ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಕರ್ತವ್ಯ: ಜಮೀರ್‌ ಅಹಮದ್‌

| Published : Aug 16 2025, 12:00 AM IST

ಸಾರಾಂಶ

ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹೊಸಪೇಟೆ ನಗರಸಭೆ ಸಹಯೋಗದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಹೊಸಪೇಟೆ: ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಎಲ್ಲ ವೀರಯೋಧರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಆಗಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹೊಸಪೇಟೆ ನಗರಸಭೆ ಸಹಯೋಗದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ರಾಷ್ಟ್ರಕ್ಕೆ ಸ್ವಾತಂತ್ರ ತಂದು ಕೊಟ್ಟ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರು, ಸುಭಾಶ್ಚಂದ್ರ ಬೋಸ್‌, ಅಬ್ದುಲ್ ಕಲಾಂ ಆಜಾದ್, ಭಗತ್ ಸಿಂಗ್, ಚಂದ್ರಶೇಖರ ಅಜಾದ್, ರಾಜ್ ಗುರು, ಸುಖ್ ದೇವ್ ಸೇರಿದಂತೆ ಸಾವಿರಾರು ವೀರಯೋಧರನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಪಂಚ ಗ್ಯಾರಂಟಿ ಅನುಷ್ಠಾನಗೊಳಿಸಿದ್ದೇವೆ. ಆರಂಭದಲ್ಲಿ ಈ ಯೋಜನೆಗಳ ಬಗ್ಗೆ ಅನೇಕ ಟೀಕೆಗಳು ಬಂದವು ಎಂದ ಅವರು, ಬಡವರಿಗೆ ಮನೆ ಕಟ್ಟಿಕೊಡುವ 6ನೇ ಗ್ಯಾರಂಟಿ ಘೋಷಣೆ ಮಾಡಿರಲಿಲ್ಲ. ಆದರೆ, ಬಡಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆ ನೀಡುವ ಚಿಂತನೆ ಮಾಡಲಾಗಿದೆ. ಸ್ಲಂ ಬೋರ್ಡ್‌ನಿಂದ 1,80,253 ಮತ್ತು ರಾಜೀವ್ ಗಾಂಧಿ ವಸತಿ ನಿಗಮದಿಂದ 47860 ಮನೆ ಸೇರಿ 2,30,000 ಮನೆಯನ್ನು ಈ ಹಿಂದಿನ ನಮ್ಮ ಸರ್ಕಾರದಲ್ಲಿ ಮಂಜೂರು ಮಾಡಲಾಗಿತ್ತು. ಇವುಗಳು ಕಾರಣಾಂತರದಿಂದ ಹಂಚಿಕೆಯಾಗಲಿಲ್ಲ, ಮುಂದಿನ ದಿನಗಳಲ್ಲಿ ಹಂತ- ಹಂತವಾಗಿ ಮಂಜೂರಾತಿ ನೀಡಲಾಗುವುದು ಎಂದು ತಿಳಿಸಿದರು.

ವಸತಿ ರಹಿತರ ಸಮಸ್ಯೆಗಳಿಗೆ ಸ್ಪಂದಿಸಿ 36799 ಮನೆ ನೀಡಿದ್ದು ₹ 500 ಕೋಟಿ ಬಿಡುಗಡೆ ಮಾಡಲಾಗಿದೆ. 2026ರ ಅಂತ್ಯದೊಳಗೆ ಫಲಾನುಭವಿಗಳಿಗೆ ಪೂರ್ಣ ಪ್ರಮಾಣದಲ್ಲಿ ಸೂರು ಒದಗಿಸುವ ಯೋಜನೆಗೆ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ಮಧ್ಯಮ ವರ್ಗದವರಿಗೆ ಸಾಕಷ್ಟು ಅನುಕೂಲಗಳಾಗಿದ್ದು, ಯಾವುದೇ ಕಾರಣಕ್ಕೂ ಯೋಜನೆಗಳು ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದರು.

ಪ್ರಶಸ್ತಿ ವಿತರಣೆ: 2024ನೇ ಸಾಲಿನ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಂಕರ ನಾಯ್ಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಹಗರಿಬೊಮ್ಮನಹಳ್ಳಿ ಬಿಇಒ ಮೈಲೇಶ್ ಬೇವೂರು, ಜಿಲ್ಲಾ ನಗರಾಭಿವೃದ್ಧಿ ಕೋಶ ಜೆಇ ವೀರೇಶ್, ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆ ವೈದ್ಯ ಡಾ. ಸೋಮಶೇಖರ್, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪ, ಹೊಸಪೇಟೆ ಗ್ರಾಮ ಆಡಳಿತ ಅಧಿಕಾರಿ ಚಂದನಾ ಪವಾರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶೂಶ್ರಷಕಿ ವೀಣಾ, ಅಂಕಸಮುದ್ರ ಗ್ರಾಮ ಆಡಳಿತ ಅಧಿಕಾರಿ ಯಂಕಾರೆಡ್ಡಿ, 2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಹೊಸಪೇಟೆ ಸಹಾಯಕ ಆಯುಕ್ತರಾದ ಪಿ. ವಿವೇಕಾನಂದ, ಹರಪನಹಳ್ಳಿ ತಾಲೂಕು ಚಟ್ನಿಹಳ್ಳಿ ಪಿಡಿಒ ಡಚ್. ಸಂಗಪ್ಪ, ಮಗಿಮಾವಿನಹಳ್ಳಿ ಪಿಎಚ್‌ಸಿ ವೈದ್ಯೆ ಡಾ. ಅನುಷಾ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ಉಚ್ಚಂಗಿದುರ್ಗದ ಉಚ್ಚಂಗಿದೇವಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ, ಹರಪನಹಳ್ಳಿ ತಹಸೀಲ್ದಾರ್‌ ಗಿರೀಶ್ ಬಾಬು, ಹೊಸಪೇಟೆ ತಹಸೀಲ್ದಾರ್ ಎಂ. ಶ್ರುತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮನೋಹರಗೌಡ, ಜಿಲ್ಲಾಧಿಕಾರಿ ಕಚೇರಿ ಗ್ರಾಮ ಆಡಳಿತ ಅಧಿಕಾರಿ ಸವಿತಾ, ಜಿಪಂ ಯೋಜನಾಧಿಕಾರಿ ಜೆ.ಎಂ. ಅನ್ನದಾನಸ್ವಾಮಿ, ಡಿಯುಡಿಸಿ ಯೋಜನಾ ನಿರ್ದೇಶಕ ಮನೋಹರ ಅವರನ್ನು ಸನ್ಮಾನಿಸಲಾಯಿತು.

ಆಕರ್ಷಕ ಪಥಸಂಚಲನ: ಪರೇಡ್ ಕಮಾಂಡರ್ ಗೋವಿಂದ್ ನೇತೃತ್ವದಲ್ಲಿ ಪೊಲೀಸ್, ಗೃಹರಕ್ಷದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ಪೌರಕಾರ್ಮಿಕರು ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಒಳಗೊಂಡಂತೆ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಶಾಸಕ ಎಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಎನ್. ರೂಪೇಶಕುಮಾರ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಅಪರ ಜಿಲ್ಲಾಧಿಕಾರಿ ಈ. ಬಾಲಕೃಷ್ಣಪ್ಪ, ಎಸ್ಪಿ ಅರುಣಾಂಗ್ಷು ಗಿರಿ, ಜಿಪಂ‌ ಸಿಇಒ ಅಲಿ ಅಕ್ರಮ್ ಷಾ ಇದ್ದರು.