ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಡಿಸಿ ಸೂಚನೆ

| Published : Sep 15 2025, 01:01 AM IST

ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಡಿಸಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದಕ ದ್ರವ್ಯ ಸಮನ್ವಯ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅಧ್ಯಕ್ಷತೆ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಾದಕ ದ್ರವ್ಯ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದಕ ದ್ರವ್ಯ ಸಮನ್ವಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ದುರುಪಯೋಗವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಲು ಈ ಸಮಿತಿ ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಹಂತದಲ್ಲಿ ನಡೆಯುವ ತಪಾಸಣೆ ಮತ್ತು ಪರಿಶೀಲನೆಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಿ, ವರದಿ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಮಾದಕ ದ್ರವ್ಯಗಳ ಅಪಾಯ ಮತ್ತು ದಂಡನೆಗಳ ಕುರಿತು ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಹಕಾರ ಪಡೆದು ಅರಿವು ಮೂಡಿಸಬೇಕು. ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸಿ ತಾಣಗಳಲ್ಲಿ ಮಾದಕ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಪದವಿ ಕಾಲೇಜುಗಳಲ್ಲಿ ಸ್ಥಾಪಿಸಲಾಗಿರುವ ಮಾದಕದ್ರವ್ಯ ವಿರೋಧಿ ಸಮಿತಿಗಳನ್ನು ಸಕ್ರಿಯಗೊಳಿಸಬೇಕು. ಸಂಶಯಾಸ್ಪದ ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಅವರು ಕಾಲೇಜು ಶಿಕ್ಷಣ ಇಲಾಖೆಗೆ ತಿಳಿಸಿದರು. ಅಂಚೆ ಮತ್ತು ಕೆ.ಎಸ್.ಆರ್.ಟಿ.ಸಿ. ಪಾರ್ಸಲ್‍ಗಳನ್ನು ಕೂಲಂಕಶವಾಗಿ ಪರಿಶೀಲಿಸಬೇಕು. ಸಂಶಯಾಸ್ಪದ ಪಾರ್ಸಲ್‍ಗಳ ಬಗ್ಗೆ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದರು. ಮಾದಕ ದ್ರವ್ಯ ಚಟುವಟಿಕೆಗಳು ನಡೆಯುವ ಸಂಶಯಾಸ್ಪದ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಲು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಮಾತನಾಡಿ, ಜಿಲ್ಲಾ ಮಟ್ಟದ ಸಮಿತಿಯಲ್ಲಿರುವ ಇಲಾಖೆಗಳು ತಮ್ಮ ವ್ಯಾಪ್ತಿಯ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಗತ್ಯ ನೆರವು ನೀಡಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.