿಯುವ ನೀರಿನ ಶೇಖರಣೆ ಸಾಕಷ್ಟು ಇರುವುದರಿಂದ ಪ್ರಸ್ತುತ ಬೇಸಿಗೆ ಅವಧಿಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರದ ವ್ಯಾಪ್ತಿಯಲ್ಲಿ 82 ವಾರ್ಡ್‌ಗಳಿದ್ದು, ಅದರಲ್ಲಿ 13 ವಾರ್ಡ್‌ಗಳಲ್ಲಿ 24 ಗಂಟೆ ನೀರು ಪೊರೈಕೆ ಮಾಡಲಾಗುತ್ತಿದೆ. ಉಳಿದ ವಾರ್ಡ್‌ಗಳಲ್ಲಿ 2ರಿಂದ 7 ದಿನಗಳ ವರೆಗೆ ನೀರು ಸರಬರಾಜು ಮಾಡಲಾಗುತ್ತಿದೆ. ಮಹಾನಗರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸರಬರಾಜು ಕುಂದು ಕೊರತೆಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ 7996666247 ಆರಂಭಿಸಲಾಗಿದೆ ಎಂದು ಸ್ನೇಹಲ್ ಹೇಳಿದರು.ಮೇವಿನ ಲಭ್ಯತೆ:
ಜಿಲ್ಲೆಯಲ್ಲಿ ೨,೩೫,೦೫೯ ಜಾನುವಾರುಗಳಿದ್ದು, ೫,೧೬,೮೩೪.೮೧ ಟನ್ ಗಳಷ್ಟು ಮೇವಿನ ದಾಸ್ತಾನುವಿದ್ದು, ೫೦ ವಾರಗಳಿಗೆ ಆಗಲಿದೆ. ಹೀಗಾಗಿ ಮೇವಿನ ಸಮಸ್ಯೆ ಉದ್ಭವಿಸುವುದಿಲ್ಲ ಎಂದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಗರಿಷ್ಟ ತಾಪಮಾನ 37.6 ರಿಂದ 38.6 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚು ತಾಪಮಾನ ದಾಖಲಾಗಿದೆ. ಅತೀ ಹೆಚ್ಚು ತಾಪಮಾನ ಪ್ರತಿಕೂಲ ಪರಿಣಾಮ ತಡೆಗೆ ಸರ್ಕಾರ ಹಾಗೂ ಜಿಲ್ಲಾಡಳಿತ ನೀಡಿರುವ ಸಲಹೆ, ಸೂಚನೆಗಳನ್ನು ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮಗಳಾಗಿ ಪಾಲಿಸಬೇಕು. ಸಾಕಷ್ಟು ನೀರು ಕುಡಿಯುವುದು, ತಿಳಿ, ಸಡಿಲ ಮತ್ತು ಹತ್ತಿ ಬಟ್ಟೆ ಧರಿಸುವುದು, ಕನ್ನಡಕ, ಛತ್ರಿ, ಟೋಪಿ ಬಳಸುವುದು, ಶ್ರಮದಾಯಕ ಚಟುವಟಿಕೆ ತಪ್ಪಿಸುವುದು ಹಾಗೂ ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯ ಸೇವಿಸಬೇಕು ಎಂಬ ಸಲಹೆ ನೀಡಿದರು.ಸಭೆಯಲ್ಲಿ ಜಿಪಂ ಸಿಇಒ ಭುವನೇಶ ಪಾಟೀಲ, ಎಸ್ಪಿ ಗುಂಜನ್ ಆರ್ಯ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸೇರಿದಂತೆ ಕೃಷಿ, ತೋಟಗಾರಿಕೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ನೀರಾವರಿ ಇಲಾಖೆ, ಎಲ್ಲ ತಾಲೂಕುಗಳ ತಹಸೀಲ್ದಾರ್‌ರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿದ್ದರು.