ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮಗಳನ್ನು ಉಂಟುಮಾಡುವುದರ ಜೊತೆಗೆ ಅಪರಾಧ ಚಟುವಟಿಕೆಗೆ ದಾರಿ ಮಾಡಿಕೊಡುತ್ತದೆ ಎಂದು ಪಿಎಸ್ಐ ಮಾಂತೇಶ ಕುಂಬಾರ ಹೇಳಿದರು.
ಬನವಾಸಿ: ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮಗಳನ್ನು ಉಂಟುಮಾಡುವುದರ ಜೊತೆಗೆ ಅಪರಾಧ ಚಟುವಟಿಕೆಗೆ ದಾರಿ ಮಾಡಿಕೊಡುತ್ತದೆ ಎಂದು ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐ ಮಾಂತೇಶ ಕುಂಬಾರ ಹೇಳಿದರು.
ಇಲ್ಲಿಯ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಶಿರಸಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ರಾಜ್ಯಾದ್ಯಂತ ಏಕಕಾಲಕ್ಕೆ ಹಮ್ಮಿಕೊಂಡ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಹಾಗೂ ಸ್ವಾಸ್ಥ್ಯ ಸಂಕಲ್ಪ ಅನ್ ಲೈನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಯುವಜನತೆ ಮತ್ತು ವಿದ್ಯಾರ್ಥಿಗಳು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಿ, ಇಂತಹ ದುಷ್ಚಟಗಳಿಂದ ದೂರವಿದ್ದು ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಪ್ರತಿ ವರ್ಷ ಜೂ. 26ರಂದು ಆಚರಿಸಲಾಗುವ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ಮತ್ತು ಅಕ್ರಮ ಸಾಗಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತುಗಳ ವಿರೋಧಿ ಸಪ್ತಾಹ-2026 ಎಂದು ಆಚರಿಸುತ್ತಿದ್ದು, ಅಂತೆಯೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಜನಜಾಗೃತಿ ವೇದಿಕೆಯ ಮೂಲಕ ಸಾರ್ವಜನಿಕರಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಡ್ರಗ್ಸ್ ನಂತಹ ಮಾರಕ ವ್ಯಸನಗಳಿಗೆ ಬಲಿಯಾಗುತ್ತಿರುವ ಯುವಕರನ್ನು ರಕ್ಷಿಸುವುದು ಇದರ ಮುಖ್ಯ ಗುರಿಯಾಗಿದ್ದು, ಮಾದಕ ವಸ್ತುಗಳನ್ನು ನಾಶಪಡಿಸುವ ಮೂಲಕ ಕಠಿಣ ಸಂದೇಶ ರವಾನಿಸಲಾಗುತ್ತದೆ. ಮಾದಕ ವ್ಯಸನಿಗಳಿಗೆ ಪುನರ್ವಸತಿ ಕೇಂದ್ರಗಳ ಮೂಲಕ ಸೂಕ್ತ ಚಿಕಿತ್ಸೆ ನೀಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಪೊಲೀಸ್ ಇಲಾಖೆ ವತಿಯಿಂದ ಉತ್ತೇಜಿಸಲಾಗುತ್ತಿದೆ. ಮಾದಕ ವಸ್ತುಗಳ ಮಾರಾಟ, ಸಾಗಣೆ ಅಥವಾ ಬಳಕೆಯ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಠಾಣೆಗೆ ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112, ಮಾಹಿತಿ ನೀಡುವ ಮೂಲಕ “ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸುವಂತೆ ಕೋರಿದರು.ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ ಅಕ್ಕಿವಳ್ಳಿ ಮಾತನಾಡಿ, ಮಕ್ಕಳೇ ಈ ದೇಶದ ಆಸ್ತಿಯಾಗಿದ್ದು, ಇಂದು ಮಕ್ಕಳು ಹಾದಿ ತಪ್ಪುತ್ತಿರುವುದು ಕಳವಳಕಾರಿಯಾಗಿದೆ. ಈ ವ್ಯಸನ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವನ್ನೇ ಹಾಳು ಮಾಡುತ್ತದೆ. ಸ್ವಾಸ್ಥ್ಯ ಸಮಾಜ ನಿರ್ಮಾಣ ಕಾರ್ಯದಲ್ಲಿ ನಮ್ಮೊಂದಿಗೆ ಯುವ ಜನತೆ ಕೈಜೋಡಿಸಬೇಕಾಗಿದೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಸಂಘಟನಾ ಉಪಾಧ್ಯಕ್ಷ ಸುಧೀರ ನಾಯರ್ ಮಾತನಾಡಿ, ಯುವಜನತೆ ಇಂತಹ ದುಶ್ಚಟದಿಂದ ದೂರವಿದ್ದು, ಕ್ರೀಡೆ ಮತ್ತು ಉತ್ತಮ ಶೈಲಿಯ ಜೀವನದತ್ತ ಗಮನ ಹರಿಸಬೇಕು ಎಂಬುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಆಶಯವಾಗಿದೆ ಎಂದು ಹೇಳಿದರು.ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಪ್ರಭಾವತಿ ನಾಯ್ಕ್, ಶೋಭಾ ಮೊಗೇರ, ವಲಯ ಮೇಲ್ವಿಚಾರಕಿ ಸುನಂದಾ ನಾಯ್ಕ್ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ಆನ್ ಲೈನ್ ಮುಖಾಂತರ ಧರ್ಮಾಧಿಕಾರಿ ಡಾ. ಡಿ, ವಿರೇಂದ್ರ ಹೆಗ್ಗಡೆ, ಡಾ. ಹೇಮಾವತಿ ಹೆಗ್ಗಡೆ, ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ ಪ್ರಸನ್ನ ಹಾಗೂ ಇನ್ನಿತರ ಸಂಪನ್ಮೂಲ ವ್ಯಕ್ತಿಗಳು ನೀಡಿದ ಮಾಹಿತಿಯನ್ನು 150ಕ್ಕೂ ಅಧಿಕ ವಿದ್ಯಾರ್ಥಿಗಳು ವೀಕ್ಷಿಸಿದರು. ವಲಯ ಮೇಲ್ವಿಚಾರಕಿ ಸುನಂದಾ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ವೀಣಾ ವಂದಿಸಿದರು.