ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

| Published : Mar 13 2025, 12:47 AM IST

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
Share this Article
  • FB
  • TW
  • Linkdin
  • Email

ಸಾರಾಂಶ

ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಎಲ್ಲ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಿಂದ ವಂಚಿತರಾಗಿದ್ದು, ಗುಣಮುಖರಾದ ಬಳಿಕ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಕೊಪ್ಪಳ:

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್‌ ಪಲ್ಟಿಯಾದ ಪರಿಣಾಮ 39 ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದರಲ್ಲಿ ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಎಲ್ಲ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಿಂದ ವಂಚಿತರಾಗಿದ್ದು, ಗುಣಮುಖರಾದ ಬಳಿಕ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ತಾಲೂಕಿನ ಹೈದರ್‌ನಗರ-ಕೇಸಲಾಪುರ ಗ್ರಾಮದ ಮಧ್ಯೆ ಬಸ್‌ ಉರುಳಿ ಬಿದ್ದಿದ್ದೆ. ಕೇಸಲಾಪುರದಿಂದ ಅಳವಂಡಿ ಮೂಲಕ ಕೊಪ್ಪಳಕ್ಕೆ ಬರುತಿದ್ದ ಬಸ್‌ ಹದಗೆಟ್ಟ ರಸ್ತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದೆ. ಈ ವೇಳೆ ಬಸ್‌ನಲ್ಲಿ ವಿದ್ಯಾರ್ಥಿಗಳು ಸೇರಿ 70 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬಸ್ ಪಲ್ಟಿಯಾದ ಪರಿಣಾಮ ಹೈದರ್‌ನಗರ ಹಾಗೂ ಕೇಸಲಾಪುರದ ೬, ೭, ೮ನೇ ತರಗತಿಯ ೩೯ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡ ೬ ವಿದ್ಯಾರ್ಥಿಗಳನ್ನು ಗದಗ ಆಸ್ಪತ್ರೆಗೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ೧೫ ಮಕ್ಕಳನ್ನು, ಮುಂಡರಗಿ ತಾಲೂಕು ಆಸ್ಪತ್ರೆಗೆ ೧೮ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇವರ ಜತೆ ಕೆಲ ಪ್ರಯಾಣಿಕರಿಗೂ ಗಾಯವಾಗಿದ್ದು, ಅವರಿಗೂ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ತಹಸೀಲ್ದಾರ ವಿಠ್ಠಲ್ ಚೌಗಲೆ, ತಾಪಂ ಇಒ ದುಂಡಪ್ಪ ತುರಾದಿ, ಬಿಇಒ ಶಂಕ್ರರಯ್ಯ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಯೋಗ ಕ್ಷೇಮ ವಿಚಾರಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ಸಂಸದ ರಾಜಶೇಖರ ಹಿಟ್ನಾಳ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಡಿಡಿಪಿಐ ಶ್ರೀಶೈಲ ಬಿರಾದಾರ ಭೇಟಿ ನೀಡಿ, ಮಕ್ಕಳ ಆರೋಗ್ಯ ಪರಿಶೀಲಿಸಿದರು.

ಗಾಯಗೊಂಡ ೩೯ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ವಾರ್ಷಿಕ ಪರೀಕ್ಷೆಗಳಿದ್ದವು. ಈ ವಿದ್ಯಾರ್ಥಿಗಳು ಗುಣಮುಖರಾದ ಬಳಿಕ ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಬಿಇಒ ಶಂಕ್ರರಯ್ಯ ತಿಳಿಸಿದ್ದಾರೆ.