ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕಾಂತರಾಜು ಗಮನಕ್ಕೆ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಇಲಾಖೆಯ ಜಿಲ್ಲಾ ಅಧಿಕಾರಿ ಹನುಮಂತರಾಯ ಆರ್. ತಮ್ಮ ಸಿಬ್ಬಂದಿಯೊಂದಿಗೆ ಸಮಯಕ್ಕೆ ಸರಿಯಾಗಿ ಘಟನಾ ಸ್ಥಳಕ್ಕೆ ಧಾವಿಸಿ ಕಾರೊಳಗಿದ್ದ ಗಾಯಾಳುಗಳನ್ನು ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಪ್ರಾಣಹಾನಿ ತಪ್ಪಿಸಿದ್ದಾರೆ.
ಕೋಲಾರ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು 5 ಜನ ಗಾಯಗೊಂಡ ಘಟನೆ ತಡರಾತ್ರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ, ಎಸ್‌ಡಿಸಿ ಕಾಲೇಜಿನ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಕೆಂಪು ಬಣ್ಣದ ಕ್ವಾಲೀಸ್ ಕಾರು ಮುಳಬಾಗಿಲುನಿಂದ ಬೆಂಗಳೂರಿನ ಕಡೆಗೆ ಪ್ರಯಾಣಿಸುವ ವೇಳೆ ಏಕಾಏಕಿ ರಾಷ್ಟ್ರೀಯ ಹೆದ್ದಾರಿ ೭೫ ರಿಂದ ಸರ್ವೀಸ್ ರಸ್ತೆಗೆ ಕಾರನ್ನು ತಿರುಗಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸರ್ವೀಸ್ ರಸ್ತೆಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣ ಜಖಂಗೊಂಡಿತ್ತು.
ಅಗ್ನಿಶಾಮಕದಳದ ಸಮಯಪ್ರಜ್ಞೆ: ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕಾಂತರಾಜು ಗಮನಕ್ಕೆ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಇಲಾಖೆಯ ಜಿಲ್ಲಾ ಅಧಿಕಾರಿ ಹನುಮಂತರಾಯ ಆರ್. ತಮ್ಮ ಸಿಬ್ಬಂದಿಯೊಂದಿಗೆ ಸಮಯಕ್ಕೆ ಸರಿಯಾಗಿ ಘಟನಾ ಸ್ಥಳಕ್ಕೆ ಧಾವಿಸಿ ಕಾರೊಳಗಿದ್ದ ಗಾಯಾಳುಗಳನ್ನು ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಪ್ರಾಣಹಾನಿ ತಪ್ಪಿಸಿದ್ದಾರೆ. ಘಟನೆಯಲ್ಲಿ ಕುಮಾರ್(೩೫) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಗ್ನಿಶಾಮಕ ಇಲಾಖೆಯ ಜಿಲ್ಲಾ ಅಧಿಕಾರಿ ಹನುಮಂತರಾಯಪ್ಪ, ಸಿಬ್ಬಂದಿ ಶ್ರೀನಾಥ್, ಗಿರೀಶ್, ಮಹ್ಮದ್ ಖಾಜಿ, ಜೀಪಿನ ಚಾಲಕ ನಾಗಪ್ಪ ನಂದಿ ಇದ್ದರು. ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಸಮಯಪ್ರಜ್ಞೆಗೆ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ.