ಗ್ಯಾರಂಟಿ ಯೋಜನೆ ಕುರಿತ ವಸ್ತು ಪ್ರದರ್ಶನಕ್ಕೆ ಚಾಲನೆ

| Published : Mar 09 2024, 01:32 AM IST

ಸಾರಾಂಶ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಇನ್ನಿತರ ಯೋಜನೆಗಳ ಕುರಿತು ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಆಯೋಜಿಸಿರುವ ವಸ್ತು ಪ್ರದರ್ಶನಕ್ಕೆ ಚಾಲನೆ ದೊರೆತಿದೆ.

ಶಾಸಕ ಸಿ. ಪುಟ್ಟರಂಗಶೆಟ್ಟಿ ಉದ್ಘಾಟನೆ । ಜಿಲ್ಲಾಧಿಕಾರಿ ಶಿಲ್ಪಾನಾಗ್ ಭಾಗಿ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಇನ್ನಿತರ ಯೋಜನೆಗಳ ಕುರಿತು ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಆಯೋಜಿಸಿರುವ ವಸ್ತು ಪ್ರದರ್ಶನಕ್ಕೆ ಚಾಲನೆ ದೊರೆತಿದೆ.

ಮಾ.8 ರಿಂದ 10 ರವರೆಗೆ ನಡೆಯಲಿರುವ ವಸ್ತು ಪ್ರದರ್ಶನವನ್ನು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಸ್ತು ಪ್ರದರ್ಶನ ಯಶಸ್ವಿಯಾಗಿ ನಡೆಯಲೆಂದು ಹಾರೈಸಿದರು. ಶಾಸಕರು ಹಾಗೂ ಜಿಲ್ಲಾಧಿಕಾರಿ ವಸ್ತು ಪ್ರದರ್ಶನದಲ್ಲಿ ಅಳವಡಿಸಿರುವ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಚಾರ ಮಾಹಿತಿಗಳನ್ನು ವೀಕ್ಷಿಸಿದರು. ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವಲ್ಲಿ ವಸ್ತು ಪ್ರದರ್ಶನ ಚೆನ್ನಾಗಿ ಮೂಡಿ ಬಂದಿದೆ ಎಂದು ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪರಿಪೂರ್ಣವಾಗಿ ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆ, ಇನ್ನಿತರ ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು. ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ಇತರೆ ಅಭಿವೃದ್ದಿ ಕಾರ್ಯಕ್ರಮಗಳನ್ನು ಜನರಿಗೆ ಅರಿವು ಮೂಡಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎ. ರಮೇಶ್, ಇನ್ನಿತರ ಅಧಿಕಾರಿಗಳು ಇದ್ದರು.