ಸಾರಾಂಶ
ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಶಾಲೆಗಳನ್ನು ರಕ್ಷಿಸಿ ಅವುಗಳನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ
ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಶಾಲೆಗಳನ್ನು ರಕ್ಷಿಸಿ ಅವುಗಳನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.ಪಟ್ಟಣದ ಆಂಜನೇಯ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು ಮತ್ತು ಪೋಷಕರು ಶಾಲೆಗಳಿಗೆ ನಿರಂತರವಾಗಿ ಭೇಟಿ ನೀಡಬೇಕೆಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲೂಕುಗಳು ಕಳೆದ ಶೈಕ್ಷಣಿಕ ಸಾಲಿನಲ್ಲಿ 9ನೇ ಸಾಲಿನಲ್ಲಿದ್ದವು, ಆದರೆ ಈ ಬಾರಿ 4ನೇ ಸ್ಥಾನಕ್ಕೇರಿದ್ದು, ಇದಕ್ಕಾಗಿ ಶ್ರಮಿಸಿದ ಶಿಕ್ಷಕ ವರ್ಗಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದರೆ ದೊರೆಯುವ ಸವಲತ್ತುಗಳು ಮತ್ತು ಭವಿಷ್ಯದಲ್ಲಿ ಆಗುವ ಅನುಕೂಲದ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಿ ಎಂದು ಸಲಹೆ ನೀಡಿದರು.
ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಲು ಅಗತ್ಯ ಸಲಕರಣೆ ಕೊಡಿಸುವುದರ ಜತೆಗೆ ರಂಗ ಮಂಟಪ ನಿರ್ಮಾಣಕ್ಕೆ ಅನುದಾನ ನೀಡಿ ಶೀಘ್ರದಲ್ಲಿಯೆ ಕಾಮಗಾರಿಗೆ ಚಾಲನೆ ಕೊಡುವುದಾಗಿ ಭರವಸೆ ನೀಡಿದರು.ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಾಸಕರನ್ನು ಸನ್ಮಾನಿಸಿತು.
ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಕೆ.ಜಿ. ಸುಬ್ರಹ್ಮಣ್ಯ, ಸದಸ್ಯರಾದ ಶಿವುನಾಯಕ್, ಶಂಕರಸ್ವಾಮಿ, ಮಾಜಿ ಸದಸ್ಯರಾದ ಯೋಗಾನಂದ, ಕೆ. ವಿನಯ್, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ವೈ.ಎಸ್. ಕುಮಾರ್, ನಿರ್ದೇಶಕ ಕೆ.ಎನ್. ಪ್ರಸನ್ನಕುಮಾರ್, ಎಸ್.ಡಿಎಂಸಿ ಅಧ್ಯಕ್ಷೆ ಮೀನಾಕ್ಷಿ, ಬಿಇಒ ಕೃಷ್ಣಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ. ರಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುಕೆಂಚಿ, ವಕ್ತಾರ ಸೈಯ್ಯದ್ ಜಾಬೀರ್, ಶಾಲಾ ಸ್ಥಳ ದಾನಿಗಳ ವಂಶಸ್ಥೆ ಹೇಮಾವತಿ, ಮುಖ್ಯಶಿಕ್ಷಕಿ ಬೇಬಿ ಇದ್ದರು.