ಸಾರಾಂಶ
ಕಾರವಾರ: ಮದ್ಯಪಾನ, ಮಾದಕ ವಸ್ತುಗಳ ಚಟಗಳಿಗೆ ಯುವ ಸಮೂಹ ಬಲಿಯಾಗುತ್ತಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಶಂಕರ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.
ಇಲ್ಲಿನ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ.ಘಟಕದ ಆಶ್ರಯದಲ್ಲಿ ಗುರುವಾರ ಆಯೋಜಿಸಲಾದ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಗತ್ತಿನಲ್ಲಿ ಮಾದಕ ವಸ್ತುಗಳು ಅನೇಕ ಬಗೆಯಲ್ಲಿ ಲಭ್ಯವಾಗುತ್ತಿದೆ. ಯುವ ಜನತೆ ಇವುಗಳ ಸೇವನೆಯಿಂದ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುವ ಮೂಲಕ ತಮ್ಮ ಕುಟುಂಬವನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ. ಮದ್ಯಪಾನ, ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗುತ್ತಿದ್ದರೂ ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಇದರ ನಿಯಂತ್ರಣವನ್ನು ಪ್ರತೀ ಮನೆಯಿಂದ ಜಾರಿಗೊಳಿಸುವ ಮೂಲಕ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲೆ ಗೀತಾ ವಾಲೀಕರ್ ಮಾತನಾಡಿ, ಪ್ರಸ್ತುತ ವಾತಾವರಣದಲ್ಲಿ ಯುವ ಜನತೆ ತಮ್ಮ ಮನಸ್ಸನ್ನು ಋಣಾತ್ಮಕ ಯೋಚನೆಗಳಿಗೆ ಅವಕಾಶ ನೀಡುವುದರ ಮೂಲಕ ಶೀಘ್ರದಲ್ಲಿ ಮಾದಕ ವಸ್ತುಗಳ ಸೇವನೆಗೆ ಒಳಗಾಗುತ್ತಾರೆ. ಯುವ ಜನತೆ ತಮ್ಮ ಯಾವುದೇ ಸಮಸ್ಯೆಗಳನ್ನು ಮೊದಲು ತಮ್ಮ ಪಾಲಕರ ಜೊತೆ ಹಂಚಿಕೊಳ್ಳುವುದರ ಮೂಲಕ ಆ ಸಮಸ್ಯೆಗಳನ್ನು ಪರಿಹರಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಜೀವನ ರೂಪಿಸಿಕೊಳ್ಳಬೇಕು ಎಂದರು.
ವಿಶೇಷ ಉಪನ್ಯಾಸ ನೀಡಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.ಸುಹಾಸ್, ಮದ್ಯಪಾನ, ಚರಸ್, ಗಾಂಜಾ, ಕೊಕೇನನಂತಹ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜತೆಗೆ ಕುಟುಂಬದ ಮೇಲೆಯೂ ಪರಿಣಾಮ ಬೀರುತ್ತದೆ. ಮದ್ಯ ಮತ್ತು ಮಾದಕ ವಸ್ತುಗಳ ಸೇವೆನೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ. ಇದರಿಂದ ದೇಹದ ಪ್ರಮುಖಅಂಗಾಂಗಗಳಿಗೆ ಹಾನಿಯಾಗಲಿದೆ. ಮಾನಸಿಕ ಖಿನ್ನತೆ ಕಂಡುಬರಲಿದೆ. ಸೂಕ್ತ ಚಿಕಿತ್ಸೆ ಮತ್ತು ಆಪ್ತ ಸಮಾಲೋಚನೆಯ ಮೂಲಕ ಈ ಪಿಡುಗಿಗೆ ಒಳಗಾಗಿರುವವರನ್ನು ಗುಣಪಡಿಸಲು ಸಾಧ್ಯವಿದೆ. ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಆರೋಗ್ಯಕರ ಜೀವನಶೈಲಿ ಮತ್ತು ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಹಾಗೂ ಹಸಿರು ಕಾಯಿಪಲ್ಯೆ ಒಳಗೊಂಡ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಕ್ರೀಡೆ, ಕಲೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಬೇಕು ಎಂದರು.
ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಶಿವಕುಮಾರ್ ಸ್ವಾಗತಿಸಿದರು. ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಕಿರು ನಾಟಕ ಪ್ರದರ್ಶನ ನಡೆಯಿತು. ಮಹಾವಿದ್ಯಾಲಯದ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಗೀತಾ ತಳವಾರ, ಇಂಗ್ಲೀಷ್ ಪ್ರಾಧ್ಯಾಪಕ ಬಸವರಾಜ ದಳವಾಯಿ, ವಿದ್ಯಾರ್ಥಿನಿ ಶ್ರೀನಿಧಿ ಇದ್ದರು.