ಸಾರಾಂಶ
ಹಾವೇರಿ: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹಾಗೂ ಕಾನೂನಿನಡಿ ವಿಧಿಸುವ ದಂಡ ಮತ್ತು ಶಿಕ್ಷೆ ಬಗ್ಗೆ ಜಿಲ್ಲೆಯ ಎಲ್ಲ ಪದವಿಪೂರ್ವ, ಪದವಿ, ಐಟಿಐ, ಡಿಪ್ಲೊಮಾ, ವೈದ್ಯಕೀಯ ಹಾಗೂ ಎಂಜಿನಿಯರ್ ಕಾಲೇಜುಗಳಲ್ಲಿ ಫಲಕ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ನಾರ್ಕೊ ಸಮನ್ವಯ ಕೇಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವ ಜನಾಂಗಕ್ಕೆ ಮಾದಕ ವಸ್ತುಗಳಿಂದ ಉಂಟಾಗುವ ತೊಂದರೆಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಆಯಾ ಕಾಲೇಜುಗಳು ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳ ಚಲನವಲನ ಗಮನಿಸುತ್ತಿರಬೇಕು ಎಂದರು.ಈಗಾಗಲೇ ಎಲ್ಲ ಪದವಿಪೂರ್ವ ಸೇರಿದಂತೆ ಎಲ್ಲ ಕಾಲೇಜುಗಳು, ವಿದ್ಯಾರ್ಥಿನಿಲಯಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಲು ಹಾಗೂ ಆ್ಯಂಟಿ ಡ್ರಗ್ ಸ್ಕ್ವಾಡ್ ಕಮಿಟಿ ಮಾಡಲು ತಿಳಿಸಲಾಗಿದೆ. ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಕಮಿಟಿ ರಚನೆ ಬಗ್ಗೆ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಿದ ಬಗ್ಗೆ ವರದಿ ನೀಡಬೇಕು ಎಂದು ಅಧಿಕಾರಿಗಳು ಸೂಚಿಸಿದರು.ಪರಿಶೀಲನೆಗೆ ಸೂಚನೆ: ಅರಣ್ಯ ಪ್ರದೇಶದಲ್ಲಿ ಹಾಗೂ ಕೃಷಿ, ತೋಟಗಾರಿಕೆ ಪ್ರದೇಶಗಳಲ್ಲಿ ಗಾಂಜಾ ಹಾಗೂ ಇತರೆ ಮಾದಕ ಪದಾರ್ಥಗಳ ಬೆಳೆ ಬೆಳೆಯುತ್ತಿರುವ ಬಗ್ಗೆ ನಿರಂತರ ನಿಗಾ ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ದಾಬಾಗಳಿಗೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಮಾದಕ ವಸ್ತುಗಳ ಬಳಕೆ ಕುರಿತು ಪರಿಶೀಲನೆ ಮಾಡಬೇಕು.
ಜತೆಗೆ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಬೇಕು. ಸರ್ಕಾರಿ ಬಸ್‌ಗಳಲ್ಲಿ ವಾಹನ ಚಾಲಕರು ಖಾಸಗಿ ವ್ಯಕ್ತಿಗಳ ಪಾರ್ಸಲ್‌ಗಳನ್ನು ತೆಗೆದುಕೊಳ್ಳದಂತೆ ಸೂಚನೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಮಾತನಾಡಿ, ಶಾಲಾ ಶಿಕ್ಷಣ ಇಲಾಖೆಯಿಂದ ಶಾಲಾ ಮುಖ್ಯಶಿಕ್ಷಕರಿಗೆ ಸಭೆ ಆಯೋಜಿಸುವ ಕುರಿತು ಮೊದಲೇ ಮಾಹಿತಿ ನೀಡಿದಲ್ಲಿ ಪೊಲೀಸ್ ಇಲಾಖೆಯಿಂದ ಶಿಕ್ಷಕರಿಗೆ ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಕಾನೂನಡಿ ದಂಡ ಹಾಗೂ ಶಿಕ್ಷೆ ಬಗ್ಗೆ ಜಾಗೃತಿ ಮೂಡಿಸಲಾಗುವುದು.ಆಯಾ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಮಾದಕ ವಸ್ತುಗಳ ಪರಿಣಾಮದ ಕುರಿತು ಜಾಗೃತಿ ಮೂಡಿಸಲು ಅನುಕೂಲವಾಗುತ್ತಿದೆ ಎಂದು ಸಾಗಾಣಿಕೆ ಹಾಗೂ ಮಾದಕ ವ್ಯಸನಿಗಳ ಪತ್ತೆಗೆ ಪೊಲೀಸ್ ಇಲಾಖೆಯೊಂದಿಗೆ ಇತರೆ ಇಲಾಖೆಗಳ ಹಾಗೂ ಸಾರ್ವಜನಿಕ ಸಹಕಾರ ಅಗತ್ಯವಾಗಿದೆ ಎಂದರು. ಆಪ್ತ ಸಮಾಲೋಚನೆ ಮಾಡಿ: ಜೈಲಿನಲ್ಲಿರುವ ಕೈದಿಗಳಿಗೆ ಮಾದಕ ವಸ್ತುಗಳ ವ್ಯಸನಿಗೆ ಮನೋ ವೈದ್ಯರಿಂದ ಆಪ್ತ ಸಮಾಲೋಚನೆ ಮಾಡಿಸಬೇಕು ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಯೋಜಿಸುವಂತೆ ಜಿಲ್ಲಾ ಕಾರಾಗೃಹ ಅಧೀಕ್ಷಕರಿಗೆ ಸೂಚನೆ ನೀಡಿದರು. ಆ್ಯಪ್ ಬಗ್ಗೆ ವ್ಯಾಪಕ ಪ್ರಚಾರ: ಡ್ರಗ್ಸ್ ಫ್ರೀ ಕರ್ನಾಟಕ ಆ್ಯಪ್ ಬಗ್ಗೆ ಎಲ್ಲ ಅಧಿಕಾರಿಗಳು ತಮ್ಮ ಇಲಾಖೆ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಶೇರ್ ಮಾಡಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಡ್ರಗ್ಸ್ ಫ್ರೀ ಕರ್ನಾಟಕ ಆ್ಯಪ್ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಎಂದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ಅರಣ್ಯ, ಕೃಷಿ, ಅಬಕಾರಿ, ವೈದ್ಯಕೀಯ ಕಾಲೇಜು, ಪದವಿಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.