ಸಚಿವ ಶಿವರಾಜ ತಂಗಡಗಿಯನ್ನು ಸಂಪುಟದಿಂದ ಕೈಬಿಡಿ

| Published : Mar 29 2024, 12:46 AM IST

ಸಾರಾಂಶ

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಸಚಿವ ತಂಗಡಗಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಸಂಸ್ಕೃತಿ ಇಲಾಖೆಯ ಸಚಿವರಾಗಿ ದೇಶದ ಪ್ರಧಾನಿಗಳ ಬಗ್ಗೆ ಹೀನವಾಗಿ ಮಾತನಾಡಿದ್ದಾರೆ.

ಬಳ್ಳಾರಿ: ಯುವಕರು ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ ಸಚಿವ ಶಿವರಾಜ ತಂಗಡಗಿ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಸಚಿವ ತಂಗಡಗಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಸಂಸ್ಕೃತಿ ಇಲಾಖೆಯ ಸಚಿವರಾಗಿ ದೇಶದ ಪ್ರಧಾನಿಗಳ ಬಗ್ಗೆ ಹೀನವಾಗಿ ಮಾತನಾಡಿದ್ದಾರೆ. ಈ ಮೂಲಕ ದೇಶದ ಯುವ ಸಮುದಾಯವನ್ನು ಸಹ ಅವಮಾನಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.ಮುಖ್ಯಮಂತ್ರಿ ಕೂಡಲೇ ಸಚಿವ ಶಿವರಾಜ ತಂಗಡಗಿ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಬೇಕು. ಸಚಿವರ ವಿರುದ್ಧ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು. ಸಚಿವ ತಂಗಡಗಿ ಕೂಡಲೇ ಪ್ರಧಾನಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಡಳಿತಕ್ಕೆ ಆಗಮಿಸಿದ ಯುವ ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಶಿವರಾಜ ತಂಗಡಗಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಡವಿಸ್ವಾಮಿ, ಜಿಲ್ಲಾಧ್ಯಕ್ಷ ಸಿದ್ದಪ್ಪ, ಜಿಲ್ಲಾ ಪ್ರಮುಖರಾದ ಅಂಜಿ ಕಮ್ಮರಚೇಡು, ಸುದರ್ಶನ ರೆಡ್ಡಿ, ರಾಘವೇಂದ್ರ, ಗಿರೀಶ್, ಅರುಣ್ ಬಾಲಚಂದ್ರ, ಓಂ ಪ್ರಕಾಶ್‌ ಸೇರಿದಂತೆ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಸಮಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.