ಮಾದಕ ದ್ರವ್ಯಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಯುವಜನರು ಮಾದಕ ವ್ಯಸನಕ್ಕೆ ಒಳಗಾಗದಂತೆ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಾವೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಸಮೀವುಲ್ಲಾ ಕೆ. ಹೇಳಿದರು.
ಹಾವೇರಿ: ಮಾದಕ ದ್ರವ್ಯಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಯುವಜನರು ಮಾದಕ ವ್ಯಸನಕ್ಕೆ ಒಳಗಾಗದಂತೆ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಾವೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಸಮೀವುಲ್ಲಾ ಕೆ. ಹೇಳಿದರು.
ನಗರದ ಜಿ.ಎಚ್. ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ವತಿಯಿಂದ ಶುಕ್ರವಾರ ಆಯೋಜಿಸಿದ್ದ `ಮಾದಕ ವ್ಯಸನ ಮುಕ್ತ ಯುವಜನರು-ವಿಕಸಿತ ಭಾರತಕ್ಕಾಗಿ'''' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಾದಕ ದ್ರವ್ಯಗಳ ವ್ಯಸನವು ವ್ಯಕ್ತಿಯ ಜೀವನದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬದಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ವಿಶೇಷವಾಗಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ತಮ್ಮ ವಿದ್ಯಾಭ್ಯಾಸ ಹಾಗೂ ಭವಿಷ್ಯದತ್ತ ಗಮನ ಹರಿಸಬೇಕು. ಮಾದಕ ದ್ರವ್ಯಗಳ ಬಳಕೆ ಮತ್ತು ಅದರ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ನಿರಂತರವಾಗಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ.ಎಂ. ಹೊಳ್ಳಿಯವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಸಹಿ ಸಂಗ್ರಹಣಾ ಅಭಿಯಾನ ನಡೆಸಲಾಯಿತು. ವಿದ್ಯಾರ್ಥಿಗಳಿಗಾಗಿ ಸೆಲ್ಫಿ ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಎಚ್.ಎಂ. ಗಾಜಿಗೌಡ್ರ, ನಾಗೇಂದ್ರ ಹಾನಗಲ್, ಹನುಮಂತಪ್ಪ ಭರಮಗೌಡ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಘಟಕ-1ರ ಅಧಿಕಾರಿ ಡಾ. ಶಮಂತಕುಮಾರ್ ಕೆ.ಎಸ್. ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇನ್ನೋರ್ವ ಎನ್‌ಎಸ್‌ಎಸ್ ಅಧಿಕಾರಿ ಉದಯ್ ಕುಮಾರ್ ಕೆ. ವಂದಿಸಿದರು. ಎನ್‌ಎಸ್‌ಎಸ್ ಸ್ವಯಂಸೇವಕ ವಿನೋದ್ ಎಸ್.ಎಂ. ಕಾರ್ಯಕ್ರಮ ನಿರೂಪಿಸಿದರು.