ಕನ್ನಡಪ್ರಭ ವಾರ್ತೆ ಬೆಳಗಾವಿನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸೇವನೆ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು, ಸಾರ್ವಜನಿಕ ಸ್ಥಳಗಳಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ ನಾಲ್ವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಮಾದಕ ವಸ್ತು ಸೇವನೆ ದೃಢಪಟ್ಟ ಹಿನ್ನೆಲೆಯಲ್ಲಿ ಪ್ರತ್ಯೇಕ ನಾಲ್ಕು ಪ್ರಕರಣ ದಾಖಲಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸೇವನೆ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು, ಸಾರ್ವಜನಿಕ ಸ್ಥಳಗಳಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ ನಾಲ್ವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಮಾದಕ ವಸ್ತು ಸೇವನೆ ದೃಢಪಟ್ಟ ಹಿನ್ನೆಲೆಯಲ್ಲಿ ಪ್ರತ್ಯೇಕ ನಾಲ್ಕು ಪ್ರಕರಣ ದಾಖಲಿಸಿದ್ದಾರೆ.ನ.26ರಂದು ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಾಜಿನಗರದ 1ನೇ ಕ್ರಾಸ್ ಹತ್ತಿರ ಅಸಹಜವಾಗಿ ವರ್ತಿಸುತ್ತಿದ್ದ ಅಭಿಜೀತ್ ಭರ್ಮಾ ಪಾಟೀಲ (23) ಎಂಬಾತನನ್ನು ಪಿಎಸ್ಐ ಮಣಿಕಂಠ ಪೂಜಾರಿ ಹಾಗೂ ಸಿಬ್ಬಂದಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಠಾಣೆ ವ್ಯಾಪ್ತಿಯ ಶಿವಾಜಿನಗರದ 4ನೇ ಕ್ರಾಸ್ ಹತ್ತಿರ ಅಸಹಜವಾಗಿ ವರ್ತಿಸುತ್ತಿದ್ದ ಸಿದ್ದಾರ್ಥ ದತ್ತಾ ಕದಂ (24) ಎಂಬಾತನನ್ನು ಪಿಎಸ್ಐ ಪಿ.ಇ. ಗಂಡವ್ವಗೋಳ ಹಾಗೂ ಸಿಬ್ಬಂದಿ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಈತನ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಮತ್ತೊಂದೆಡೆ, ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಂತೇಶ ನಗರದ ಗ್ಲಾಸ್ ಹೌಸ್ ಹತ್ತಿರ ಅಸಹಜವಾಗಿ ವರ್ತಿಸುತ್ತಿದ್ದ ಮೊಹಮ್ಮದ್ ಅರ್ಸಲೇನ್ ಅನೀಸ್ಹೃದ್ ಬಾಗಲಕೋಟೆ (19) ಹಾಗೂ ಅಶೋಕ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ ಗಫ್ರಾನ್ ಅಲಿಯಾಸ್ ಅಶ್ವಾಕ್ ಅನ್ವರ್ ತೆಂಗನಕೇರಿ (20) ಎಂಬುವರನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಇಬ್ಬರೂ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಮಾಳಮಾರುತಿ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ನಾಲ್ವರು ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ ಕಲಂ 27(ಬಿ) ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
