-ಬ್ಯಾಡಗಿ ಪಟ್ಟಣದ ವಾಲ್ಮೀಕಿ ನಗರ ಹಾಗೂ ಅಗಸನಹಳ್ಳಿ ಗ್ರಾಮದಲ್ಲಿ ತಲಾ 5 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾದ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟಿಸಿದರು.

ಬ್ಯಾಡಗಿ: ಬರಗಾಲದ ಸಂದರ್ಭದಲ್ಲಿ ಪ್ರತಿ ಹನಿ ನೀರೂ ಅಮೂಲ್ಯವಾಗಿದ್ದು, ಜನರ ಬಾಯಾರಿಕೆ ನೀಗಿಸುವ ಶುದ್ಧ ಕುಡಿಯುವ ನೀರಿನ ಘಟಕಗಳು ಸಂಜೀವಿನಿಗಳಿದ್ದಂತೆ. ಇಂತಹ ಘಟಕಗಳನ್ನು ಸದ್ಬಳಕೆ ಮಾಡಿಕೊಂಡು, ಅವುಗಳ ನಿರ್ವಹಣೆ ಹಾಗೂ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಪಟ್ಟಣದ ವಾಲ್ಮೀಕಿ ನಗರ ಹಾಗೂ ಅಗಸನಹಳ್ಳಿ ಗ್ರಾಮದಲ್ಲಿ ತಲಾ 5 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾದ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಹಾಗೂ ನೀರಿನ ಸಮಸ್ಯೆಯಿಂದ ಮುಕ್ತಿ ನೀಡಿ ಆರೋಗ್ಯಕರ ಜೀವನಕ್ಕೆ ಅನುಕೂಲ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಪಟ್ಟಣದ ಎಲ್ಲ ವಾರ್ಡಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಹಂತ ಹಂತವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರು ಘಟಕಗಳನ್ನು ಸ್ವಚ್ಛವಾಗಿಟ್ಟುಕೊಂಡು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ನೀರಿನ ಮಹತ್ವ ಅರಿತು ಮಿತವಾಗಿ ಬಳಸುವ ಮೂಲಕ ಮುಂದಿನ ಪೀಳಿಗೆಗೂ ನೀರಿನ ಸಂಪನ್ಮೂಲ ಉಳಿಸಬೇಕಿದೆ ಎಂದರು.

ಮಾಜಿ ಶಾಸಕ ಸುರೇಶಗೌಡ ಪಾಟೀಲ ಮಾತನಾಡಿ, ಶುದ್ಧ ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಅವಶ್ಯಕತೆಯಾಗಿದೆ. ವಿಶೇಷವಾಗಿ ಬೇಸಿಗೆ ಹಾಗೂ ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಮತ್ತು ಪಟ್ಟಣ ಪ್ರದೇಶದ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇಂತಹ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಜನರಿಗೆ ಬಹಳಷ್ಟು ಅನುಕೂಲ ಕಲ್ಪಿಸುತ್ತವೆ. ಸಾರ್ವಜನಿಕ ಹಣದಿಂದ ನಿರ್ಮಾಣವಾಗುವ ಇಂತಹ ಸೌಲಭ್ಯಗಳು ನಿರಂತರವಾಗಿ ಜನರಿಗೆ ತಲುಪುವಂತೆ ನೋಡಿಕೊಳ್ಳುವುದು ಸ್ಥಳೀಯ ಆಡಳಿತ ಹಾಗೂ ಸಾರ್ವಜನಿಕರ ಜವಾಬ್ದಾರಿಯಾಗಿದೆ. ಅಭಿವೃದ್ಧಿ ಕಾರ್ಯಗಳು ಪಕ್ಷಾತೀತವಾಗಿ ಜನರಿಗೆ ತಲುಪಿದಾಗ ಮಾತ್ರ ಅವುಗಳಿಗೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು. ಈ ವೇಳೆ ತಹಸೀಲ್ದಾರ್ ಸಾರಿಕಾ ಶಿಂಗನಮಕ್ಕಿ, ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಪ್ಪಗೋಳ, ರಾಮಣ್ಣ ಕೋಡಿಹಳ್ಳಿ, ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುನಾಫ್ ಎರೇಶಿಮಿ, ಗೀರೀಶ ಇಂಡಿಮಠ, ದುರ್ಗೇಶ ಗೋಣೆಮ್ಮನವರ, ಶಂಭನಗೌಡ ಪಾಟೀಲ, ಶಿವಪ್ಪ ಅಂಬಲಿ ಸೇರಿದಂತೆ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.