ಸಾರಾಂಶ
ಬೆಂಗಳೂರು : ಕಳೆದ ಡಿಸೆಂಬರ್ 4ರಂದು ಮೃತಪಟ್ಟ ಅರ್ಜುನ ಆನೆಯ ಸ್ಮಾರಕಕ್ಕೆ ಜುಲೈನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಸಫಾರಿ ಬಸ್‌ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, 8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆಗೆ ಗೌರವ ಸೂಚಿಸಲು ಆನೆ ಮೃತಪಟ್ಟ ಯಳಸೂರು ಹಾಗೂ ನಾಗರಹೊಳೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಈ ಹಿಂದೆ ಘೋಷಿಸಲಾಗಿತ್ತು. ಅದರಂತೆ ಜುಲೈನಲ್ಲಿ ಎರಡೂ ಕಡೆ ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗುವುದು. ಅರ್ಜುನ ಆನೆಯ ಮೊದಲ ಪುಣ್ಯ ತಿಥಿ ಡಿ. 4ರೊಳಗೆ ಸ್ಮಾರಕದ ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದರು. ಸ್ಮಾರಕ ಸ್ಥಳದಲ್ಲಿ ಅರ್ಜುನ ಅಂಬಾರಿ ಹೊತ್ತ ಚಿತ್ರಗಳು, ಆನೆ, ಹುಲಿ ಮತ್ತು ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಚಿತ್ರಗಳು ಇರಲಿವೆ ಎಂದು ವಿವರಿಸಿದರು.
ಸಿಬ್ಬಂದಿಗೆ ಪ್ರೋತ್ಸಾಹ ಧನ : ಅರಣ್ಯದೊಳಗೆ ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿ ಹಗಲಿರುಳು ಸೇವೆ ಸಲ್ಲಿಸುವ ಸಿಬ್ಬಂದಿಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮಾಸಿಕ 2 ಸಾವಿರ ರು. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ. ಈ ಕುರಿತ ಕಡತವನ್ನು ಹಣಕಾಸು ಇಲಾಖೆ ಅನುಮೋದನೆಗೆ ಸಲ್ಲಿಸಲಾಗಿದ್ದು, ಅನುಮತಿ ದೊರೆತ ಕೂಡಲೇ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಶಾಸಕರಾದ ಎ.ಎಸ್. ಪೊನ್ನಣ್ಣ, ಜಿ.ಡಿ.ಹರೀಶ್ ಗೌಡ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಕಡೆ ಇತರರಿದ್ದರು.