ಬರಗಾಲದ ಪರಿಣಾಮ ತಾಲೂಕಿನ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಕಳಮಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಗ್ರಾಮದ ಎರಡು ಬೋರ್‌ವೆಲ್‌ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಜನರು ನೀರಿನ ಕೊರತೆ ಎದುರಿಸುವಂತಾಗಿದೆ.

ಪರಶಿವಮೂರ್ತಿ ಮಾಟಲದಿನ್ನಿ

ಕುಷ್ಟಗಿ: ಬರಗಾಲದ ಪರಿಣಾಮ ತಾಲೂಕಿನ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಕಳಮಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಗ್ರಾಮದ ಎರಡು ಬೋರ್‌ವೆಲ್‌ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಜನರು ನೀರಿನ ಕೊರತೆ ಎದುರಿಸುವಂತಾಗಿದೆ. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದರೂ ಜನರ ಅಗತ್ಯಕ್ಕೆ ತಕ್ಕಷ್ಟು ನೀರು ದೊರೆಯುತ್ತಿಲ್ಲ ಎಂಬ ಅಳಲು ಗ್ರಾಮಸ್ಥರಿಂದ ಕೇಳಿಬರುತ್ತಿದೆ.

ಗ್ರಾಮದ ಕುಡಿಯುವ ನೀರಿನ ಪ್ರಮುಖ ಆಧಾರವಾಗಿದ್ದ ಎರಡು ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ನೀರಿನ ಲಭ್ಯತೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದ ಕುಡಿಯುವ ನೀರು, ಅಡುಗೆ ಸೇರಿದಂತೆ ದಿನನಿತ್ಯದ ಬಳಕೆಗೆ ನೀರು ಹೊಂದಿಸಿಕೊಳ್ಳಲು ಜನರು ಪರದಾಡುವಂತಾಗಿದೆ.

ಆರು ಟ್ಯಾಂಕರ್ ನೀರು ಪೂರೈಕೆ: ನೀರಿನ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಗ್ರಾಪಂನವರು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮೂಲಕ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದೆ. ಸದ್ಯ ಪ್ರತಿದಿನ ಆರು ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಆದರೂ ಗ್ರಾಮಸ್ಥರ ಅಗತ್ಯಕ್ಕೆ ಅನುಗುಣವಾಗಿ ನೀರು ದೊರೆಯುತ್ತಿಲ್ಲ. ಟ್ಯಾಂಕರ್ ನೀರನ್ನೇ ಅವಲಂಬಿಸಿರುವ ಕುಟುಂಬಗಳು ನೀರನ್ನು ಮಿತವಾಗಿ ಬಳಸಬೇಕಾದ ಅನಿವಾರ್ಯತೆ ಎದುರಾಗಿದೆ.

ಅರಣ್ಯ ಪ್ರದೇಶದಲ್ಲಿ ಪದೇ ಪದೇ ಪೈಪ್‌ಲೈನ್ ಹಾನಿ: ಗ್ರಾಮಕ್ಕೆ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ನೀರು ಸರಬರಾಜು ವ್ಯವಸ್ಥೆ ಇದ್ದರೂ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹಾದುಹೋಗಿರುವ ಪೈಪ್‌ಲೈನ್ ಪದೇ ಪದೇ ಒಡೆಯುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಪೈಪ್‌ಲೈನ್ ದುರಸ್ತಿಯಾದರೂ ಮತ್ತೆ ಹಾನಿಯಾಗುತ್ತಿರುವುದರಿಂದ ಗ್ರಾಮಕ್ಕೆ ನಿರಂತರವಾಗಿ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜೆಜೆಎಂ ಯೋಜನೆಯ ನೀರು ಸದ್ಯ ಗ್ರಾಮಸ್ಥರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ.

ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ: ಬರಗಾಲದ ಪರಿಣಾಮ ಅಂತರ್ಜಲ ಮಟ್ಟ ಕುಸಿಯುತ್ತಿರುವ ಜತೆಗೆ ಜೆಜೆಎಂ ನೀರು ಸರಬರಾಜಿನಲ್ಲೂ ವ್ಯತ್ಯಯ ಉಂಟಾಗಿರುವುದು ಗ್ರಾಮಸ್ಥರ ಸಂಕಷ್ಟ ಹೆಚ್ಚಿಸಿದೆ. ಟ್ಯಾಂಕರ್ ಮೂಲಕ ನೀರು ಪೂರೈಸುವುದು ತಾತ್ಕಾಲಿಕ ಪರಿಹಾರವಾಗಿದ್ದು, ಹೊಸ ಬೋರ್‌ವೆಲ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಶೀಘ್ರ ಬಳಕೆಗೆ ತರಬೇಕು.

ಆರ್‌ಡಬ್ಲ್ಯೂಎಸ್ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಪ್ರಕ್ರಿಯೆಯನ್ನೂ ತ್ವರಿತಗೊಳಿಸಿ ಗ್ರಾಮಕ್ಕೆ ನಿರಂತರ ಕುಡಿಯುವ ನೀರು ಪೂರೈಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ನೀರಿನ ಸಮಸ್ಯೆ ಇತ್ಯರ್ಥಕ್ಕೆ ಕ್ರಮ: ಕಳಮಳ್ಳಿ ಗ್ರಾಮದ ಎರಡು ಬೋರ್‌ವೆಲ್‌ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸಮಸ್ಯೆ ಎದುರಾಗಿದೆ. ಸದ್ಯ ದಿನಕ್ಕೆ ಆರು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಕಿಲ್ಲಾರಹಟ್ಟಿ ಪಿಡಿಒ ಶಂಕ್ರಪ್ಪ ಎಂ. ಹೇಳಿದರು. ಇತ್ತೀಚೆಗೆ ಹೊಸದಾಗಿ ಕೊರೆಸಿದ ಬೋರ್‌ವೆಲ್‌ನಲ್ಲಿ ನೀರು ದೊರೆತಿದ್ದು, ಅದನ್ನು ಬಳಕೆಗೆ ತರಲು ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜೆಸ್ಕಾಂ ಅಧಿಕಾರಿಗಳೊಂದಿಗೆ ಮಾತನಾಡಲಾಗಿದೆ. ಆದಷ್ಟು ಬೇಗ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಿನ ಸಮಸ್ಯೆ ಇತ್ಯರ್ಥಗೊಳಿಸಲಾಗುವುದು. ಅರಣ್ಯ ಪ್ರದೇಶದಲ್ಲಿ ಪದೇ ಪದೇ ಪೈಪ್‌ಲೈನ್ ಒಡೆಯುತ್ತಿರುವುದರಿಂದ ಜೆಜೆಎಂ ಯೋಜನೆಯಡಿ ನೀರು ಪೂರೈಕೆಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಡಬ್ಲ್ಯೂಎಸ್ ಮೂಲಕ ಪರ್ಯಾಯವಾಗಿ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.